ದೊಡ್ಡಬಳ್ಳಾಪುರ ಜಿಲ್ಲೆಯಾದ್ಯಂತ 40 ಬಾಲ-ಕಿಶೋರ ಕಾರ್ಮಿಕರ ರಕ್ಷಣೆ

KannadaprabhaNewsNetwork |  
Published : May 28, 2025, 12:27 AM IST
ಬೆಂ.ಗ್ರಾ ಜಿಲ್ಲಾ ಮಟ್ಟದ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಕಾರ್ಯಪಡೆ ಸಭೆ ಮಂಗವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ಜಿಲ್ಲೆಯಾದ್ಯಂತ ನಿರಂತರವಾಗಿ ಹೋಟೆಲ್, ಗ್ಯಾರೇಜ್, ಬೇಕರಿ, ವಾಣಿಜ್ಯ ಸಂಸ್ಥೆ, ಕೈಗಾರಿಕೆ ಮುಂತಾದ ಸ್ಥಳಗಳಿಗೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗುತ್ತಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು, ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಸಂಬಂಧಪಟ್ಟ ಮಾಲಿಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು .

ಬೆಂಗ್ರಾ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆ । ಅನಿರೀಕ್ಷಿತ ತಪಾಸಣೆ, ದಾಳಿ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಹೋಟೆಲ್, ಗ್ಯಾರೇಜ್, ವಾಣಿಜ್ಯ ಸಂಸ್ಥೆ, ಕಾರ್ಖಾನೆಗಳ ಮೇಲೆ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯನ್ನು ನಡೆಸಿ ಮೂವರು ಬಾಲ ಕಾರ್ಮಿಕರು ಹಾಗೂ 37 ಕಿಶೋರ ಕಾರ್ಮಿಕರು ಸೇರಿ 40 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಾದ್ಯಂತ ನಿರಂತರವಾಗಿ ಹೋಟೆಲ್, ಗ್ಯಾರೇಜ್, ಬೇಕರಿ, ವಾಣಿಜ್ಯ ಸಂಸ್ಥೆ, ಕೈಗಾರಿಕೆ ಮುಂತಾದ ಸ್ಥಳಗಳಿಗೆ ಅನಿರೀಕ್ಷಿತ ತಪಾಸಣೆ, ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲಾಗುತ್ತಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವುದು, ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಸಂಬಂಧಪಟ್ಟ ಮಾಲಿಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

40 ಬಾಲ- ಕಿಶೋರ ಕಾರ್ಮಿಕರ ರಕ್ಷಣೆ:

2024- 25 ನೇ ಸಾಲಿನಲ್ಲಿ 03 ಬಾಲ ಹಾಗೂ 37 ಕಿಶೋರ ಕಾರ್ಮಿಕರು ಸೇರಿ ಒಟ್ಟು 40 ಮಕ್ಕಳ ರಕ್ಷಣೆ ಮಾಡಲಾಗಿದ್ದು 11 ಪ್ರಕರಣಗಳಲ್ಲಿ ₹2,20,000 ದಂಡ ವಸೂಲಾತಿ ಮಾಡಲಾಗಿದೆ. ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹವರಿಗೆ ಕನಿಷ್ಠ 06 ತಿಂಗಳಿಂದ ಮತ್ತು ಗರಿಷ್ಠ 02 ವರ್ಷದವರೆಗೂ ಜೈಲು ಶಿಕ್ಷೆ ಅಥವಾ ₹20,000 ದಿಂದ ₹50,000 ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ವಿವರಿಸಿದರು.

ಅಧಿಕಾರಿಗಳು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ. ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಕಾರ್ಖಾನೆ ಅಥವಾ ಅಂಗಡಿ ಮುಂಗಟ್ಟುಗಳಲ್ಲಿ ಮಕ್ಕಳನ್ನು ದುಡಿಮೆಗೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಿ ಎಂದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಬೋಲಾ ಪಂಡಿತ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮುದ್ದಣ್ಣ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಾಲೂಕಿನ ಕಾರ್ಮಿಕ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