ಕನ್ನಡಪ್ರಭ ವಾರ್ತೆ ತುಮಕೂರು ಮಹಿಳಾ ಮೀಸಲಾತಿ ಮಸೂದೆ ಅನುಮೋದನೆ ಆಗಬೇಕು. ಇದರಿಂದ ಸಂಸತ್ತು ಮತ್ತು ವಿಧಾನಮಂಡಲದಲ್ಲಿ ಮಹಿಳೆಯರಿಗೆ ಶೇ. 50 ಸ್ಥಾನಗಳ ಅವಕಾಶ ಸಿಗಲಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ರಾಜೀವಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.೫೦ ಸ್ಥಾನಮಾನಗಳನ್ನು ಕೊಡುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಅವಕಾಶ ನೀಡಲಾಯಿತು. ಅದರಿಂದ ಇದೀಗ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಸಿಕ್ಕಿದೆ ಎಂದರು.ನಂತರ ಡಾ.ಮನಮೋಹನ್ ಸಿಂಗ್ ಅವರು ಪ್ರಧಾನಿ ಇದ್ದಾಗ ಸಂಸತ್ತಿನಲ್ಲೂ ಶೇ.50 ಅವಕಾಶ ಕಲ್ಪಿಸುವ ಮಹಿಳಾ ಮಸೂದೆಯನ್ನು ಮಂಡಿಸಲಾಯಿತು. ಆ ದಿನಗಳಲ್ಲಿ ರಾಜ್ಯಸಭೆಯಲ್ಲಿ ಅದು ಅನುಮೋದನೆ ಆಗಲಿಲ್ಲ. ಈಗಲಾದರೂ ಕೇಂದ್ರ ಸರ್ಕಾರ ಈ ಮಸೂದೆಯನ್ನು ಅನುಮೋದಿಸಿ ಮಹಿಳೆಗೆ ಶಕ್ತಿ ನೀಡಬೇಕು ಎಂದರು. ಇಡೀ ವಿಶ್ವದಲ್ಲಿ ಭಾರತದಲ್ಲಿಯೇ ಮಹಿಳೆಯರಿಗೆ ಹೆಚ್ಚು ಅವಕಾಶಗಳನ್ನು ಕಲ್ಪಿಸಿ ಸಬಲೀಕರಣಗೊಳಿಸಲಾಗಿದೆ. ಇಂದು ಮಹಿಳೆ ಎಲ್ಲ ಕ್ಷೇತ್ರದಲ್ಲೂ ಪುರುಷರನ್ನು ಹಿಂದಿಕ್ಕಿ ಸಾಧನೆ ಮಾಡುತ್ತಿದ್ದಾರೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ನೂರುನ್ನಿಸಾ ಮಾತನಾಡಿ, ಮಹಿಳೆಯೇ ತಮ್ಮ ಆತ್ಮ ಸಂತೋಷಕ್ಕಾಗಿ ಕೆಲವು ಜವಾಬ್ದಾರಿಗಳನ್ನು ನಿಭಾಯಿಸಬೇಕಿದೆ. ಇಂದಿನ ದಿನಗಳಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿದ್ದಾರೆ, ಆದರೆ ಆರ್ಥಿಕ ಸ್ವಾವಲಂಭನೆಯನ್ನು ಅನುಭವಿಸುವ ಹಕ್ಕನ್ನು ಜಯಿಸಿಕೊಳ್ಳಬೇಕಿದೆ ಎಂದರು.
ಜಿಪಂ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ.ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಸಿ., ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಶಾರದಮ್ಮ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಸೌಮ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಡಾ.ಸಿದ್ದರಾಮಣ್ಣ ಮತ್ತಿತರರು ಉಪಸ್ಥಿತರಿದ್ದರು.