ಕನ್ನಡಪ್ರಭ ವಾರ್ತೆ ಮಡಿಕೇರಿ
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್. ವೀಣಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಗರದ ಗಾಂಧಿ ಭವನದಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಯಿತು.
ನಗರದ ಮಂಗೇರಿರ ಮುತ್ತಣ್ಣ ವೃತ್ತದ ಬಳಿ ಇರುವ ‘ಕುವೆಂಪು ಪ್ರತಿಮೆ’ಗೆ ಮಾಲಾರ್ಪಣೆ ಮಾಡಿ ನಂತರ ಸಭಾ ಕಾರ್ಯಕ್ರಮವು ಗಾಂಧಿ ಭವನದಲ್ಲಿ ನಡೆಯಲಿದ್ದು, ನಿಯಮಾನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ .ರಮೇಶ್, ಕುವೆಂಪು ಅವರು ವಿಶ್ವಮಾನವರಾಗಿದ್ದು, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ವೈಚಾರಿಕ ನೆಲೆಗಟ್ಟಿನಲ್ಲಿ ವಿಶ್ವಮಾನವ ದಿನಾಚರಣೆ ಬೆಳಕು ಚೆಲ್ಲುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಕೊಡಗು ಗೌಡ ವಿದ್ಯಾಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಮಾತನಾಡಿ ಕುವೆಂಪು ಜನ್ಮ ದಿನದಂದು ಕುವೆಂಪು ಅವರ ಪುತ್ಥಳಿಗೆ ದೀಪಾಲಂಕಾರ ಮಾಡುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ಪ್ರಮುಖರಾದ ರವಿಗೌಡ, ಪ್ರಕಾಶ್ ಆಚಾರ್ಯ, ರಾಜಶೇಖರ್, ಇತರರು ಇದ್ದರು.
ಅಮರಶಿಲ್ಪಿ ಜಕಣಾಚಾರಿ ಅವರು ಕನ್ನಡ ಕಲಾ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸ್ಮರಣೆ ಮಾಡುವಂತಾಗಬೇಕು. ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜಿಸಲು ಅಗತ್ಯ ಕ್ರಮವಹಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚಿಸಿದರು.
ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷರಾದ ಜಗದೀಶ್, ಚರಣ್, ಸುರೇಶ್, ರಕ್ಷಿತ್, ಪ್ರಕಾಶ್ ಆಚಾರ್ಯ, ಇತರರು ಇದ್ದರು.