ವಿಶೇಷ ವರದಿ
ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಫಲಾನುಭವಿಗಳ ಪೈಕಿ ದೊಡ್ಡ ಸಂಖ್ಯೆಯಲ್ಲಿ ಶ್ರೀಮಂತರು ಇದ್ದು ಅವರ ಖಾತೆಗೆ ನಿರಂತರ ಪ್ರತಿ ತಿಂಗಳು ₹2 ಸಾವಿರ ಪಾವತಿಯಾಗುತ್ತಿದೆ. ಏತನ್ಮಧ್ಯೆ ಮೃತಪಟ್ಟವರ ಖಾತೆಗೂ ಹಣ ಸಂದಾಯವಾಗುತ್ತಿದೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಂಗನವಾಗಿ ಕಾರ್ಯಕರ್ತೆಯರಿಂದ ಮನೆಮನೆ ಪರಿಶೀಲನೆ ನಡೆಸಿದ ಬಳಿಕ ಗಣಿ ಜಿಲ್ಲೆ ಬಳ್ಳಾರಿಯಲ್ಲಿ 4,225 ಜನರು ಅನರ್ಹರು ಎಂದು ಬೆಳಕಿಗೆ ಬಂದಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ನಡೆಸಿದ ದಾಖಲೆಗಳ ಪರಿಶೀಲನೆಯಲ್ಲಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದವರ ಪೈಕಿ 3,921 ಮಂದಿ ಆದಾಯ ತೆರಿಗೆ ಪಾವತಿದಾರರು ಎಂಬುದು ಪತ್ತೆಯಾಗಿದೆ. ಗೃಹಲಕ್ಷ್ಮಿ ಯೋಜನೆಯ ನಿಯಮಾವಳಿಗಳ ಪ್ರಕಾರ ಆದಾಯ ತೆರಿಗೆ ಪಾವತಿದಾರರು ಯೋಜನೆಗೆ ಅರ್ಹರಲ್ಲ. ಇದರ ಜತೆಗೆ 304 ಮಂದಿ ಫಲಾನುಭವಿಗಳು ಈಗಾಗಲೇ ಮೃತಪಟ್ಟಿದ್ದರೂ ಅವರ ಹೆಸರಿನಲ್ಲಿ ಯೋಜನೆಯ ಹಣ ಬಿಡುಗಡೆ ಆಗುತ್ತಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಒಟ್ಟು 4,225 ಮಂದಿಯನ್ನು ಯೋಜನೆಯ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ. ಅನರ್ಹರನ್ನು ಡಿಲಿಟ್ ಮಾಡಿಸುವ ಕೆಲಸ ನಡೆದಿದೆ ಎಂದು ಇಲಾಖೆ ಅಧಿಕಾರಿಗಳು ''''ಕನ್ನಡಪ್ರಭ''''ಕ್ಕೆ ತಿಳಿಸಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಇಲಾಖೆ ಅಧಿಕಾರಿಗಳು, ಅನರ್ಹರನ್ನು ಪತ್ತೆ ಮಾಡಿ ಯೋಜನೆ ಪಟ್ಟಿಯಿಂದ ತೆಗೆದು ಹಾಕುತ್ತಿರುವುದರಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಹಾಗೂ ವರ್ಷಕ್ಕೆ ಕೋಟ್ಯಂತರ ರುಪಾಯಿ ಉಳಿತಾಯವಾಗುವ ನಿರೀಕ್ಷೆಯಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಖಜಾನೆಯ ಮೇಲೆ ಹೆಚ್ಚುತ್ತಿರುವ ಆರ್ಥಿಕ ಒತ್ತಡಕ್ಕೂ ಮುಕ್ತಿ ದೊರೆತಂತಾಗಿದೆ ಎಂದರು.
ಪ್ರಸ್ತುತ ಬಳ್ಳಾರಿ ಜಿಲ್ಲೆಯಲ್ಲಿ 2,94,857 ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಯೋಜನೆಯ ಪಾರದರ್ಶಕತೆ ಕಾಪಾಡಲು ಹಾಗೂ ನಿಜವಾದ ಅರ್ಹರಿಗೆ ಸೌಲಭ್ಯ ತಲುಪಿಸಲು ಮುಂದಿನ ದಿನಗಳಲ್ಲಿಯೂ ನಿರಂತರ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರಂತರ ಪ್ರಕ್ರಿಯೆ: ಗೃಹಲಕ್ಷ್ಮಿ ಯೋಜನೆಯಲ್ಲಿ ಅನರ್ಹರನ್ನು ಪಟ್ಟಿಯಿಂದ ತೆಗೆದು ಹಾಕುವ ಪ್ರಕ್ರಿಯೆ ನಡೆದಿದೆ. ಇದು ನಿರಂತರವಾದ ಪ್ರಕ್ರಿಯೆಯಾಗಿದ್ದು ಮೃತರ ಖಾತೆಗೆ ಸಂದಾಯ ಹಣವನ್ನು ಸರ್ಕಾರಕ್ಕೆ ವಾಪಸ್ ಕಳಿಸುವ ಕೆಲಸ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಮಕೃಷ್ಣ ನಾಯಕ ಹೇಳಿದರು.