ಬೆಂಗಳೂರು: ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಅ.5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, ಅದರಲ್ಲಿ 500ಕ್ಕೂ ಹೆಚ್ಚಿನ ಸ್ವಾಮೀಜಿಗಳು ಮತ್ತು 1 ಲಕ್ಷಕ್ಕೂ ಹೆಚ್ಚಿನ ಭಕ್ತಗಣ ಪಾಲ್ಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಸ್ವಾಮೀಜಿ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು ಬಸವಣ್ಣರನ್ನು ಸಾಂತಿಕ ನಾಯಕ ಎಂದು ಘೋಷಿಸಿದ್ದಾರೆ. ಜತೆಗೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣ ಅವರ ಭಾವಚಿತ್ರ ಅಳವಡಿಕೆ ಕಡ್ಡಾಯಗೊಳಿಸಿದ್ದಾರೆ. ಸ್ವತಂತ್ರ ಲಿಂಗಾಯತ ಧರ್ಮ ಘೋಷಣೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಹೀಗೆ ಲಿಂಗಾಯತ ಮತ್ತು ಬಸವಣ್ಣ ಅವರ ಪರವಾಗಿ ಕ್ರಮ ಕೈಗೊಂಡಿದ್ದಕ್ಕಾಗಿ ಸಿದ್ದರಾಮಯ್ಯರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ಮೂಲಕ ವಿವರಿಸಿದ್ದಾರೆ.