ಮಕ್ಕಳು ಹೆಚ್ಚು ದಾಖಲಾಗುವ ಸರ್ಕಾರಿ ಶಾಲೆಗೆ ೫ ಲಕ್ಷ ರು. ವಿಶೇಷ ಅನುದಾನ

KannadaprabhaNewsNetwork |  
Published : May 27, 2026, 01:45 AM IST
೨೬ಕೆಎಂಎನ್‌ಡಿ-೬ಮಂಡ್ಯದ  ಪ್ರವಾಸಿಮಂದಿರದಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರೊಂದಿಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಶಾಸಕ ಪಿ.ರವಿಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಖಾಸಗಿ ಶಾಲೆಗಳ ವ್ಯಾಮೋಹಕ್ಕೊಳಗಾಗಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿಯನ್ನು ತಪ್ಪಿಸುವುದು ನಮ್ಮ ಪ್ರಮುಖ ಗುರಿಯಾಗಬೇಕು. ಸರ್ಕಾರಿ ಶಾಲೆಗಳಲ್ಲೇ ಉತ್ತಮ ಶಿಕ್ಷಣ, ಮೂಲಭೂತ ಸೌಲಭ್ಯಗಳು ಹಾಗೂ ಗುಣಮಟ್ಟದ ಬೋಧನೆ ಲಭ್ಯವಾಗುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮಕ್ಕಳನ್ನು ದಾಖಲಿಸುವ ಸರ್ಕಾರಿ ಶಾಲೆಗೆ ೫ ಲಕ್ಷ ರು. ವಿಶೇಷ ಅನುದಾನ ನೀಡುವುದಾಗಿ ಶಾಸಕ ಪಿ.ರವಿಕುಮಾರ್ ಘೋಷಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಶಿಕ್ಷಕರೊಂದಿಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ಪ್ರತಿಯೊಂದು ಗ್ರಾಮದಲ್ಲೂ ಮನೆಮನೆಗೆ ತೆರಳಿ ವಿದ್ಯಾರ್ಥಿಗಳ ದಾಖಲಾತಿ ಅಭಿಯಾನ ನಡೆಸಬೇಕು. ಖಾಸಗಿ ಶಾಲೆಗಳತ್ತ ಮುಖಮಾಡಿರುವ ಪೋಷಕರನ್ನು ಮನವೊಲಿಸಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ದಾಖಲಿಸುವ ಕಾರ್ಯಕ್ಕೆ ಶಿಕ್ಷಕರು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಖಾಸಗಿ ಶಾಲೆಗಳ ವ್ಯಾಮೋಹಕ್ಕೊಳಗಾಗಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿಯನ್ನು ತಪ್ಪಿಸುವುದು ನಮ್ಮ ಪ್ರಮುಖ ಗುರಿಯಾಗಬೇಕು. ಸರ್ಕಾರಿ ಶಾಲೆಗಳಲ್ಲೇ ಉತ್ತಮ ಶಿಕ್ಷಣ, ಮೂಲಭೂತ ಸೌಲಭ್ಯಗಳು ಹಾಗೂ ಗುಣಮಟ್ಟದ ಬೋಧನೆ ಲಭ್ಯವಾಗುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

೩ ಶಾಲೆಗಳಿಗೆ ತಲಾ ೧೦ ಸಾವಿರ ರು. ಬಹುಮಾನ:

ಶಾಲಾ ಪುನರಾರಂಭವನ್ನು ವಿಭಿನ್ನವಾಗಿ ಆಚರಿಸಿ ಮಕ್ಕಳನ್ನು ಅತ್ಯುತ್ತಮ ರೀತಿಯಲ್ಲಿ ಸ್ವಾಗತಿಸುವ ಮಂಡ್ಯ ವಿಧಾನಸಭಾ ಕ್ಷೇತ್ರದ ಮೂರು ಸರ್ಕಾರಿ ಶಾಲೆಗಳಿಗೆ ತಲಾ ೧೦,೦೦೦ ನಗದು ಬಹುಮಾನವನ್ನು ವೈಯಕ್ತಿಕವಾಗಿ ನೀಡುವುದಾಗಿ ಶಾಸಕರು ಘೋಷಿಸಿದರು.

