ಕನ್ನಡಪ್ರಭ ವಾರ್ತೆ ರಾಮನಗರ
ರಾಜ್ಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 250 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಕರ್ನಾಟಕ ಭೀಮ್ ಸೇನೆ ರಾಜ್ಯ ಮುಖ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಗವಿಯಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆಲಂಗಾಣದಲ್ಲಿ 125 ಅಡಿ ಮತ್ತು ಆಂಧ್ರಪ್ರದೇಶದ ವಿಜಯವಾಡದಲ್ಲಿ 206 ಅಡಿ ಎತ್ತರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. ಹಾಗಾಗಿ ನಮ್ಮ ರಾಜ್ಯದಲ್ಲೂ ಸಹ 250 ಅಡಿ ಎತ್ತರದ ಪ್ರತಿಮೆ ನಿರ್ಮಿಸುವಂತೆ 31 ಜಿಲ್ಲೆಗಳಲ್ಲಿ ಅಭಿಯಾನ ನಡೆಸಿ ಸರ್ಕಾರವನ್ನು ಒತ್ತಾಯಿಸುತ್ತಿರುವುದಾಗಿ ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಕೋಲಾರ ಮತ್ತು ಲಾಲ್‌ಬಾಗ್‌ಗೆ ಭೇಟಿ ನೀಡಿರುವ ಇತಿಹಾಸ ಇದೆ. ಆದ್ದರಿಂದ ಲಾಲ್‌ಬಾಗ್‌ನಲ್ಲಿ ಅವರ ಹೆಸರಿನಲ್ಲಿ ಫಲಪುಷ್ಪ ಪ್ರದರ್ಶನ ಮಾಡಿರುವುದು ನಮ್ಮ ಸಮುದಾಯಕ್ಕೆ ಬಹಳ ಸಂತಸವಿದೆ. ಆ ಸ್ಥಳದಲ್ಲಿ ಪ್ರತಿಮೆ ಅನಾವರಣ ಮಾಡಿದರೆ ಅವರಿಗೆ ಗೌರವ ಸಲ್ಲಿಸಿದಂತಾಗುತ್ತದೆ. ಅಲ್ಲದೆ ನಮ್ಮ ಸಮುದಾಯಕ್ಕೆ ದೊಡ್ಡ ಕೊಡುಗೆ ನೀಡಿದಂತಾಗಲಿದೆ ಎಂದರು.ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ ಸೇರಿದಂತೆ ಸರ್ಕಾರದ ಉಪ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ್ದೇವೆ. ಅವರು ಸಹ ಭರವಸೆ ನೀಡಿದ್ದು ಜಾಗ ಗುರುತಿಸುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಹಿಂದುಳಿದ ಸಮುದಾಯ ಪ್ರಮುಖ ಪಾತ್ರ ವಹಿಸಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು 2025- 26 ನೇ ಸಾಲಿನ ಬಜೆಟ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುದಾನ ಮೀಸಲಿಟ್ಟು ಘೋಷಣೆ ಮಾಡಬೇಕೆಂದು ಆಗ್ರಹಿಸಿದರು.
ಕರ್ನಾಟಕ ಭೀಮ್‌ಸೇನೆ ಜಿಲ್ಲಾಧ್ಯಕ್ಷ ಎ.ಗಂಗಾಧರ್ ಮಾತನಾಡಿ, ಬೆಂಗಳೂರಿನ ಪ್ರಸಿದ್ದ ಪ್ರವಾಸಿ ತಾಣವಾದ ಲಾಲ್‌ಬಾಗ್ ಗಾರ್ಡನ್ ಒಟ್ಟು 245 ಎಕರೆ ಪ್ರದೇಶ ಹೊಂದಿದ್ದು, ಪ್ರತಿಮೆ ನಿರ್ಮಾಣಕ್ಕೆ ಇದು ಸೂಕ್ತ ಸ್ಥಳವಾಗಿದೆ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸುತ್ತಾ, ನಮ್ಮ ಬೇಡಿಕೆಯನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಮತ್ತೊಮ್ಮೆ ಒತ್ತಾಯಿಸುವುದಾಗಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಭೀಮ್ ಸೇನೆ ರಾಜ್ಯ ಕಾರ್ಯದರ್ಶಿ ಹೇಮಂತ್‌ಕುಮಾರ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ವಿನೋದ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಸುರೇಶ್‌ಕುಮಾರ್, ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್ ಮತ್ತಿತರರು ಇದ್ದರು.