ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮೂಲಕ, ಈ ಭಾಗದ ಬಡ ವಿದ್ಯಾವಂತರು, ವೈದ್ಯಕೀಯ ಶಿಕ್ಷಣ ಪಡೆಯಬೇಕು ಎಂಬುವುದು ಶಾಸಕ ದಿ. ಮೇಟಿ ಅವರ ಕನಸಾಗಿತ್ತು. ಇದಕ್ಕಾಗಿ ಅವರು ಹಲವು ವರ್ಷಗಳಿಂದ ಪ್ರಯತ್ನ ನಡೆಸಿದ್ದರು.. ಅವರ ಪ್ರಯತ್ನದಿಂದಲೇ ₹550 ಕೋಟಿ ಅನುದಾನಕ್ಕೆ ಮಂಜೂರಾತಿ ದೊರೆತಿದ್ದು, ಇದೀಗ ಕಾಲೇಜು ಸ್ಥಾಪನೆಗೆ ಅಗತ್ಯವಾಗಿ ಬೇಕಾಗಿದ್ದ 42 ಎಕರೆ ಭೂಮಿಯನ್ನು ತೋಟಗಾರಿಕೆ ವಿವಿಗೆ ಲೀಜ್ ಆಧಾರದ ಮೇಲೆ ನೀಡಿದ್ದನ್ನು ರದ್ದುಪಡಿಸಿ, ವೈದ್ಯಕೀಯ ಕಾಲೇಜು ಸ್ಥಾಪನೆಗೆ ನೀಡಲಾಗಿದೆ.ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ಸೆಕ್ಟರ್ ನಂ. 1, 9, 13, 41, 70 ಪೈಕಿ, 1 ಮತ್ತು 13ನೇ ಸೆಕ್ಟರ್ ನಲ್ಲಿ 42 ಎಕರೆ ಖಾಲಿ ಜಾಗವನ್ನು ತೋಟಗಾರಿಕೆ ವಿವಿಗೆ ನೀಡಿದ್ದನ್ನು ರದ್ದುಪಡಿಸಿ, 2025-26ನೇ ಸಾಲಿ ಆಯವ್ಯಯ ಘೋಷಣೆ ಅನ್ವಯ ಬಾಗಲಕೋಟೆ ನಗರಕ್ಕೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ, ವೈದ್ಯಕೀಯ ಕಾಲೇಜು ನಿರ್ಮಿಸಲು ಈ 42 ಎಕರೆ ಜಾಗವನ್ನು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಹೆಸರಿಗೆ ಉಚಿತವಾಗಿ ಹಸ್ತಾಂತರಿಸಲು ರಾಜ್ಯ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ಅಧೀನ ಕಾರ್ಯದರ್ಶಿ ವಿಜಯಲಕ್ಷ್ಮಿ ಎಸ್. ಸೋಮವಾರ ಆದೇಶ ಹೊರಡಿಸಿದ್ದಾರೆ ಎಂದು ಶೆಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಭೂಮಿ ಹಸ್ತಾಂತರದಿಂದ ವೈದ್ಯಕೀಯ ಕಾಲೇಜಿಗೆ ಅಗತ್ಯವಾಗಿ ಬೇಕಾದ ವಿವಿಧ ಕಟ್ಟಡಗಳ ನಿರ್ಮಾಣಕ್ಕೆ ಅನುಕೂಲವಾಗಲಿದೆ. ಶೀಘ್ರವೇ ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಭೂಮಿಪೂಜೆ ಕೂಡ ನೆರವೇರಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.ಬಾಗಲಕೋಟೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ಕಾರಣರಾದ ಶಾಸಕ ದಿ.ಎಚ್.ವೈ. ಮೇಟಿ ಅವರನ್ನು ಈ ಸಂದರ್ಭದಲ್ಲಿ ಬಾಗಲಕೋಟೆಯ ಜನತೆಯ ಪರವಾಗಿ ಸ್ಮರಿಸಲೇಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಭೂಮಿ ಹಸ್ತಾಂತರಕ್ಕೆ ಸಹಕಾರ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರಿಗೆ ಬಾಗಲಕೋಟೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.