ಕನ್ನಡಪ್ರಭ ವಾರ್ತೆ ಶಿರಾ
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ತರುವಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದೆ, ಜನರ ವಿಶ್ವಾಸವನ್ನು ಕೂಡ ಗೆದ್ದಿದೆ. ಯುವಕರ ಧ್ವನಿಯಾಗಿರುವ ರಾಹುಲ್ ಗಾಂಧಿಯವರಿಗೆ ನಾವೆಲ್ಲ ಶಕ್ತಿಯಾಗಿ ನಿಲ್ಲಬೇಕಿದೆ. ಅಭ್ಯರ್ಥಿ ಯಾರೇ ಆಗಲಿ ನಮ್ಮ ಉದ್ದೇಶ ಒಂದೇ ಕಾಂಗ್ರೆಸ್ ಪಕ್ಷ. ಈ ಭಾರಿ ಲೋಕಸಭೆಯಲ್ಲಿ ಜಯಗಳಿಸಬೇಕು ಎಂದು ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಲೋಕಸಭಾ ಉಸ್ತುವಾರಿ ವಿನಯ್ ತಿಮ್ಮಾಪುರ ಹೇಳಿದರು.ಶನಿವಾರ ನಗರದ ಶಾಸಕರ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಪ್ರತಿ ಫಲಾನುಭವಿಗಳಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಹೆಚ್ಚು ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಯುವ ಕಾಂಗ್ರೆಸ್ ಸಭೆಗಳನ್ನು ಮಾಡಲಾಗುತ್ತಿದೆ. ತಳಮಟ್ಟದಿಂದ ಯೂತ್ ಕಾಂಗ್ರೆಸ್ನ್ನು ಸಂಘಟಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಶ್ರಮಿಸುತ್ತೇವೆ ಎಂದರು.
ಭಾರತ ದೇಶ ಇಂದು ಈ ಮಟ್ಟಕ್ಕೆ ಅಭಿವೃದ್ಧಿ ಹೊಂದಿರುವುದಕ್ಕೆ ಕಾರಣ ಕಾಂಗ್ರೆಸ್ ಪಕ್ಷ. ದೇಶ ಕಟ್ಟುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಹಾಗೂ ಕೊಡುಗೆ ಅಪಾರ. ಉಳುವವನೆ ಭೂಮಿ ಒಡೆಯ ಕಾಯ್ದೆ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷ. ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿರುವುದು ಬಿಜೆಪಿ ಪಕ್ಷ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 28 ಸ್ಥಾನಗಳನ್ನು ಗೆಲುವು ಸಾಧಿಸಬೇಕು. ಇದರಲ್ಲಿ ಯುವಕರ ಪಾತ್ರ ಬಹಳ ಮುಖ್ಯವಾಗಿದೆ. ಆದ್ದರಿಂದ ಕ್ಷೇತ್ರದಲ್ಲಿ ಯುವಕರನ್ನು ಸಂಘಟಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ಯುವಕರಿಗೆ ಹೆಚ್ಚು ಆದ್ಯತೆ ನೀಡುವ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಹಲವು ಜಿಲ್ಲಾಧ್ಯಕ್ಷರು, ರಾಜ್ಯದ ಪದಾಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ದಿಸುತ್ತೇನೆ. ನನಗೆ ಟಿಕೆಟ್ ನೀಡದಿದ್ದರೂ ಯಾರಿಗೆ ಟಿಕೆಟ್ ನೀಡಿದರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾದ ಭವ್ಯಾ, ಪ್ರಧಾನ ಕಾರ್ಯದರ್ಶಿಗಳಾದ ಆಶಿಕ್, ರಫೀಕ್, ಉಪಾಧ್ಯಕ್ಷ ರಂಗನಾಥ್, ಯಶವಂತ್ ಗೌಡ, ಮುಖಂಡರಾದ, ಸೈಯದ್ ಆಫೀಜ್, ಎನ್.ಎಸ್.ಯು.ಐ. ಪ್ರಧಾನ ಕಾರ್ಯದರ್ಶಿ ರಂಗನಾಥ್ ಸೇರಿದಂತೆ ಹಲವರು ಹಾಜರಿದ್ದರು.