ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಲ್ಲೆಯ ಬಹುನಿರೀಕ್ಷಿತ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಾಗಲಕೋಟೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಸ್ಥಾಪನೆಗೆ ₹450 ಕೋಟಿ ಮೊತ್ತದ ಪ್ರಸ್ತಾವನೆಗೆ ಮುಂಬರುವ ಸಚಿವ ಸಂಪುಟದಲ್ಲಿ ಅನುಮೋದನೆ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದ್ದಾರೆ ಎಂದು ಬಿಟಿಡಿಎ ಅಧ್ಯಕ್ಷ ಶಾಸಕ ಎಚ್.ವೈ.ಮೇಟಿ ತಿಳಿಸಿದ್ದಾರೆ.ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಸ್ಥಾಪಿಸಬೇಕೆಂಬುದು ಬಹುದಿನಗಳ ಬೇಡಿಕೆ. ಇದಕ್ಕಾಗಿ ಸಾಕಷ್ಟು ಪ್ರಯತ್ನಿಸಿದ್ದು, ಕ್ಷೇತ್ರದ ಜನತೆಗೆ ತಿಳಿದಿದೆ. ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಸ್ಥಾಪನೆಗೆ ₹450 ಕೋಟಿ ಮೊತ್ತದ ಪ್ರಸ್ತಾವನೆಯನ್ನು ರಾಜೀವ ಗಾಂಧಿ ವಿವಿ ಮೂಲಕ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಬಾಗಲಕೋಟೆ ವೈದ್ಯಕೀಯ ಕಾಲೇಜಿಗೆ 2025-26ನೇ ಸಾಲಿನ ಹಣಕಾಸು ವರ್ಷದಲ್ಲಿ ₹75 ಕೋಟಿ, 2026-27ನೇ ಸಾಲಿಗೆ ₹125 ಕೋಟಿ, 2027-28ನೇ ಸಾಲಿಗೆ ₹125 ಕೋಟಿ, 2028-29ನೇ ಸಾಲಿಗೆ ₹125 ಕೋಟಿ ಹೀಗೆ ಒಟ್ಟು ₹450 ಕೋಟಿ ಅನುದಾನ ನೀಡಲು ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆಯಲಿದೆ ಎಂದು ತಿಳಿಸಿದ್ದಾರೆ.ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ₹450 ಕೋಟಿ ಮತ್ತು ಕನಕಪುರದ ವೈದ್ಯಕೀಯ ಕಾಲೇಜಿಗೆ ₹550 ಕೋಟಿ ಮೊತ್ತ ಸೇರಿ ಒಟ್ಟು ₹1 ಸಾವಿರ ಕೋಟಿ ಮೊತ್ತದ ಪ್ರಸ್ತಾವನೆಗೆ ಇಲಾಖೆಗೆ ಸಲ್ಲಿಕೆಯಾಗಿದೆ. ಈ ಕುರಿತು ವೈದ್ಯಕೀಯ ಸಚಿವರು, ಪರಿಶೀಲಿಸಿ, ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲು ಕಡತ ಸಿದ್ಧಪಡಿಸಲು ಸಂಬಧಿಸಿದವರಿಗೆ ತಿಳಿಸಿದ್ದಾರೆ ಎಂದು ಶಾಸಕರು ಪ್ರಕಟನೆಯಲ್ಲಿ ಹೇಳಿದ್ದಾರೆ.