ಕನ್ನಡಪ್ರಭ ವಾರ್ತೆ, ತುಮಕೂರು 20 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ 3 ವರ್ಷಗಳು ತುಂಬಲಿದ್ದು, ಈ ದಿನ ತುಮಕೂರಿನಲ್ಲಿ ರಾಜ್ಯದ ಜನತೆಗೆ ಆಗಿರುವ ಪ್ರಯೋಜನಗಳ ಸೌಲಭ್ಯ ವಿತರಣೆ ಕಾರ್ಯಕ್ರಮವಾಗಿ ಸಾರ್ಥಕ ಸೇವೆಗಳ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಅದಕ್ಕೆ ಮುನ್ನಾ ದಿನ 19 ಕ್ಕೆ ಅಧಿಕೃತವಾಗಿ ಕಾರ್ಯಕ್ರಮ ನಿಗದಿಯಾಗಿದೆ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ತಿಳಿಸಿದ್ದಾರೆ. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಚಾಲನೆ ನೀಡಿ ಅವುಗಳನ್ನು ಆದ್ಯತಾ ಕಾರ್ಯಕ್ರಮಗಳಾಗಿ ತೆಗೆದುಕೊಂಡು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಈ ವಿಷಯವನ್ನು ಜನಸಮುದಾಯದೊಂದಿಗೆ ಹಂಚಿಕೊಳ್ಳಬೇಕಿತ್ತು. ೨೦ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ 2ನೇ ಅವಧಿಯ ಸರ್ಕಾರ ಅಧಿಕಾರಕ್ಕೆ ಬಂದು ೩ ವರ್ಷ ಸಂದ ಹಿನ್ನೆಲೆಯಲ್ಲಿ ಆ ದಿನದಂದು ಕಾರ್ಯಕ್ರಮ ಆಯೋಜಿಸಲು ಆರಂಭದಲ್ಲಿ ನಿರ್ಧರಿಸಲಾಗಿತ್ತು. ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಅಂದೇ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ತೊಂದರೆಯಾಗದಂತೆ ಅದಕ್ಕೆ ಮುನ್ನಾ ದಿನ ೯ರಂದೇ ಕಾರ್ಯಕ್ರಮ ಆಯೋಜಿಸಲು ಮುಖ್ಯಮಂತ್ರಿಯವರು ಸೂಚಿಸಿದ ಹಿನ್ನೆಲೆಯಲ್ಲಿ ದಿನಾಂಕ ಮಾತ್ರ ಬದಲಾಗಿದೆ. ಉಳಿದಂತೆ ಎಲ್ಲ ಕಾರ್ಯಕ್ರಮಗಳು ಪೂರ್ವ ಯೋಜಿತದಂತೆ ನಡೆಯಲಿವೆ ಎಂದು ಅವರು ವಿವರಿಸಿದರು. ತುಮಕೂರು ಜಿಲ್ಲೆಯಲ್ಲಿ ಆಗಿರುವ ಇತರೆ ಇಲಾಖೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಸುಮಾರು ೬೮೨ ಕೋಟಿ ರು.ಗಳ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಿಕೊಡಲಿದ್ದಾರೆ ಎಂದು ಸಚಿವರು ತಿಳಿಸಿದರು.ಈ ಕಾರ್ಯಕ್ರಮ ಸಂಪೂರ್ಣ ಸರ್ಕಾರಿ ಕಾರ್ಯಕ್ರಮವಾಗಿದ್ದು, ಪಕ್ಷಾತೀತ ಕಾರ್ಯಕ್ರಮ ಎಂದು ಈ ಹಿಂದೆಯೇ ತಿಳಿಸಲಾಗಿತ್ತು. ಅಂತೆಯೇ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲಾ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಮುಖಂಡರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ಸುಮಾರು ೨ಲಕ್ಷಕ್ಕೂ ಹೆಚ್ಚು ಜನ ಆಗಮಿಸಲಿದ್ದು, ಅವರಿಗೆ ಬಸ್ಸುಗಳ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ತಿಳಿಸಿದರು.ಈ ಸಂದರ್ಭ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜ ಉಪಸ್ಥಿತರಿದ್ದರು.