ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2025-26ನೇ ಸಾಲಿನ, 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆ ವಿದ್ಯಾಗಿರಿ ಹಾಗೂ ಪುತ್ತಿಗೆ ಆವರಣದಲ್ಲಿ ಭಾನುವಾರ ನಡೆಯಿತು.ರಾಜ್ಯಾದ್ಯಾಂತ 32 ಶೈಕ್ಷಣಿಕ ಜಿಲ್ಲೆಗಳು ಸೇರಿದಂತೆ ಗಡಿಭಾಗದ ಜಿಲ್ಲೆಯಾದ ಕಾಸರಗೋಡು ಹಾಗೂ ಮಹಾರಾಷ್ಟ್ರದ ಗಡಿಜಿಲ್ಲೆಗಳಿಂದ 20134 ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪ್ರವೇಶ ಬಯಸಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ 18634 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು 15 ವರ್ಷಗಳ ಹಿಂದೆ ಪ್ರಾರಂಭಿಸಿ ಸದ್ಯ 640 ವಿದ್ಯಾರ್ಥಿಗಳು ಸಂಪೂರ್ಣ ಉಚಿತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಈ ಶಾಲೆಗಾಗಿ ನಮ್ಮ ಪ್ರತಿಷ್ಠಾನ ಪ್ರತಿ ವಿದ್ಯಾರ್ಥಿಯ ಮೇಲೆ 1.30 ಲಕ್ಷದಂತೆ ಸುಮಾರು 8 ಕೋಟಿ ಹಣ ವಿನಿಯೋಗಿಸುತ್ತಿದೆ. ಸರ್ಕಾರ, ಇಲಾಖೆ, ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯನ್ನು ಮಾದರಿಯಾಗಿ ಪರಿಗಣಿಸಿ, ಇದೇ ರೀತಿಯ ಗುಣಾತ್ಮಕ ಶಿಕ್ಷಣವನ್ನು ನೀಡಿದರೆ ಕನ್ನಡ ಮಾಧ್ಯಮ ಶಾಲೆಗಳಿಗೆ ಎಂದು ಸೋಲಾಗದು ಎಂದರು.
35 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಗಮಿಸಿದ್ದರೂ ಬಹಳ ಅಚ್ಚುಕಟ್ಟಿನ ವ್ಯವಸ್ಥೆಯೊಂದಿಗೆ ಪರೀಕ್ಷೆ ನಡೆಯಿತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಿಗೆ ಆಳ್ವಾಸ್ ಸಂಸ್ಥೆಯ ವತಿಯಿಂದ ವ್ಯವಸ್ಥಿತ ಶೌಚಾಲಯದೊಂದಿಗೆ ಉಚಿತ ತಂಗುವ ವ್ಯವಸ್ಥೆ ಕಲ್ಪಿಸಲಾಗಿತ್ತು. ಸದ್ಯ ಇಡೀ ಕನ್ನಡ ಮಾಧ್ಯಮ ಶಾಲೆಯಲ್ಲಿ 6ರಿಂದ 9ನೇ ತರಗತಿ ವರೆಗೆ 640ಕ್ಕೂ ಅಧಿಕ ಮಕ್ಕಳಿದ್ದು, ಉಚಿತ ಊಟ, ವಸತಿ ವ್ಯವಸ್ಥೆಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.6ರಿಂದ 9ನೇ ತರಗತಿ ವರೆಗಿನ ಪಠ್ಯ ವಿಷಯಗಳು ಮತ್ತು ತಾರ್ಕಿಕ ಸಾಮರ್ಥ್ಯ ಸೇರಿ ಒಟ್ಟು 2 ಗಂಟೆ 30 ನಿಮಿಷದಂತೆ 150 ಅಂಕಗಳಿಗೆ ಪರೀಕ್ಷೆ ನಡೆದಿದೆ.