ರಾಮನಗರ: ರಾಮನಗರ ಕ್ಷೇತ್ರ ಕಳೆದ 25 ವರ್ಷಗಳ ಕಾಲ ಅಭಿವೃದ್ಧಿಯಾಗದೆ ಹಿಂದುಳಿದಿತ್ತು. ಕಳೆದ ಒಂದೂವರೆ ವರ್ಷದಲ್ಲಿ ನಾನು ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ 600ರಿಂದ 700 ಕೋಟಿ ಅನುದಾನ ತಂದಿದ್ದು, ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದೇನೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ವರ್ಷ ಕಳೆದಿದೆ. ಎಲ್ಲರ ಆಶೀರ್ವಾದ, ಶ್ರಮ ಹಾಗೂ ಪಕ್ಷ ನೀಡಿದ್ದ ಗ್ಯಾರಂಟಿಗಳ ಆಶ್ವಾಸನೆಯಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಎಲ್ಲಾ ಐದು ಭರವಸೆಗಳನ್ನು ಅನುಷ್ಠಾನಕ್ಕೆ ತರುವ ಮುಖಾಂತರ ನುಡಿದಂತೆ ನಡೆದಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಲಾಭ ಜನರ ಮನೆ ಬಾಗಿಲಿಗೆ ತಲುಪಿದೆ. ಇಂತಹ ಕಾರ್ಯಕ್ರಮವನ್ನು ದೇಶದಲ್ಲಿ ಯಾರೂ ಸಹ ಮಾಡಿರಲಿಲ್ಲ. ಆದರೂ ಜನರ ಸಂಕಷ್ಟ ಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಹಕಾರಿ ಆಗಿವೆ. ದಲ್ಲಾಳಿಗಳ ಹಾವಳಿಯನ್ನ ಮೆಟ್ಟಿ ನಿಂತಿದ್ದು, ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಸಂದಾಯ ಮಾಡಿದ್ದೇವೆ ಎಂದರು.ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪ್ರತಿಯೊಬ್ಬರಿಗೆ 7 ಕೆ.ಜಿ ಅಕ್ಕಿ ನೀಡುತ್ತಿದ್ದರು. ಬಳಿಕ ಬಂದ ಬಿಜೆಪಿ ಸರ್ಕಾರ ಅದರ ವ್ಯಾಪ್ತಿಯನ್ನು 4 ಕೆಜಿಗೆ ಇಳಿಸಿತು. ರಾಜ್ಯದಲ್ಲಿ ಮತ್ತೇ ಕಾಂಗ್ರೆಸ್ ಸರಕಾರ ರಚನೆಯಾಗಿದ್ದು, ಪ್ರತಿಯೊಬ್ಬರಿಗೂ 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಬಾಕಿ ಉಳಿದ 5ಕೆಜಿಯ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಭೂತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ಕಾರ್ಯಾದೇಶದ ಪತ್ರ ವಿತರಣೆ ಮಾಡಲಾಯಿತು. ಕೈಲಾಂಚ ಹೋಬಳಿಯ ವಿವಿಧೆಡೆ ವಿವಿಧ ಕಾಮಗಾರಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಗುದ್ದಲಿ ಪೂಜೆ ನೆರವೇರಿಸಿದರು.
15ಕೆಆರ್ ಎಂಎನ್ 1.ಜೆಪಿಜಿ
ರಾಮನಗರ ತಾಲೂಕಿನ ಕೈಲಾಂಚ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಇಕ್ಬಾಲ್ ಹುಸೇನ್ ಭೂಮಿಪೂಜೆ ನೆರವೇರಿಸಿದರು.