ಬಾಕಿ ಆಸ್ತಿ ತೆರಿಗೆ ಮೇಲಿನ ದಂಡದ 50% ಕಡಿತಕ್ಕೆ ಅಸ್ತು

KannadaprabhaNewsNetwork | Updated : Feb 21 2024, 01:20 PM IST

ಸಾರಾಂಶ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50ರಷ್ಟು ಕಡಿತ ಮತ್ತು ತೆರಿಗೆದಾರಿಗೆ ಅನುಕೂಲವಾಗುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸದನವು ಧ್ವನಿಮತದ ಮೂಲಕ ಅಂಗೀಕರಿಸಿದೆ.

ಕನ್ನಡಪ್ರಭ ವಾರ್ತೆ ವಿಧಾನಸಭೆ

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇ. 50ರಷ್ಟು ಕಡಿತ ಮತ್ತು ತೆರಿಗೆದಾರಿಗೆ ಅನುಕೂಲವಾಗುವ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024ಕ್ಕೆ ಸದನವು ಧ್ವನಿಮತದ ಮೂಲಕ ಅಂಗೀಕರಿಸಿದೆ.

ವಕೀಲರ ಪ್ರತಿಭಟನೆ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ-ಜೆಡಿಎಸ್‌ ಬಾವಿಗಿಳಿದು ಧರಣಿ ನಡೆಸಿದ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಧೇಯಕಕ್ಕೆ ಅಂಗೀಕಾರ ಕೋರಿದರು. ಸಭಾಧ್ಯಕ್ಷ ಯು.ಟಿ.ಖಾದರ್‌ ಅವರು ಧ್ವನಿಮತದ ಮೂಲಕ ವಿಧೇಯಕವನ್ನು ಅಂಗೀಕರಿಸಿದರು.

ವಿಧೇಯಕ ಕುರಿತು ಮಾಹಿತಿ ನೀಡಿದ ಡಿ.ಕೆ.ಶಿವಕುಮಾರ್‌, ವಿಧೇಯಕದಿಂದ ಬೆಂಗಳೂರಿನ ನಾಗರಿಕರಿಗೆ ತೆರಿಗೆ, ದಂಡ ವಿನಾಯಿತಿ ಸೇರಿ ಸುಮಾರು 2,700 ಕೋಟಿ ರು. ಅನುಕೂಲವಾಗಲಿದೆ. 

ಜತೆಗೆ ಪಾಲಿಕೆಗೆ ಸುಮಾರು ಒಂದು ಸಾವಿರ ಕೋಟಿ ರು. ನಷ್ಟು ಆಸ್ತಿ ತೆರಿಗೆ ಬರಲಿದೆ. ಸುಮಾರು 5.51 ಲಕ್ಷ ತೆರಿಗೆ ಬಾಕಿದಾರರು, 5- 7 ಲಕ್ಷ ತೆರಿಗೆ ವ್ಯಾಪ್ತಿಗೆ ಬಾರದವರು ಸೇರಿದಂತೆ 13- 15 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಬಡ ಹಾಗೂ ದುರ್ಬಲ ವರ್ಗದವರಿಗೆ ವಿಧೇಯಕದಲ್ಲಿ ವಿಶೇಷ ವಿನಾಯಿತಿ ನೀಡಲಾಗಿದೆ. ಸರ್ಕಾರದ ವಸತಿ ಯೋಜನೆಯ ಆಸ್ತಿಗಳು ಹಾಗೂ ಕೊಳಗೇರಿ ಪ್ರದೇಶದ ಕಟ್ಟಡಗಳಿಗೆ ಬಡ್ಡಿ ಮೇಲಿನ ದಂಡ ಇರುವುದಿಲ್ಲ. 

ಒಂದು ಸಾವಿರ ಚದರ ಅಡಿವರೆಗಿನ ಸ್ವಯಂ ಬಳಕೆ ಆಸ್ತಿದಾರರಿಗೆ ಸಂಪೂರ್ಣ ದಂಡ ವಿನಾಯಿತಿ ನೀಡಲಾಗಿದೆ. ವಸತಿ ಮತ್ತು ಮಿಶ್ರ ಆಸ್ತಿದಾರರ (ವಸತಿ ಮತ್ತು ವಾಣಿಜ್ಯ) ಬಾಕಿಯನ್ನು ಎಷ್ಟೇ ವರ್ಷದಿಂದ ಉಳಿಸಿಕೊಂಡಿದ್ದರೂ ಹಿಂದಿನ 5 ವರ್ಷಕ್ಕೆ ಮಾತ್ರ ಲೆಕ್ಕಾಚಾರ ಹಾಕಲು ನಿರ್ಧರಿಸಲಾಗಿದೆ. 5 ವರ್ಷಕ್ಕಿಂತ ಹಿಂದಿನ ಅವಧಿಗೆ ಬಡ್ಡಿ ಮನ್ನಾ ಮಾಡಲಾಗಿದೆ ಎಂದು ವಿವರಿಸಿದರು.

Share this article