ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ : ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಇರಲಿ

KannadaprabhaNewsNetwork |  
Published : Nov 02, 2024, 01:41 AM ISTUpdated : Nov 02, 2024, 09:43 AM IST
1ಡಿಡಬ್ಪೂಡಿ169ನೇ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ಜಿಲ್ಲಾ ಕ್ರೀಡಾಂಗಣದಲ್ಲಿ ಭುವನೇಶ್ವರಿ ದೇವಿಗೆ ಸಚಿವ ಸಂತೋಷ ಲಾಡ್‌ ಪುಷ್ಪ ಅರ್ಪಿಸಿದರು.  | Kannada Prabha

ಸಾರಾಂಶ

ಕರ್ನಾಟಕದಲ್ಲಿ  ಎಲ್ಲಾ ಕಚೇರಿ, ಅಂಗಡಿ, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದಕ್ಕಾಗಿಯೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ, ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡ:  ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದ್ದು, ಎಲ್ಲಾ ಕಚೇರಿ, ಅಂಗಡಿ, ವಿವಿಧ ವಾಣಿಜ್ಯೋದ್ಯಮ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದಕ್ಕಾಗಿಯೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮವನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ, ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶುಕ್ರವಾರ ಆಯೋಜಿಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಧ್ವಜಾರೋಹಣ ನೆರವೇರಿಸಿದ ಅವರು, ನಾವು ಕನ್ನಡ ನಾಡಿನ ಜವಾಬ್ದಾರಿ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸಬೇಕು. ಜತೆಗೆ ಕನ್ನಡ ನುಡಿ, ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಶ್ರಮಿಸುತ್ತೇವೆ ಎಂದು ಇದೇ ವೇಳೆ ಪ್ರಮಾಣ ಮಾಡೋಣ ಎಂದು ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದರು.

ಕರ್ನಾಟಕ ಏಕೀಕರಣ ದೇಶದ ಸ್ವಾತಂತ್ರ‍್ಯ ಹೋರಾಟದಷ್ಟೇ ಪ್ರಾಮುಖ್ಯತೆ ಪಡೆದಿದೆ. ಭೌಗೋಳಿಕವಾಗಿ 19 ವಿವಿಧ ಆಡಳಿತ ಭಾಗಗಳಲ್ಲಿ ಹರಿದು ಹಂಚಿ ಹೋಗಿದ್ದ ಕನ್ನಡದ ಮನಸ್ಸುಗಳನ್ನು ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ 1956ರಲ್ಲಿ ಒಗ್ಗೂಡಿಸಲಾಯಿತು. ಕರ್ನಾಟಕ ಏಕೀಕರಣ ಚಳವಳಿ ಹುಟ್ಟುಹಾಕಿದ್ದು ಧಾರವಾಡ ಜಿಲ್ಲೆ. ಈ ಸಂಗತಿ ಅಭಿಮಾನದ ಸಂಕೇತವಾಗಿದೆ. ಏಕೀಕರಣ ಚಳವಳಿಯ ಪ್ರಮುಖರಾದ ಆಲೂರ ವೆಂಕಟರಾವ್, ರಾ.ಹ. ದೇಶಪಾಂಡೆ, ಡೆಪ್ಯೂಟಿ ಚನ್ನಬಸಪ್ಪ, ಅದರಗುಂಚಿ ಶಂಕರಗೌಡ ಪಾಟೀಲ ಮತ್ತು ಇತರರನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕೆಂದರು.

ಯಾವ್ಯಾವ ಯೋಜನೆಗೆಷ್ಟು?:  ಜಿಲ್ಲೆಯಲ್ಲಿ ಯಶಸ್ವಿಯಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೂ 1.07 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ₹ 30.45 ಕೋಟಿ ಮೊತ್ತದ ಸೇವೆ ಪಡೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ 3,82,189 ಮಹಿಳಾ ಫಲಾನುಭವಿಗಳಿಗೆ ₹ 820.40 ಕೋಟಿ ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 3,84,630 ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವದರ ಜತೆಗೆ ನಗದಾಗಿ ₹ 256 ಕೋಟಿ ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 4,69,928 ಗೃಹ ಬಳಕೆದಾರರು ಈ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಯುವನಿಧಿ ಯೋಜನೆಯಡಿ 3829 ಫಲಾನುಭವಿಗಳಿಗೆ ₹ 3.85 ಕೋಟಿ ನೇರ ನಗದು ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಪಂ ಸಿಇಒ ಸ್ವರೂಪ ಟಿ.ಕೆ., ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿಯ ಕಾರ್ಗಿಲ್ ಸ್ಮಾರಕ, ಡೆಪ್ಯೂಟಿ ಚನ್ನಬಸಪ್ಪ ಪ್ರತಿಮೆ, ಕೆ.ಜಿ. ಕುಂದಣಗಾರ ಪ್ರತಿಮೆಗೆ ಉಸ್ತುವಾರಿ ಸಚಿವ ಸಂತೋಷ ಲಾಡ್ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ನಂತರ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಇಲಾಖೆಯಿಂದ ಹೆಣ್ಣು ಭ್ರೂಣ ಹತ್ಯೆ ನಿಷೇಧ ಕುರಿತ ಜನಜಾಗೃತಿಗಾಗಿ ರೂಪಿಸಿದ್ದ ಸ್ತಬ್ಧಚಿತ್ರದ ವಾಹನಕ್ಕೆ ಮತ್ತು ಸಾರಿಗೆ ಸಂಸ್ಥೆಯ ಗ್ರಾಮೀಣ ವಿಭಾಗ ಕನ್ನಡ ಕ್ರೀಯಾ ಸಮಿತಿಯು ರೂಪಿಸಿದ್ದ ನಾಡಮಾತೆ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು.

ಕಾರ್ಮಿಕ ಇಲಾಖೆಯಿಂದ ಅಸಂಘಟಿತ ವರ್ಗದ ಕಾರ್ಮಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸಾರ್ವಜನಿಕ ಪ್ರಚಾರಕ್ಕಾಗಿ ರೂಪಿಸಿರುವ ಆರು ಆಟೋಗಳಿಗೆ ಸಚಿವರು ಹಸಿರು ಬಾವುಟ ತೋರಿ ಚಾಲನೆ ನೀಡಿದರು. ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಮೂಲಕ ನೇರೆದ ಜನರ ಗಮನ ಸೆಳೆದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...