2ನೇ ಏರ್ಪೋರ್ಟ್‌ ಶಿರಾ ಬಳಿ ನಿರ್ಮಿಸಲಿ: ಸೋಮಣ್ಣ

KannadaprabhaNewsNetwork |  
Published : Jul 19, 2026, 03:00 AM IST
ಸೋಮಣ್ಣ | Kannada Prabha

ಸಾರಾಂಶ

ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಜಿಲ್ಲೆಯ ಶಿರಾ ಬಳಿ ನಿರ್ಮಿಸಬೇಕು ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದ್ದಾರೆ.

ಶಿರಾದಲ್ಲಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ಪ್ರಗತಿಗೆ ಸಹಾಯಕವಾಗಲಿದೆ ಎಂದೂ ತುಮಕೂರಿನ ಸಂಸದರೂ ಆಗಿರುವ ಅವರು ಪ್ರತಿಪಾದಿಸಿದ್ದಾರೆ.

ಮಾ.20ರಂದು ಶಾಸಕರಿಂದ ಪತ್ರ:

ಈ ಬಗ್ಗೆ ಕಳೆದ ವರ್ಷದ ಮಾ.20 ರಂದು ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಹಾವೇರಿ ಹಾಗೂ ರಾಯಚೂರು ಸೇರಿ ಪ್ರಮುಖ ಜಿಲ್ಲೆಗಳ ಶಾಸಕರು ನನಗೆ ಪತ್ರ ಬರೆದು ಒತ್ತಾಯಿಸಿದ್ದರು. ಅದರ ಭಾಗವಾಗಿಯೇ ಅದೇ ವರ್ಷದ ಏ.22ರಂದು ಕೇಂದ್ರದ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ ನಾಯ್ಡು ಅವರಿಗೆ ಪತ್ರ ಬರೆದು ಈ ಭಾಗದ ಜನಪ್ರತಿನಿಧಿಗಳ ಒತ್ತಾಸೆಯನ್ನು ಅವರ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ಕರ್ನಾಟಕ ರಾಜ್ಯವು ಬೆಂಗಳೂರು ಕೇಂದ್ರಿತವಾಗಿ ಅಭಿವೃದ್ಧಿ ಸಾಧಿಸಿದೆ. ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದ ಎಲ್ಲಾ ಭಾಗಗಳನ್ನು, ನಗರಗಳನ್ನು ಸಶಕ್ತವಾಗಿ ಬೆಳೆಸುವುದು ಜನಪ್ರತಿನಿಧಿಗಳೆಲ್ಲರ ಜವಾಬ್ದಾರಿಯೂ ಹೌದು. ಆ ಹಿನ್ನೆಲೆಯಲ್ಲಿ ಮತ್ತೊಂದು ವಿಮಾನ ನಿಲ್ದಾಣವನ್ನು ಬೆಂಗಳೂರಿನ ಸಮೀಪ ನಿರ್ಮಿಸಿದರೆ, ಉತ್ತರ ಮತ್ತು ಮಧ್ಯ ಕರ್ನಾಟಕದ ಅಭಿವೃದ್ಧಿಗೆ ನ್ಯಾಯ ಸಂದಂತೆ ಆಗುವುದಿಲ್ಲ ಎಂದು ಸ್ಪಷ್ಟವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತುಮಕೂರಿನ ಶಿರಾ ಬಳಿ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದರಿಂದ ಮಧ್ಯ ಕರ್ನಾಟಕ ಭಾಗ ಪ್ರಗತಿ ಪಥದಲ್ಲಿ ಸಾಗಲು ಸಾಧ್ಯವಾಗಲಿದೆ. ಶಿರಾದ ಸುತ್ತುಮುತ್ತ ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್, ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (ಎನ್.ಎಂ.ಐ.ಜಿ), ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಹಾಗೂ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಗೆ ಸೇರಿದ ಕೈಗಾರಿಕಾ ಪ್ರದೇಶಗಳಿವೆ. ಹಲವು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಹಾಗೂ ಹೊಸ ರೈಲು ಮಾರ್ಗಗಳ ಸಾರಿಗೆ ಸಂಪರ್ಕ ಜಾಲವೂ ಬಲವಾಗಿದೆ ಎಂದು ಸೋಮಣ್ಣ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಪ್ರಮಾಣದ ಸರ್ಕಾರಿ ಭೂಮಿ ಲಭ್ಯವಿದ್ದು, ಭದ್ರಾ ಮೇಲ್ದಂಡೆ ಕಾಲುವೆ, ಹೇಮಾವತಿ ಮತ್ತು ಎತ್ತಿನಹೊಳೆ ಯೋಜನೆಗಳಿಂದ ನೀರಿನ ಲಭ್ಯತೆ ಜೊತೆ ಚಿತ್ರದುರ್ಗದ ಡಿಆರ್‌ಡಿಒ, ಐಐಎಸ್ಸಿ ಕ್ಯಾಂಪಸ್ ಹಾಗೂ ತುಮಕೂರಿನ ಗುಬ್ಬಿಯ ಎಚ್.ಎ.ಎಲ್. ಹೆಲಿಕಾಪ್ಟರ್ ಘಟಕಗಳೂ ಅತ್ಯಂತ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿವೆ.

