ಕೊಪ್ಪಳ: ‘ಪ್ರಜಾಸೇವಾ ಆಂದೋಲನ’ ಸಭೆಗಳಲ್ಲಿ ಸ್ವೀಕರಿಸಿದ ಜನರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ, ಅರ್ಜಿಗಳನ್ನು ವಿಲೇವಾರಿ ಮಾಡುತ್ತಿರುವ ವಿವಿಧ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿಗೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ್ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಒಟ್ಟು 1,303 ಅರ್ಜಿಗಳು ಸ್ವೀಕೃತವಾಗಿದ್ದು, ಕೆಲವು ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಗಿದೆ. ಈ ವರೆಗೆ 696 ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗಿದ್ದು, ಬಾಕಿ ಇರುವ 586 ಅರ್ಜಿಗಳ ಪರಿಹಾರಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಸಭೆಗೆ ಮಾಹಿತಿ ನೀಡಿದರು.
ರೇಷನ್ ಕಾರ್ಡ್‌ಗಳಲ್ಲಿ ಹೊಸ ಸೇರ್ಪಡೆ ಹಾಗೂ ತಿದ್ದುಪಡಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗಿದೆ. ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ಖಾಲಿ ಇರುವ ಪಶುವೈದ್ಯಕೀಯ ಪರೀಕ್ಷಕರ ಹುದ್ದೆಗೆ ಸಂಬಂಧಿಸಿದ ಅರ್ಜಿಗೆ ಸ್ಪಂದಿಸಿ, ಬಿರಳ್ಳಿ ಪಶು ಚಿಕಿತ್ಸಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯಕೀಯ ಪರೀಕ್ಷಕರಿಗೆ ಹಟ್ಟಿ ಗ್ರಾಮಕ್ಕೆ ಪ್ರಭಾರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.ಹನುಮನಹಾಳಕ್ಕೆ ವೈದ್ಯ, ಎಕ್ಸ್‌ರೇ ಯಂತ್ರ: ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕುಷ್ಟಗಿ ತಾಲೂಕಿನ ಹನುಮನಹಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾರ್ವಜನಿಕರ ಬೇಡಿಕೆಯಂತೆ ಎಂಬಿಬಿಎಸ್ ವೈದ್ಯರನ್ನು ನಿಯೋಜಿಸಲಾಗಿದೆ. ಎಕ್ಸ್‌ರೇ ತಂತ್ರಜ್ಞರಿದ್ದರೂ ಯಂತ್ರದ ಕೊರತೆಯಿಂದ ಸೇವೆ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ಲಭ್ಯವಿದ್ದ ಎಕ್ಸ್‌ರೇ ಯಂತ್ರವನ್ನು ಅಲ್ಲಿಗೆ ಸ್ಥಳಾಂತರಿಸಿ ಸೇವೆ ಆರಂಭಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಮಂಗಳೂರು ಆರೋಗ್ಯ ಕೇಂದ್ರದ ಸಮಸ್ಯೆ ಪರಿಹಾರ: ಮಂಗಳೂರು ಗ್ರಾಮದಲ್ಲಿ ನಡೆದ ‘ಪ್ರಜಾಸೇವಾ’ ಸಭೆಯಲ್ಲಿ ಸ್ವೀಕರಿಸಿದ ಅರ್ಜಿಯ ಆಧಾರದ ಮೇಲೆ ಸಮುದಾಯ ಆರೋಗ್ಯ ಕೇಂದ್ರದಲ್ಲಿನ ಮೂಲಸೌಕರ್ಯ ಕೊರತೆ ನೀಗಿಸಲಾಗಿದೆ. ಆರೋಗ್ಯ ಕೇಂದ್ರಕ್ಕೆ 40 ಹೊಸ ಫ್ಯಾನ್‌ಗಳನ್ನು ಅಳವಡಿಸಲಾಗಿದ್ದು, ಒಳಚರಂಡಿ ದುರಸ್ತಿ ಕಾರ್ಯವನ್ನೂ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದರು.