ಕನ್ನಡಪ್ರಭ ವಾರ್ತೆ ಕಲಬುರಗಿ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಗುರುವಾರ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ ₹20 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಶಕ್ತಿ ಯೋಜನೆ ಜಾರಿ ಮುನ್ನ ರಾಜ್ಯದಲ್ಲಿ ಪ್ರತಿ ದಿನ 84 ಲಕ್ಷ ಜನ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಯೋಜನೆ ಜಾರಿ ನಂತರ 1.10 ಕೋಟಿ ಜನ ಪ್ರಯಾಣಿಸುತ್ತಿದ್ದಾರೆ. ಶಕ್ತಿ ಯೋಜನೆ ಕುರಿತು ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದರು. ಈಗ ಯೋಜನೆ ಜಾರಿಯಾಗಿದೆ. ಕಳೆದ 8 ತಿಂಗಳ ಅವಧಿಯಲ್ಲಿ 139 ಕೋಟಿ ಜನ ಸಂಚಾರ ಮಾಡಿದ್ದಾರೆ. ಮಹಿಳಾ ಸಬಲೀಕರಣಕ್ಕೆ ದಿಟ್ಟ ಹೆಜ್ಜೆ ಇದಾಗಿದೆ ಎಂದು ಬಣ್ಣಿಸಿದರು.ಕೆ.ಕೆ.ಆರ್.ಟಿ.ಸಿ. ಸಂಸ್ಥೆಗೆ ಈಗಾಗಲೆ 630 ಬಸ್ ನೀಡಲಾಗಿದೆ. ಮುಂದಿನ ದಿನದಲ್ಲಿ ಮತ್ತೆ 485 ಬಸ್ ನೀಡಲಾಗುವುದು. ರಾಜ್ಯದಲ್ಲಿ 2016ರ ನಂತರ 13,888 ಜನ ನಿವೃತ್ತಿಯಾಗಿದ್ದು, ಹಿಂದಿನ ಸರ್ಕಾರದಲ್ಲಿ ನೇಮಕಾತಿ ನಡೆದಿರಲಿಲ್ಲ. ನಮ್ಮ ಸರ್ಕಾರ ಬಂದ ಕೂಡಲೆ ನೇಮಕಾತಿಗೆ ಚಾಲನೆ ನೀಡಿದ್ದೇವೆ. 9 ಸಾವಿರ ಸಿಬ್ಬಂದಿ ನೇಮಕಕ್ಕೆ ಸಿ.ಎಂ. ಒಪ್ಪಿಗೆ ನೀಡಿದ್ದಾರೆ. ಇದರಲ್ಲಿ ಕೆ.ಕೆ.ಆರ್.ಟಿ.ಸಿ. ಸಂಸ್ಥೆಯ 1,680 ನೇಮಕಾತಿ ಸೇರಿವೆ. 500 ಜನರಿಗೆ ಅನುಕಂಪ ಮೇಲೆ ಉದ್ಯೋಗ ನೀಡಲಾಗಿದೆ ಎಂದರು.
ಇತ್ತೀಚೆಗೆ ನಡೆದ ಮಂಡಳಿ ಸಭೆಯಲ್ಲಿ ಈಶಾನ್ಯ ಭಾಗದ ಜಿಲ್ಲೆಗಳು ಬೆಂಗಳೂರಿಗೆ 600 ಕಿ.ಮೀ. ದೂರದಲ್ಲಿರುವ ಕಾರಣ ಮತ್ತು ಓಡಾಟ ಹೆಚ್ಚಿರುವುದರಿಂದ ವೋಲ್ವೋ, ಎ.ಸಿ. ಬಸ್‍ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಓಡಿಸುವಂತೆ ಎಂ.ಡಿ. ಅವರಿಗೆ ಸೂಚನೆ ನೀಡಿದ್ದೇನೆ. ಪರಿಣಾಮ ಇಂದಿಲ್ಲಿ ಎ.ಸಿ./ ನಾನ್ ಎ.ಸಿ. ಸ್ಲೀಪರ್ ಬಸ್‍ಗಳಿಗೆ ಚಾಲನೆ ನೀಡಿದ್ದೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಕಲಬುರಗಿ ಮಹಾನಗರ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಬೆಳೆಯುತ್ತಿದೆ. ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ಪ್ರತಿನಿತ್ಯ 1,200 ಬಸ್ ನಿರಂತರ ಕಾರ್ಯಾಚರಣೆ ಮಾಡುತ್ತಿವೆ. ಪರಿಣಾಮ ನಗರದಲ್ಲಿ ವಾಹನ ಸಂಚಾರ ದಟ್ಟಣೆಯಿಂದ ಪರಿಸರ ಮಾಲಿನ್ಯ ಹೆಚ್ಚಿದೆ. ಇದನ್ನು ತಡೆಯಲು ಕಲಬುರಗಿ ನಗರದ ನಾಲ್ಕು ರಿಂಗ್ ರಸ್ತೆಯಲ್ಲಿ ಅಂದರೆ ಜೇವರ್ಗಿ ರಸ್ತೆ, ಹುಮನಾಬಾದ ರಸ್ತೆ, ಆಳಂದ ರಸ್ತೆ, ಸೇಡಂ ರಸ್ತೆಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಿಸಬೇಕು ಎಂದು ಸಾರಿಗೆ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದರಿಂದ ವೇದಿಕೆಯಲ್ಲೇ ಸಾರಿಗೆ ಸಚಿವರು ಶಾಸಕರ ಮನವಿಗೆ ಧನಾತ್ಮಕವಾಗಿ ಸ್ಪಂದಿಸಿದರು.
ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಮಾತನಾಡಿ, ಮಂಡಳಿಯಿಂದಲೆ ₹20 ಕೋಟಿ ವೆಚ್ಚದಲ್ಲಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಕೆ.ಕೆ.ಆರ್.ಟಿ.ಸಿ ಸಂಸ್ಥೆಗೆ 120 ಬಸ್ ಖರೀದಿಗೆ ಮಂಡಳಿಯಿಂದ ₹50 ಕೋಟಿ ನೀಡಲಾಗುವುದು. ಇತ್ತೀಚೆಗೆ ಮಂಡಳಿಯಲ್ಲಿ ಒಂದು ನಿರ್ಣಯ ತೆಗೆದುಕೊಂಡಿದ್ದು ಶೇ.1/3 ಭಾಗ ಮಂಡಳಿ ಅನುದಾನ ನೀಡಿದರೆ, ಉಳಿದ 2/3 ಭಾಗ ಸಂಬಂಧಪಟ್ಟ ಇಲಾಖೆ ನೀಡಬೇಕು. ಹೀಗಾಗಿ ಬಸ್ ಖರೀದಿಗೆ ಉಳಿದ ಹಣ ಸರ್ಕಾರ ನೀಡಬೇಕೆಂದು ಸಚಿವ ರಾಮಲಿಂಗಾರೆಡ್ಡಿಗೆ ಅವರಿಗೆ ಕೋರಿಕೊಂಡರು.
ಸಮಾರಂಭಕ್ಕು ಮುನ್ನ ಸಚಿವ ರಾಮಲಿಂಗಾರೆಡ್ಡಿ ಅವರು ಕಲ್ಯಾಣ ರಥ (ಎ.ಸಿ. ಸ್ಲೀಪರ್) ಮತ್ತು ಅಮೋಘವರ್ಷ (ನಾನ್ ಎ.ಸಿ. ಸ್ಲೀಪರ್) ಬಸ್ಸುಗಳ ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಅಪಘಾತ ರಹಿತ ಸೇವೆ ಸಲ್ಲಿಸಿದ 6 ಜನರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಮತ್ತು ಕಲಬುರಗಿ ವಿಭಾಗ-1 ಹಾಗೂ 2ರ 121 ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಭಾಗವಾಗಿ ಸಾಂಕೇತಿಕವಾಗಿ ಇಬ್ಬರಿಗೆ ಬೆಳ್ಳಿ ಪದಕ ವಿತರಿಸಲಾಯಿತು. ಇದಲ್ಲದೆ ಎಜಾಜ್ ಅಹ್ಮದ್, ರೇವಣಸಿದ್ದಪ್ಪ ಅವರಿಗೆ ಅನುಕಂಪದ ನೇಮಕಾತಿ ಅದೇಶ ಪತ್ರ ನೀಡಲಾಯಿತು. ನಿಗಮದಲ್ಲಿ ಸೇವಾ ಅವಧಿಯಲ್ಲಿ ಮೃತಪಟ್ಟ 8 ಜನ ಅಧಿಕಾರಿ- ಸಿಬ್ಬಂದಿಗಳ ಅವಲಂಬಿತರಿಗೆ ತಲಾ ₹10 ಲಕ್ಷದಂತೆ ಒಟ್ಟು 80 ಲಕ್ಷ ರು. ಗಳ ಆಂತರಿಕ ಗುಂಪು ವಿಮಾ ಪರಿಹಾರದ ಚೆಕ್‍ಗಳನ್ನು ಸಹ ವಿತರಣೆ ಮಾಡಲಾಯಿತು.