ಸುಗಮ, ಮುಕ್ತ ಚುನಾವಣೆಗೆ ೪೮ ಗಂಟೆ ಪೂರ್ವ ಪ್ರತಿಬಂಧಕಾಜ್ಞೆ ಜಾರಿ-ಜಿಲ್ಲಾಧಿಕಾರಿ ಆದೇಶ

KannadaprabhaNewsNetwork | Published : Apr 26, 2024 12:52 AM

ಸಾರಾಂಶ

ಲೋಕಸಭಾ ಮತದಾನ ಮುಕ್ತಾಯಗೊಳ್ಳುವ ಅವಧಿಯ ೪೮ ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಿಆರ್‌ಪಿಸಿ ೧೯೭೩ ಕಲಂ ೧೪೪ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ್ ಮೂರ್ತಿ ಆದೇಶ ಹೊರಡಿಸಿದ್ದಾರೆ.

ಹಾವೇರಿ: ಲೋಕಸಭಾ ಸಾರ್ವತ್ರಿಕ ಚುಣಾವಣೆ ಹಿನ್ನೆಲೆಯಲ್ಲಿ ಮೇ ೭ರಂದು ಮತದಾನ ಜರುಗಲಿದ್ದು, ಮತದಾನ ಮುಕ್ತಾಯಗೊಳ್ಳುವ ಅವಧಿಯ ೪೮ ಗಂಟೆಗಳ ಪೂರ್ವದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ಮತದಾನವು ಸುಗಮವಾಗಿ ಮತ್ತು ಮುಕ್ತವಾಗಿ ಜರುಗಿಸುವ ಹಿತದೃಷ್ಟಿಯಿಂದ ಸಿಆರ್‌ಪಿಸಿ ೧೯೭೩ ಕಲಂ ೧೪೪ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಘುನಂದನ್ ಮೂರ್ತಿ ಆದೇಶ ಹೊರಡಿಸಿದ್ದಾರೆ.ಜಿಲ್ಲಾದ್ಯಂತ ಮೇ ೭ರಂದು ಮತದಾನ ನಡೆಯಲಿದೆ. ಮತದಾನ ಕೊನೆಗೊಳ್ಳುವ ೪೮ ಗಂಟೆಗಳ ಪೂರ್ವದಲ್ಲಿ ಅಂದರೆ ಮೇ ೫ರಂದು ಸಂಜೆ ೬ ಗಂಟೆಯಿಂದ ಪ್ರಾರಂಭಿಸಿ ಮೇ ೮ರ ಸಂಜೆ ೬ ಗಂಟೆಯವರೆಗೆ ಸಿ.ಆರ್.ಪಿ.ಸಿ.೧೯೭೩ರ ಕಲಂ ೧೪೪ರ ಮೇರೆಗೆ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ.ನಿಷೇಧಾಜ್ಞೆ ಅವಧಿಯಲ್ಲಿ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ ಐದು ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರತಕ್ಕದ್ದಲ್ಲ. ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ಡೊಣ್ಣೆ, ಚಾಕು ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ.ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಸೈಬರ್ ಕೆಫೆಗಳನ್ನು ನಿರ್ಭಂಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ ೧೦೦ ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ. ಕಲ್ಲುಗಳನ್ನು ಕ್ಷಾರಪದಾರ್ಥ ಇಲ್ಲವೆ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಈ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.ಕಲ್ಲುಗಳನ್ನು ಮತ್ತು ಎಸೆಯುವಂಥಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ, ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ.ಈ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂಥಹ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ. ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ಹಾಗೂ ಕೋವಿಡ್ ಮಾರ್ಗಸೂವಿಗಳನ್ನು, ನಿಯಮಗಳನ್ನು ಪಾಲಿಸಬೇಕು. ಮತದಾನದ ದಿನದಂದು ಮತಗಟ್ಟೆಗಳ ಸುತ್ತ ೧೦೦ ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್, ಕಾರ್ಡ್ಲೆಸ್ ಫೋನ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮತದಾನ ದಿನದಂದು ಮತಗಟ್ಟೆಗಳ ಸುತ್ತ ೧೦೦ ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನಾವುದೇ ವಸ್ತುಗಳನ್ನು ಬಳಸುವಂತಿಲ್ಲ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಬಹಿರಂಗ ಪ್ರಚಾರ ಮೇ ೫ರ ಸಂಜೆ ೬ ಗಂಟೆಗೆ ಕೊನೆಗೊಳ್ಳಲಿದೆ. ಈ ಅವಧಿಯ ನಂತರ ಹಾವೇರಿ ಜಿಲ್ಲೆಯ ಮತದಾರರಲ್ಲದವರು ಜಿಲ್ಲೆಯ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಕಲ್ಯಾಣ ಮಂಟಪಗಳು, ಸಮುದಾಯ ಭವನಗಳು, ಹೋಟೆಲುಗಳು ಮತ್ತು ಅತಿಥಿ ಗೃಹಗಳಲ್ಲಿ ವಾಸ್ತವ್ಯ ಹೂಡಿದವರ ಪಟ್ಟಿಗಳ ಪರಿಶೀಲನೆ ಮಾಡಲಾಗುವುದು. ಹಾವೇರಿ ಜಿಲ್ಲೆಯ ಮತದಾರರಲ್ಲದವರು ಮತಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಪೊಲೀಸ್ ಇಲಾಖೆ ಕ್ರಮಕೈಗೊಳ್ಳಲಿದೆ. ವಿಧಾನಸಭಾ ಕ್ಷೇತ್ರಗಳ ಗಡಿ ಪ್ರದೇಶಗಳಲ್ಲಿ ಇರುವ ಚೆಕ್ ಪೋಸ್ಟ್‌ಗಳಲ್ಲಿ ಮತಕ್ಷೇತ್ರದ ಹೊರಗಿನಿಂದ ಬರುವ ಎಲ್ಲಾ ರೀತಿಯ ವಾಹನಗಳನ್ನು ಕಡ್ಡಾಯವಾಗಿ, ಸೂಕ್ಷ್ಮವಾಗಿ ಪರಿಶೀಲಿಸಬೇಕು.ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ೧೮೮ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು. ಈ ಆದೇಶವನ್ನು ಮತದಾನ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಚುನಾವಣಾ ಕಾರ್ಯನಿರತ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಹಾಗೂ ಒಬ್ಬೊಬ್ಬರಾಗಿ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ.ಆದರೆ ಈ ಮೇಲ್ಕಂಡ ಆದೇಶವು ಬಾಗಿಲಿನಿಂದ ಬಾಗಿಲಿಗೆ ಮತಯಾಚಿಸುವ ಸಲುವಾಗಿ ಮನೆಯಿಂದ ಮನೆಗೆ ಅಭ್ಯರ್ಥಿ ಭೇಟಿ ನೀಡಿ ಪ್ರಚಾರ ಮಾಡುವುದಕ್ಕೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this article