ಜೆಡಿಎಸ್‌ಗೆ 25: ನಾಡಿದ್ದಿಂದ ರಜತ ಮಹೋತ್ಸವ

KannadaprabhaNewsNetwork |  
Published : Nov 19, 2025, 12:45 AM IST

ಸಾರಾಂಶ

ಜೆಡಿಎಸ್‌ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಜೆಡಿಎಸ್‌ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 25 ವರ್ಷ ಪೂರೈಸಿರುವುದು ಹೆಮ್ಮೆಯ ವಿಚಾರ. ಈ ಹಿನ್ನೆಲೆಯಲ್ಲಿ ರಜತ ಮಹೋತ್ಸವ ಆಚರಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನ.21 (ಶುಕ್ರವಾರ) ಮತ್ತು ನ.22ರಂದು (ಶನಿವಾರ) ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಶುಕ್ರವಾರ ಸಂಜೆ 4.30ಕ್ಕೆ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ನಡೆಯಲಿದೆ. ಸಂಜೆ 5 ಗಂಟೆಗೆ ಕಳೆದ 25 ವರ್ಷಗಳಲ್ಲಿ ಪಕ್ಷ ಬೆಳೆದು ಬಂದ ಹಾದಿ, ಪಕ್ಷದ ನಾಯಕರು ಮಾಡಿದ ಸಾಧನೆಗಳು, ಜನಪರ ಕಾರ್ಯಗಳ ಕುರಿತ ವಸ್ತುಪ್ರದರ್ಶನ ಜರುಗಲಿದೆ. ಸಂಜೆ 6.30ಕ್ಕೆ ದೇಶದ ವಿವಿಧ ರಾಜ್ಯಗಳಿಂದ ಬರುವ ಪಕ್ಷದ ಮುಖಂಡರ ಸಭೆ ಜರುಗಲಿದೆ. ಈ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ರಜತ ಮಹೋತ್ಸವದ ಸಮಾವೇಶ ನಡೆಯಲಿದೆ. ಮಾಜಿ ಪ್ರಧಾನಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ರಾಜ್ಯದ ವಿವಿಧೆಡೆಯಿಂದ ಬರುವ ಸಾವಿರಾರು ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಪಕ್ಷದ ರಾಷ್ಟ್ರೀಯ ಪರಿಷತ್‌ ಹಾಗೂ ರಾಜ್ಯ ಪರಿಷತ್‌ನ ಸಭೆ ಜರುಗಲಿದೆ. ಇದರಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಾಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.

ಜನವರಿಗೆ ಬೃಹತ್‌ ಸಮಾವೇಶ:

ಜನವರಿ ಅಂತ್ಯದಲ್ಲಿ ದೊಡ್ಡ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಈ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಲಕ್ಷಾಂತರ ಕಾರ್ಯಕರ್ತರು ಹಾಗೂ ಮುಖಂಡರು ಆಗಮಿಸಲಿದ್ದಾರೆ. ಈ ಸಮಾವೇಶದ ಮೂಲಕ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಿಂದ ಹಿಡಿದು ವಿಧಾನಸಭೆ, ಲೋಕಸಭಾ ಚುನಾವಣೆಗಳಿಗೆ ಸಿದ್ಧತೆ ಕುರಿತು ಸಂದೇಶ ನೀಡಲಾಗುವುದು ಎಂದರು.

ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾ ರೆಡ್ಡಿ ಮಾತನಾಡಿ, ಪಕ್ಷಕ್ಕೆ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಡಿ.1ರಿಂದ ಜ.15ರ ವರೆಗೆ ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ. 45 ದಿನಗಳ ಕಾಲ ರಜತ ಮಹೋತ್ಸವ ಜರುಗಲಿದೆ. ಈ ಸಂಬಂಧ ಪಕ್ಷದ ತಾಲೂಕು ಮತ್ತು ಜಿಲ್ಲಾ ಮುಖಂಡರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.-ಬಾಕ್ಸ್‌-ನಾಡಿದ್ದು ಶಾಸಕಾಂಗ ಪಕ್ಷದ ಸಭೆ:

ಶುಕ್ರವಾರ ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ಶಾಸಕರೆಲ್ಲಾ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲಿದ್ದೇವೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳು, ಸರ್ಕಾರದ ದುರಾಡಳಿತ ಬೆಳಕಿಗೆ ತರಲು ತಯಾರಿ ಮಾಡಿಕೊಂಡಿದ್ದೇವೆ. ಈ ಬಗ್ಗೆಯೂ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಹೇಳಿದರು.

PREV

Recommended Stories

ರಾಜ್ಯಾದ್ಯಂತ ಐಟಿ ಕ್ಲಸ್ಟರ್‌
ನೆಟ್ವರ್ಕ್ ಸಮಸ್ಯೆ: ಪೊನ್ನಾಚಿ ಗ್ರಾಮಸ್ಧರ ಪ್ರತಿಭಟನೆ