ಕನ್ನಡಪ್ರಭ ವಾರ್ತೆ ಮಂಡ್ಯ
ರಾಜ್ಯದ ಎಲ್ಲಾ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಹಾಗೂ ಉಳಿದ ಶೇ.40 ರಷ್ಟು ಇತರೆ ಭಾಷೆಯಲ್ಲಿರಬೇಕು ಎಂದು ಈ ಹಿಂದೆಯೇ ಆದೇಶ ಹೊರಡಿಸಲಾಗಿತ್ತು. ಈ ಆದೇಶ ಪರಿಣಾಮಕಾರಿಯಾಗಿ ಅನುಸರಿಸುತ್ತಿಲ್ಲ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಬೇಸರ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯ ಮೂಲ ಗುಣಗಳಿರುವ ಕನ್ನಡ ಭಾಷೆ ನಮ್ಮ ಅಂತರಂಗದ ಭಾಷೆಯಾಗಿದ್ದು, ಕನ್ನಡದ ಪರವಾಗಿ ನಾವೆಲ್ಲರು ದುಡಿಯಬೇಕು ಎಂದರು.
ಕನ್ನಡ ಭಾಷೆ ನಮ್ಮ ನಿರೀಕ್ಷೆ ಮಟ್ಟದಲ್ಲಿ ಸಶಕ್ತವಾಗಿ ಬೆಳೆಯುತ್ತಿಲ್ಲ. ಕನ್ನಡ ಶಾಲೆಗಳಿಗೆ ಮಕ್ಕಳು ಬಾರದೇ ಶಾಲೆಗಳನ್ನು ಮುಚ್ಚುವಂತಹ ಪರಿಸ್ಥಿತಿ ಎದುರಾಗುತ್ತಿದೆ. ಜೊತೆಗೆ ಆಡಳಿತದಲ್ಲಿಯೂ ಕನ್ನಡದ ಸಂಪೂರ್ಣ ಬಳಕೆಯಾಗುತ್ತಿಲ್ಲ. ಇದೇ ರೀತಿ ಮುಂದುವರೆದರೆ ಕನ್ನಡ ಭಾಷೆ ಬೆಳವಣಿಗೆಯಾಗುವುದಿಲ್ಲ ಎಂದು ಎಚ್ಚರಿಸಿದರು.ಮಂಡ್ಯ ಜಿಲ್ಲೆಯಲ್ಲಿ ಖಾಸಗಿ ಶಾಲೆ ಮತ್ತು ಅಲ್ಪಸಂಖ್ಯಾತರ ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಸುತ್ತಿಲ್ಲ ಎಂಬ ದೂರುಗಳಿವೆ. ಕನ್ನಡ ಭಾಷೆ ಬೆಳೆಸುವ ನಿಟ್ಟಿನಲ್ಲಿ ಯಾವುದೇ ವಿಷಯಗಳ ಬಗ್ಗೆ ಸರ್ಕಾರಿ ಇಲಾಖೆಗಳ ಅಂತರ್ಜಾಲ ಪುಟದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು ಹಾಗೂ ವಿವರಗಳನ್ನು ಕನ್ನಡದಲ್ಲಿ ನಮೂದಿಸಿರಬೇಕು ಎಂದರು.
ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಹೆದ್ದಾರಿಗಳಲ್ಲಿ ಕನ್ನಡ ನಾಮಫಲಕಗಳು ಕಡಿಮೆ ಪ್ರಮಾಣದಲ್ಲಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ಎಚ್ಚೆತ್ತುಕೊಳ್ಳಬೇಕು. ಜಿಲ್ಲಾ ಆಸ್ಪತ್ರೆ, ಬ್ಯಾಂಕ್‌ಗಳು, ಕಚೇರಿಗಳು ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಭಾಷೆ ಬಳಸಬೇಕು. ಸಂಬಂಧಪಟ್ಟ ಎಲ್ಲ ಅರ್ಜಿ ನಮೂನೆಗಳು ಹಾಗೂ ಎಲ್ಲಾ ನಾಮಫಲಕಗಳು ಕನ್ನಡದಲ್ಲಿಯೇ ಇರಬೇಕು ಎಂದು ಸೂಚನೆ ನೀಡಿದರು.ಮಂಡ್ಯದಲ್ಲಿ ಡಿ.20, 21,22 ರಂದು ಮೂರು ದಿನ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಯೊಬ್ಬರೂ ಸಂಪೂರ್ಣವಾಗಿ ತೊಡಗಿಸಿಕೊಂಡಿರುವುದು ಸಂತೋಷ. ಆದ್ದರಿಂದ ಜಿಲ್ಲೆಯಲ್ಲಿ ಕನ್ನಡದ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವುದು ಬಹಳ ಮುಖ್ಯವಾಗಿದೆ ಎಂದರು.