ಜೂನ್ ೧ರಿಂದ ಶಾಲೆಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಬ್ಬದ ವಾತಾವರಣ ಮೂಡಿಸಬೇಕು. ಪ್ರತಿ ಶಾಲೆಯಲ್ಲೂ ಮಕ್ಕಳಿಗೆ ಆತ್ಮೀಯತೆ, ಸಂತೋಷ ಮತ್ತು ಉತ್ಸಾಹ ತುಂಬುವ ರೀತಿಯಲ್ಲಿ ವಿಶೇಷ ಸ್ವಾಗತ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಿಕ್ಷಕರಿಗೆ ಸಲಹೆ ನೀಡಿದರು.

ಸರ್ಕಾರಿ ಶಾಲೆಗಳ ಮೇಲಿನ ಜನರ ನಂಬಿಕೆಯನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಶಿಕ್ಷಕರು ಮತ್ತು ಅಧಿಕಾರಿಗಳ ಮೇಲಿದೆ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರಕುವಂತೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನಾನು ನೀಡುತ್ತೇನೆ. ಪ್ರತಿ ಮಗುವಿಗೂ ಶಿಕ್ಷಣ ದೊರಕಬೇಕು ಎಂಬುದಕ್ಕೇ ನನ್ನ ಮೊದಲ ಆದ್ಯತೆ ಎಂದರು.

ಸಭೆಯಲ್ಲಿ ಲೋಕೇಶ್ ರವರು ಉಪನಿರ್ದೇಶಕರು ಆಡಳಿತ, ಯೋಗೇಶ್ ರವರು ಉಪ ನಿರ್ದೇಶಕರು ಅಭಿವೃದ್ಧಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹಾದೇವ ರವರು,ನಾಗೇಶ್ ರವರು ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರು, ಚಿಕ್ಕೇಗೌಡ ರವರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಣ ಕಾರ್ಯದರ್ಶಿ, ಕ್ಷೇತ್ರ ಸಂಯೋಜನ ಅಧಿಕಾರಿಗಳು ಮತ್ತು ಶಿಕ್ಷಣ ಸಂಯೋಜನ ಅಧಿಕಾರಿಗಳು ಭಾಗವಹಿಸಿದ್ದರು.

ಜೂ.೯ರಂದು ಮಂಡ್ಯದಲ್ಲಿ ಬೃಹತ್ ಪ್ರತಿಭಾ ಪುರಸ್ಕಾರ: ಪಿ.ರವಿಕುಮಾರ್

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ವಿಧಾನಸಭಾ ಕ್ಷೇತ್ರದ ೨೦೨೫-೨೬ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿರುವ ೧೩೦೦ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಬೃಹತ್ ಪ್ರತಿಭಾ ಪುರಸ್ಕಾರ ಸಮಾರಂಭ ಜೂ.೯ರಂದು ಮಂಡ್ಯ ವಿಶ್ವವಿದ್ಯಾನಿಲಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗ್ರಾಮೀಣ ಭಾಗದ ಮಕ್ಕಳಲ್ಲಿ ಶಿಕ್ಷಣದ ಮೇಲಿನ ಆಸಕ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಸಚಿವ ಮಧು ಬಂಗಾರಪ್ಪ , ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಹಲವು ಗಣ್ಯರು ಹಾಗೂ ಶಿಕ್ಷಣ ಕ್ಷೇತ್ರದ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರಾಜ್ಯದಲ್ಲೇ ಗಮನ ಸೆಳೆಯುವ ರೀತಿಯಲ್ಲಿ ಆಯೋಜನೆಯಾಗುತ್ತಿದ್ದು, ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಜೊತೆಗೆ ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ನುಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಕ್ರೀದ್ ವೇಳೆ ಅಕ್ರಮ ಗೋಸಾಗಾಟ ತಡೆಗೆ ಒತ್ತಾಯ
ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದ ಸಚಿವ ಈಶ್ವರ್ ಖಂಡ್ರೆ