ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ(ಕೆಪಿಟಿಸಿಎಲ್) ಖಾಲಿ ಇರುವ 35,000 ಸಾವಿರ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಕೆಪಿಟಿಸಿಎಲ್ ನೌಕರರ ಸಂಘದ ವಜ್ರ ಮಹೋತ್ಸವವನ್ನು ಗುರುವಾರ ಉದ್ಘಾಟಿಸಿ ಹಾಗೂ ವಜ್ರಜ್ಯೋತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.
ಕೆಪಿಟಿಸಿಎಲ್ ನೌಕರರ ಬೇಡಿಕೆಗಳ ಈಡೇರಿಕೆಗೆ ಸಂಬಂಧ ಪರಿಶೀಲಿಸಿ ಕ್ರಮ ವಹಿಸಲಾಗುವುದು. ನಮ್ಮದು ನುಡಿದಂತೆ ನಡೆಯುವ ಸರ್ಕಾರ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಪಿಂಚಿಣಿ ಯೋಜನೆ(ಎನ್‌ಪಿಎಸ್) ಬದಲು ಹಿಂದೆ ಇದ್ದಂತಹ ಹಳೆ ಪಿಂಚಿಣಿ ಯೋಜನೆ(ಒಪಿಎಸ್) ಮರು ಜಾರಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲೇ ಘೋಷಿಸಿದ್ದೇವೆ. ಅದರಂತೆ ಚರ್ಚಿಸಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ನೌಕರರ ಸಂಘವು 70 ವರ್ಷಗಳಿಗೂ ಹೆಚ್ಚು ಕಾಲ ನಿರಂತರವಾಗಿ ನೌಕರರ ಕಷ್ಟಸುಖಗಳಿಗೆ ಸ್ಪಂದಿಸಿ, ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಜೊತೆಗೆ ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೂರೈಸುವ ಹೊಣೆಗಾರಿಕೆ ಅಚ್ಚುಕಟ್ಟಾಗಿ ನಿರ್ವಹಿಸಿದ್ದೀರಿ. ಇದಕ್ಕೆ ನೀವೆಲ್ಲರೂ ಅಭಿನಂದನಾರ್ಹರು. ನೌಕರರು ಮತ್ತು ಕಾರ್ಮಿಕರು ಬಹಳ ಶ್ರಮ ವಹಿಸಿ ಕೆಲಸ ನಿರ್ವಹಿಸುತ್ತಿದ್ದೀರಿ. ನಿಮ್ಮ ಎಲ್ಲಾ ಬೇಡಿಕೆಗಳನ್ನೂ ಈಡೇರಿಸಲು ನಮ್ಮ ಸರ್ಕಾರ ಸಿದ್ಧವಿದೆ. ನಾವು ನಿಮ್ಮ ಜೊತೆಗೆ ಇದ್ದೇವೆ. ನೀವು ನಮ್ಮ ಜೊತೆಗೆ ಇರಿ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಕ್ರೆಡಲ್ ಅಧ್ಯಕ್ಷ ಶಾಸಕ ರಾಜೇಗೌಡ, ಹುಬ್ಬಳ್ಳಿ ವಿದ್ಯುತ್ ನಿಗಮದ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ನೌಕರರ ಸಂಘದ ಅಧ್ಯಕ್ಷ ಬಲರಾಮ್ ಇದ್ದರು.-ಬಾಕ್ಸ್-ಎಸ್ಕಾಂಗಳ ಖಾಸಗೀಕರಣಕ್ಕೆ
ಅವಕಾಶವಿಲ್ಲ: ಶಿವಕುಮಾರ್ನಾನು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದೇ ವೇಳೆ ಭರವಸೆ ನೀಡಿದರು.
ನಾನು ಇಂಧನ ಸಚಿವನಾದ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂತು. ಮುಂಬೈ, ದೆಹಲಿ ಸೇರಿ ದೇಶದ ವಿವಿಧ ನಗರಗಳಲ್ಲಿ ಎಸ್ಕಾಂಗಳನ್ನು ಖಾಸಗಿಯವರಿಗೆ ನೀಡಲಾಗಿದೆ. ಹೀಗಾಗಿ ಬೆಂಗಳೂರಿನಲ್ಲೂ ಖಾಸಗಿಯವರಿಗೆ ನೀಡಬೇಕು ಎಂದು ನನ್ನ ಮೇಲೆ ಒತ್ತಡ ಹೇರಲಾಗಿತ್ತು. ಆಗ ನಾನು ಅವರಿಗೆ ನಮ್ಮ ನೌಕಕರು, ಎಂಜಿನಿಯರ್‌ಗಳು, ವ್ಯವಸ್ಥಾಪಕ ಮಂಡಳಿಯವರು ಬಹಳ ಶಕ್ತಿಶಾಲಿಯಾಗಿದ್ದು, ಎಸ್ಕಾಂಗಳನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ ಎಂದು ಹೇಳಿದ್ದೆ. ರಾಜ್ಯದಲ್ಲಿ ಈ ಡಿ.ಕೆ.ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಇರುವವರೆಗೂ ಎಸ್ಕಾಂಗಳನ್ನು ಖಾಸಗೀಕರಣಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.