26 ಜಿಲ್ಲೆಗಳಿಗೆ ಮುಂಗಾರು ಕೊರತೆ ಭೀತಿ : ಸಿಎಂ

KannadaprabhaNewsNetwork |  
Published : Apr 17, 2026, 02:00 AM ISTUpdated : Apr 17, 2026, 06:49 AM IST
Monsoon 2026 IMD

ಸಾರಾಂಶ

 ರಾಜ್ಯದ 5 ಜಿಲ್ಲೆ  ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಅವಧಿಯಲ್ಲಿ  ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಬೆಂಗಳೂರು :  ಈ ಬಾರಿ ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಮುಂಗಾರು ಮಳೆ ಕೊರತೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ರೀತಿಯಲ್ಲೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಗುರುವಾರ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ ಹಲವು ಸೂಚನೆಗಳನ್ನು ನೀಡಿದರು.

ಈ ವರ್ಷ ಮುಂಗಾರು ಪೂರ್ವ ಮತ್ತು ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಆಯಾ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆಯಾದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಯಾಗಿಸಲಾಗುವುದು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಬೇಕು ಎಂದು ನಿರ್ದೇಶಿಸಿದರು.

ಕುಡಿಯುವ ನೀರು ಪೂರೈಕೆಗೆ ಅನುದಾನದ ಕೊರತೆಯಿಲ್ಲ. ಸದ್ಯ ಕುಡಿಯುವ ನೀರಿಗಾಗಿ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 419.50 ಕೋಟಿ ರು. ಲಭ್ಯವಿದೆ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅನುದಾನ ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ. ಅದನ್ನು ಬಳಸಿ ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.

598 ಗ್ರಾಪಂಗಳಲ್ಲಿ ಕುಡಿವ ನೀರಿನ ಸಮಸ್ಯೆ:

ಸಭೆಯಲ್ಲಿ ಅಧಿಕಾರಿಗಳು, ಬೇಸಿಗೆಯಲ್ಲಿ 213 ತಾಲೂಕುಗಳ 2410 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ. ಅದರಲ್ಲಿ ಪ್ರಸ್ತುತ 114 ತಾಲೂಕುಗಳ 598 ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 137 ಗ್ರಾಮಗಳಿಗೆ 129 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಜತೆಗೆ 585 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆ ಪಡೆಯಲಾಗಿದ್ದು, ಅದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಲಬುರಗಿ ಜಿಲ್ಲೆಯ 147 ಗ್ರಾಪಂ, ಬಾಗಲಕೋಟೆಯ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಮತ್ತು ಉತ್ತರ ಕನ್ನಡ ಜಿಲ್ಲೆಯ 125 ಗ್ರಾಪಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ. ಉಳಿದಂತೆ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಮುಂದೆ ಇನ್ನೂ 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಅಂದಾಜಿಸಲಾಗಿದೆ. ಒಟ್ಟು 145 ವಾರ್ಡ್‌ಗಳಿಗೆ 57 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, 22 ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ವಿವರಿಸಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅನಿವಾರ್ಯ ಸಂದರ್ಭದಲ್ಲಿ ಟ್ಯಾಂಕರ್‌ ನೀರು ಪೂರೈಕೆ ಮಾಡಬೇಕು. ಅದರ ಬದಲು ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಲು ನಿರ್ಧರಿಸಬೇಕು. ಇನ್ನು, ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿಎಂಸಿ ನೀರು ಲಭ್ಯವಿದ್ದು, ಅದು ಒಟ್ಟು ಸಾಮರ್ಥ್ಯದ ಶೇ. 36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿಎಂಸಿ ನೀರು ಲಭ್ಯವಿತ್ತು. ಇದನ್ನು ಗಮನಿಸಿದರೆ ಜಲಾಶಯಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಬೇಕಾಗುವಷ್ಟು ನೀರು ಲಭ್ಯವಿದೆ ಎಂದರು.

ಮಳೆಗಾಲ ತಡವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೆ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆ ಖಾತ್ರಿಪಡಿಸಬೇಕು. ಅದರಲ್ಲೂ ನೀರಾವರಿಗಿಂತ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ತಾಲೂಕು-ವಾರ್ಡ್‌ಗಳಲ್ಲಿ ನಿಯಂತ್ರಣ ಕೊಠಡಿ:

ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲಿಗೆ ತುರ್ತಾಗಿ ಸ್ಪಂದಿಸಬೇಕು. ಅದಕ್ಕಾಗಿ ತಾಲೂಕು ಹಾಗೂ ವಾರ್ಡ್‌ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್‌ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು. ಎಲ್ಲ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ಫೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ರಸಗೊಬ್ಬರ ಲಭ್ಯತೆ ಖಾತ್ರಿಪಡಿಸಿ:

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಸಮಸ್ಯೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು. ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ತಡೆಯಬೇಕು. ಅದಕ್ಕಾಗಿ ಚೆಕ್‌ಪೋಸ್ಟ್‌ಗಳಲ್ಲಿ ಸಮರ್ಪಕ ತಪಾಸಣೆ ನಡೆಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಎನ್‌. ಚಲುವರಾಯಸ್ವಾಮಿ, ಸತೀಶ್ ಜಾರಕಿಹೊಳಿ, ಬಿ.ಎಸ್‌.ಸುರೇಶ್‌, ಕೃಷ್ಣ ಬೈರೇಗೌಡ, ಪ್ರಿಯಾಂಕ್‌ ಖರ್ಗೆ, ಎಂ.ಬಿ.ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ। ಶಾಲಿನಿ ರಜನೀಶ್‌ ಇದ್ದರು.

ಮುಂಗಾರು ಪೂರ್ವ ಮಳೆ ಕೊರತೆ: 

ಮುಂಗಾರು ಮಳೆ ಸಂಭವನೀಯತೆ:

ವಾಡಿಕೆಗಿಂತ ಹೆಚ್ಚಿನ ಮಳೆ: ಯಾದಗಿರಿ, ಕಲಬುರಗಿ

ವಾಡಿಕೆ ಮಳೆ: ವಿಜಯಪುರ, ರಾಯಚೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ

ವಾಡಿಕೆಗಿಂತ ಕಡಿಮೆ: ಉಳಿದ ಎಲ್ಲ 22 ಜಿಲ್ಲೆಗಳು

ಹೆಚ್ಚು ಬಿಸಿಗಾಳಿಯ ಜಿಲ್ಲೆಗಳು:

*ವಿಜಯನಗರ, ಕೊಪ್ಪಳ, ಗದಗ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್‌, ಧಾರವಾಡ (ಸ್ವಲ್ಪ ಭಾಗ), ಹಾವೇರಿ (ಸ್ವಲ್ಪ ಭಾಗ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಉತ್ತಮ ಸಂಸ್ಕಾರದಿಂದ ಮಕ್ಕಳ ಭವಿಷ್ಯ ಉಜ್ವಲ
ಬಸ್-ಲಾರಿ ನಡುವೆ ಭೀಕರ ಅಪಘಾತ: ಇಬ್ಬರ ಸಾವು