3 ಪ್ರತ್ಯೇಕ ಬೈಕ್ ಕಳವು ಕೇಸ್‌: ನಾಲ್ವರು ಆರೋಪಿಗಳ ಬಂಧನ

KannadaprabhaNewsNetwork | Published : Jul 10, 2024 12:44 AM

ಸಾರಾಂಶ

ನಗರದ ದಕ್ಷಿಣ ಮತ್ತು ಉತ್ತರ ವಿಭಾಗದ ಪೊಲೀಸರು ಮೂರು ಪ್ರತ್ಯೇಕ ದ್ವಿಚಕ್ರ ವಾಹನ ಕಳವು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದ ದಕ್ಷಿಣ ಮತ್ತು ಉತ್ತರ ವಿಭಾಗದ ಪೊಲೀಸರು ಮೂರು ಪ್ರತ್ಯೇಕ ದ್ವಿಚಕ್ರ ವಾಹನ ಕಳವು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜೆ.ಪಿ.ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರಿಸಂದ್ರ ನಿವಾಸಿಗಳಾದ ಶೇಖ್ ಮುಜಾಮಿಲ್ ಪಾಷಾ (25) ಮತ್ತು ಮೊಹಮ್ಮದ್ ಫಯಾಜ್ (26) ಬಂಧಿತರು. ಆರೋಪಿಗಳಿಂದ ₹4 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಸಾರಕ್ಕಿ 10ನೇ ಕ್ರಾಸ್‌ ನಿವಾಸಿಯೊಬ್ಬರು ಮನೆ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಗಳು ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ದ್ವಿಚಕ್ರ ವಾಹನ ಕಳ್ಳತನಕ್ಕೆ ಇಳಿದಿದ್ದರು. ರಾತ್ರಿ ವೇಳೆ ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳ ಹ್ಯಾಂಡಲ್‌ ಲಾಕ್‌ ಮುರಿದು ಕಳವು ಮಾಡುತ್ತಿದ್ದರು. ಬಳಿಕ ಪರಿಚಿತರ ಮೂಲಕ ಮಾರಾಟ ಮಾಡಿಸಿ ಹಣ ಪಡೆದು ಮೋಜು-ಮಸ್ತಿ ಮಾಡುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಕ್ಸ್..

ಹೋಟೆಲ್‌ ಬಳಿ ಬೈಕ್‌ ಕದ್ದ

ಮತ್ತೊಂದು ಪ್ರಕರಣದಲ್ಲಿ ಹೋಟೆಲ್‌ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಕುಮಾರಸ್ವಾಮಿ ಲೇಔಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇಲಿಯಾಜ್ ನಗರದ ನಿವಾಸಿ ಸಾದೀಕ್ (23) ಬಂಧಿತ. ಆರೋಪಿಯಿಂದ ₹4 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ದಯಾನಂದ ಸಾಗರ್‌ ಶಾಲೆ ಬಳಿಯ ಹೋಟೆಲ್ ಎದುರು ವ್ಯಕ್ತಿಯೊಬ್ಬರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಾಕ್ಸ್..

ಕದ್ದ ಬೈಕಲ್ಲಿ ಗುಜರಿ

ವಸ್ತುಗಳ ಕಳ್ಳತನ!

ಮನೆ ಎದುರು ನಿಲುಗಡೆ ಮಾಡಿದ ದ್ವಿಚಕ್ರ ವಾಹನಗಳನ್ನು ಕದ್ದು ಬಳಿಕ ಅದೇ ದ್ವಿಚಕ್ರ ವಾಹನ ಬಳಸಿಕೊಂಡು ಗುಜರಿ ವಸ್ತುಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ತಿಲಕ್ (30) ಬಂಧಿತ. ಆರೋಪಿಯಿಂದ ₹8 ಲಕ್ಷ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಇತ್ತೀಚೆಗೆ ಚಿಕ್ಕಬಾಣವಾರದ ಹಳೇ ರೈಲ್ವೆ ಸ್ಟೇಷನ್‌ ರಸ್ತೆಯ ಮನೆಯೊಂದರ ಎದುರು ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿತ್ತು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಆರು ಪ್ರಕರಣ ಪತ್ತೆ:

ಆರೋಪಿಯು ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ರಾತ್ರಿ ವೇಳೆ ದ್ವಿಚಕ್ರ ವಾಹನ ಕಳವು ಮಾಡಿ ಬಳಿಕ ಆ ದ್ವಿಚಕ್ರ ವಾಹನ ಬಳಸಿಕೊಂಡು ಗುಜರಿ ವಸ್ತುಗಳನ್ನು ಕಳವು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ.

+++ಈತನ ಬಂಧನದಿಂದ ಸೋಲದೇವನಹಳ್ಳಿ, ಯಲಹಂಕ ಉಪನಗರ, ಮೈಕೋ ಲೇಔಟ್‌ ಸೇರಿದಂತೆ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಆರು ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this article