ಕೆಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ 35 ಸಾವಿರ ಕ್ಯುಸೆಕ್ ನೀರು ಬಿಡುಗಡೆ

KannadaprabhaNewsNetwork |  
Published : Jun 25, 2025, 11:47 PM IST
25ಕೆಎಂಎನ್ ಡಿ25 | Kannada Prabha

ಸಾರಾಂಶ

ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗುವ ಹಂತ ತಲುಪಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಕಾವೇರಿ ನದಿ ಮೂಲಕ 35 ಸಾವಿರ ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ.

124.80 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಪ್ರಸ್ತುತ 120.90 ಅಡಿ ಸಂಗ್ರಹವಾಗಿದೆ. 23,315 ಕ್ಯುಸೆಕ್ ಒಳ ಹರಿವಿದೆ. ಮಡಿಕೇರಿ, ಭಾಗಮಂಡಲ ಸೇರಿದಂತೆ ಕಾವೇರಿ ಜಲಾಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ 50 ಸಾವಿರ ಕ್ಯುಸೆಕ್‌ ಗೂ ಹೆಚ್ಚು ಪ್ರಮಾಣದಲ್ಲಿ ನೀರು ಹರಿದು ಬರುವ ನಿರೀಕ್ಷೆಯಿದ್ದು, ನದಿ ಮೂಲಕ 35 ಸಾವಿರ ಕ್ಯುಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದೆ.

ಕೊಡಗಿನಲ್ಲಿ ಮಳೆ ಮತ್ತಷ್ಟು ಮುಂದುವರಿದರೆ ಜಲಾಶಯಕ್ಕೆ ಹೆಚ್ಚು ನೀರು ಬರುವ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಅಣೆಕಟ್ಟೆಯಿಂದ 50 ಸಾವಿರ ಕ್ಯುಸೆಕ್ ವರೆಗೂ ಕಾವೇರಿ ನದಿಗೆ ನೀರು ಬಿಡುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳು ನದಿ ತೀರ ಪ್ರದೇಶದ ಜನತೆಗೆ ಸೂಚನೆ ನೀಡಿದ್ದಾರೆ.

ನಿಷೇಧಾಜ್ಞೆ:

ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಪ್ರವಾಸಿ ತಾಣಗಳಿಗೆ ನಿಷೇಧ:

ಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾವೇರಿ ನದಿ ತೀರದ ಪ್ರದೇಶಗಳಾದ ಕಾರೇಕುರ, ರಂಗನತಿಟ್ಟು, ಶ್ರೀರಂಗಪಟ್ಟಣ ಟೌನಿನ ಸ್ನಾನಘಟ್ಟ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಬೆ ದೇವಸ್ಥಾನ, ಸಂಗಮ್, ಘೋಸಾಯ್ ಘಾಟ್, ಪಶ್ಚಿಮವಾಹಿನಿ ಸ್ಥಳಗಳಲ್ಲಿ ಸಾರ್ವಜನಿಕರು ನದಿ ಬಳಿಗೆ ಹೋಗದಂತೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಿ ಶ್ರೀರಂಗಪಟ್ಟಣ ತಹಸೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ.

ಕಾವೇರಿ ನದಿಯ ತಗ್ಗು ಪ್ರದೇಶ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ.

ಜೊತೆಗೆ ಪಟ್ಟಣ ಟೌನ್ ವ್ಯಾಪ್ತಿಯ ಪಶ್ಚಿಮವಾಹಿನಿ, ಸಂಗಮ್, ಘೋಷಾಯಿ ಘಾಟ್, ಸ್ನಾನಘಟ್ಟ, ಜಿ.ಬಿ ಹೊಳೆ ಮತ್ತು ಇತರೆ ಸ್ಥಳಗಳಲ್ಲಿ ಅಸ್ತಿ ವಿಸರ್ಜನೆ, ಪಿಂಡ ಪ್ರಧಾನ ಇತ್ಯಾದಿ ಪೂಜಾ ಕಾರ್ಯಗಳನ್ನು ಯಾರೂ ಕೂಡ ನಡೆಸದಂತೆ ನಿಷೇಧಾಜ್ಞೆ ಹೊರಡಿಸಿದ್ದಾರೆ.

PREV

Latest Stories

ಡಿಕೆಶಿ ಪರ ದಾವಣಗೆರೆಯಲ್ಲಿ 101 ತೆಂಗಿನಕಾಯಿ ಸೇವೆ
ಬೆಂಗಳೂರು-ತುಮಕೂರುಪ್ರಯಾಣ, ಜನ ಹೈರಾಣ
ಸ್ಮಾರ್ಟ್‌ ಮೀಟರ್‌ ವಿವಾದ: ಸಚಿವಜಾರ್ಜ್ ವಿರುದ್ಧ ಬಿಜೆಪಿ ದೂರು