ಕನ್ನಡದ ಸಾರ್ವಭೌಮತೆ ಇರುವುದು ಹಾಗೂ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಮಂಡ್ಯ ಆಗಿದೆ. ಆದ್ದರಿಂದ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಬಂದರು ನಾವೆಲ್ಲರೂ ಸೇರಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಹುದ್ದೆಗಳಲ್ಲಿ ಸ್ಥಳೀಯರಿಗೆ ಶೇಕಡಾ 100 ರಷ್ಟು ಉದ್ಯೋಗ ನೀಡಬೇಕು. ಆದರೆ, ಹೊರಗುತ್ತಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡಿಗರು ಮತ್ತು ಕನ್ನಡಿಗರಲ್ಲದವರ ಬಗ್ಗೆ ಮಾಹಿತಿ ಕ್ರೋಢಿಕರಿಸಬೇಕಿದೆ ಎಂದರು.
ಮಂಡ್ಯ ಜಿಲ್ಲೆಯಲ್ಲಿ ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 3,500 ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿಯೇ ಅನುತ್ತೀರ್ಣರಾಗಿದ್ದಾರೆ. ಶೇ.48 ರಷ್ಟು ಕನ್ನಡ ವ್ಯಾಕರಣದಲ್ಲಿಯೇ ಅನುತ್ತೀರ್ಣರಾಗಿರುವುದು ತಲೆ ತಗ್ಗಿಸುವ ವಿಷಯ ಎಂದು ಬೇಸರ ವ್ಯಕ್ತಪಡಿಸಿದರು.ಕನ್ನಡ ಭವನ ನಿರ್ಮಾಣವಾಗಲಿ:
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಿಲ್ಲೆಯಲ್ಲಿ ನಡೆಯುತ್ತಿದೆ. ಇಲ್ಲಿ ಕನ್ನಡ ಭವನ ನಿರ್ಮಾಣವಾಗಬೇಕು. ಸಮ್ಮೇಳನಕ್ಕೆ ಹೊರ ಜಿಲ್ಲೆಯಿಂದ ಅನೇಕರು ಬರುತ್ತಿದ್ದು, ಜಿಲ್ಲೆಯಲ್ಲಿನ ಐತಿಹಾಸಿಕ ಮತ್ತು ಧಾರ್ಮಿಕ ಕ್ಷೇತ್ರಗಳ ಬಗ್ಗೆ ಮಾಹಿತಿಯನ್ನು ಜಿಲ್ಲೆ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಬೇಕು. ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.ಕನ್ನಡವನ್ನು ಹೆಚ್ಚಾಗಿ ಬಳಸಿದರೆ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ. ಕನ್ನಡದ ನೆಲ, ಜಲವನ್ನು ಪಡೆಯುತ್ತಿರುವ ನಾವೇ ಕನ್ನಡ ಬಳಸದೆ ಹೋದರೆ ಕನ್ನಡ ಭಾಷೆಯು ಮುಂದೊಂದು ದಿನ ಕಣ್ಮರೆಯಾಗುತ್ತದೆ. ಆದ್ದರಿಂದ ಕನ್ನಡ ಉಳಿಸುವ ಭಾವನೆ ಎಲ್ಲರ ಹೃದಯದಲ್ಲಿರಬೇಕು. ಎಲ್ಲರೂ ಜೊತೆಗೂಡಿ ಪರಸ್ಪರ ವಿಶ್ವಾಸದಿಂದ ಕನ್ನಡವನ್ನು ಕಟ್ಟೋಣ. ಕನ್ನಡಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದರೆ ಕನ್ನಡ ಪ್ರಾಧಿಕಾರವನ್ನು ಸಂಪರ್ಕಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ ಸಂತೋಷ್ ಹಾನಗಲ್, ಸದಸ್ಯ ಟಿ. ತಿಮ್ಮೇಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಫಣಿಕುಮಾರ್, ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗಂಗಾಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.