ಬೆಂಗಳೂರು : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷದ ಅಪರಾಧ ತಡೆಗೆ ಪ್ರತ್ಯೇಕ ಕಾಯಿದೆ ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ಕ್ಕೆ ಅನುಮೋದನೆ ಪಡೆಯುವ ಸಾಧ್ಯತೆಯಿದೆ.
ಜೂನ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಕರಡು ವಿಧೇಯಕ ಪ್ರಸ್ತಾಪಿಸಲಾಗಿದ್ದು, ಅಂತಿಮ ವಿಧೇಯಕವು ಗುರುವಾರ ಮಂಡನೆಯಾಗಲಿದೆ. ಅನುಮೋದನೆ ನೀಡಿದ ಬಳಿಕ ಬೆಳಗಾವಿ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಂಡಿಸುವ ಸಾಧ್ಯತೆಯಿದೆ.
ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ರು. ದಂಡದ ಜತೆಗೆ ಶಿಕ್ಷೆ ವಿಧಿಸಬಹುದು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.
ಫೆಬ್ರುವರಿ ತಿಂಗಳಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಪರಿಷ್ಕೃತ ವೆಚ್ಚ 100.70 ಕೋಟಿ ರು.ಗೆ ಘಟನೋತ್ತರ ಅನುಮೋದನೆ ನೀಡಲು ಗುರುವಾರದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು. 2022ರ ಇನ್ವೆಸ್ಟ್ ಕರ್ನಾಟಕಕ್ಕಿಂತ ಶೇ.33 ರಷ್ಟು ಹೆಚ್ಚುವರಿ ವೆಚ್ಚ ಮಾಡಲಾಗಿದ್ದು, ಇದಕ್ಕೆ ಅನುಮೋದನೆ ಪಡೆಯಲಾಗುವುದು.
7 ವಿವಿಧ ವಿಧೇಯಕಗಳಿಗೆ ಅಂಗೀಕಾರ?
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ತಿದ್ದುಪಡಿ ವಿಧೇಯಕ- 2025 ಹಾಗೂ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ ತಿದ್ದುಪಡಿ ವಿಧೇಯಕ-2025 ಸೇರಿದಂತೆ ಒಟ್ಟು ಏಳು ವಿಧೇಯಕಗಳನ್ನು ಮಂಡಿಸಿ ಸಂಪುಟದಲ್ಲಿ ಅಂಗೀಕಾರ ಪಡೆಯುವ ಸಾಧ್ಯತೆಯಿದೆ.
ಮೂಲಗಳ ಪ್ರಕಾರ, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ವಿಧೇಯಕ - 2025, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ತಿದ್ದುಪಡಿ ವಿಧೇಯಕ - 2025, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ - 2025, ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ವಿಧೇಯಕ - 2025 ಹಾಗೂ ಕರ್ನಾಟಕ ಒಳನಾಡು ನೌಕೆ ನಿಯಮಗಳು -2025 ವಿಧೇಯಕಗಳು ಮಂಡನೆಯಾಗಲಿವೆ.
ಮಸೂದೆ ಏಕಾಗಿ ಜಾರಿ?
ರಾಜ್ಯದಲ್ಲಿ ಕೋಮು, ದ್ವೇಷದ ಭಾಷಣ ಹೆಚ್ಚಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ
ಇದನ್ನು ತಡೆಯಲು ಕಠಿಣ ಕ್ರಮ ಒಳಗೊಂಡ ಕಾನೂನು ಅಗತ್ಯ ಎಂಬುದು ಸರ್ಕಾರದ ವಾದ
ಈ ಹಿನ್ನೆಲೆಯಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು, ₹5000 ದಂಡ ವಿಧಿಸೋ ಪ್ರಸ್ತಾಪ
ಯಾವುದು ಶಿಕ್ಷಾರ್ಹ ಅಪರಾಧ?
ದ್ವೇಷ ಭಾಷಣದ ಮೂಲಕ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವುದು ಶಿಕ್ಷಾರ್ಹ ಅಪರಾಧ