ಕಟ್ಟಡದಡಿ ಸಿಕ್ಕಿ ಸತ್ತವರ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ : ಮುಖ್ಯಮಂತ್ರಿ ಸಿದ್ದರಾಮಯ್ಯ

KannadaprabhaNewsNetwork | Updated : Oct 25 2024, 07:53 AM IST

ಸಾರಾಂಶ

ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 ಬೆಂಗಳೂರು : ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ ₹5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರ ವೈದ್ಯಕೀಯ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿರ್ಮಾಣ ಹಂತದ ಕಟ್ಟಡ ಕುಸಿದ ಬಾಬುಸಾಪಾಳ್ಯಕ್ಕೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ಜತೆಗೆ ಪರಿಹಾರ ನೀಡಲು ಸರ್ಕಾರದ ಚಿಂತನೆ ನಡೆಸಲಿದೆ ಎಂದು ತಿಳಿಸಿದರು.

ಒಟ್ಟು ಎಂಟು ಮಂದಿ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಎಂಟು ಮಂದಿಯನ್ನು ರಕ್ಷಿಸಲಾಗಿದೆ. ಸಾವನ್ನಪ್ಪಿದ 8 ಜನರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ ತಲಾ ₹2 ಲಕ್ಷ, ಬಿಬಿಎಂಪಿಯಿಂದ ₹3 ಲಕ್ಷದಂತೆ ಒಟ್ಟು ₹5 ಲಕ್ಷ ಪರಿಹಾರ ನೀಡಲಾಗುವುದು ಎಂದರು.

ವಲಯ ಆಯುಕ್ತರ ವಿರುದ್ಧ ಕ್ರಮಕ್ಕೆ ಸೂಚನೆ: ಕಂದಾಯ ಬಡಾವಣೆಯಾಗಿದ್ದು, ಅನಧಿಕೃತವಾಗಿ ಪರವಾನಗಿ ಪಡೆಯದೇ ಕಟ್ಟಡ ನಿರ್ಮಿಸಲಾಗಿದೆ. ಅನಧಿಕೃತ ಕಾಮಗಾರಿ ಎಂದು ಬಿಬಿಎಂಪಿ ನೋಟೀಸ್‌ ನೀಡಲಾಗಿದ್ದರೂ, ನಿರ್ಮಾಣ ತಡೆದಿಲ್ಲ ಎಂಬ ಕಾರಣಕ್ಕೆ ಬಿಬಿಎಂಪಿಯ ಸಹಾಯಕ ಎಂಜಿನಿಯರ್‌ ಅಮಾನತುಗೊಳಿಸಲಾಗಿದೆ. ಜತೆಗೆ, ಬಿಬಿಎಂಪಿಯ ಮಹದೇವಪುರ ವಲಯ ಆಯುಕ್ತರು ಹಾಗೂ ಕಾರ್ಯಪಾಲಕ ಎಂಜಿನಿಯರ್‌ಗೂ ನೋಟಿಸ್‌ ನೀಡುವಂತೆ ಸೂಚಿಸಲಾಗಿದೆ ಎಂದರು.

ಅನಧಿಕೃತ ಕಟ್ಟಡ ಬೇಡ: ಕಾಮಗಾರಿ ನಿಲ್ಲಿಸುವಂತೆ ನೋಟೀಸ್‌ ನೀಡಿದರೂ ಕಟ್ಟಡ ಮಾಲೀಕರು ಹಾಗೂ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸಿಲ್ಲ. ಹೀಗಾಗಿ, ಈ ದುರಂತ ನಡೆದಿದೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದರೆ ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು. ಸಹಾಯಕ ಎಂಜಿನಿಯರ್‌ ಅವರಿಂದ ಸೂಕ್ತ ಪರಿಶೀಲನೆಯಾಗಬೇಕು. ಜತೆಗೆ ಕಳಪೆ ಕಾಮಗಾರಿ ಮಾಡದೇ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಈ ಕಟ್ಟಡ ಕುಸಿತ ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯಿಂದಲ್ಲ ಎಂದರು.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಮತ್ತು ಅವಕಾಶ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು. ಈ ರೀತಿ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದರು. ಈ ವೇಳೆ ಸಚಿವರಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್, ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ಸೇರಿದಂತೆ ಮೊದಲಾದವರಿದ್ದರು.

ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ: ಕಟ್ಟಡ ಕುಸಿತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಗಾಯಾಳುಗಳ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಸಿ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಇದೇ ವೇಳೆ ಗಾಯಾಳುಗಳ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

Share this article