ಬೆಂಗ‍ಳೂರಿನಿಂದ 150 ಕಿ.ಮೀ. ದೂರ:

ಶಿರಾದ ಈ ಸ್ಥಳವು ಡಿಜಿಸಿಎ ನಿಯಮಕ್ಕನುಗುಣವಾಗಿ ಬೆಂಗಳೂರು ವಿಮಾನ ನಿಲ್ದಾಣದಿಂದ ಸುಮಾರು 150 ಕಿ.ಮೀ. ದೂರವಿದೆ. ಅಲ್ಲದೇ, ಇದರಿಂದಾಗಿ ಮಧ್ಯ ಮತ್ತು ಉತ್ತರ ಕರ್ನಾಟಕದ ಜನರಿಗೆ ಅಂತಾರಾಷ್ಟ್ರೀಯ ಪ್ರಯಾಣ ಹಾಗೂ ಸರಕು ಸಾಗಣೆಗೆ ಅನುಕೂಲವಾಗಲಿದೆ. ಕೈಗಾರಿಕೆ, ಉದ್ಯೋಗ, ಹೂಡಿಕೆ ಮತ್ತು ಪ್ರಾದೇಶಿಕ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ದೊರಕಲಿದ್ದು, ರಾಜ್ಯದ ಸಮತೋಲಿತ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ವಿವರಿಸಿದ್ದಾರೆ.

ರಾಜ್ಯದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ತುಮಕೂರಿನ ಶಿರಾ ಭಾಗದಲ್ಲಿಯೇ ನೂತನ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೇಂದ್ರ ವಿಮಾನಯಾನ ಸಚಿವರನ್ನು ಒತ್ತಾಯಿಸಿದ್ದೇನೆ. ರಾಜ್ಯ ಸರ್ಕಾರವು ರಾಜ್ಯದ ಸಮಗ್ರ ಅಭಿವೃದ್ಧಿಯನ್ನೇ ಮಾನದಂಡವನ್ನಾಗಿ ಇಟ್ಟುಕೊಂಡು ಚಿಂತನೆ ನಡೆಸಬೇಕೆಂದು ಕೋರುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಡಗೀತೆಗೆ ಬೌದ್ಧರುದ್ಯಾನ ಪದಸೇರ್ಪಡೆಗೆ ಸಂಘ-ಸಂಸ್ಥೆ ಬೆಂಬಲ
ಹಾಸನದಲ್ಲಿ ರೌಡಿ ಶೀಟರ್ ಮಂಜೇಶ್ ಹತ್ಯೆ ಪ್ರಕರಣಕ್ಕೆ ಹೊಸ ತಿರುವು