8 ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಮಂಜೂರಾತಿ

KannadaprabhaNewsNetwork |  
Published : Jun 19, 2024, 01:01 AM IST
18ಕೆಎಂಎನ್ ಡಿ17 | Kannada Prabha

ಸಾರಾಂಶ

ಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳು ಒಂದೇ ಕಡೆ ಸಿಗುವಂತೆ ಮಾಡಲು ಜಿಲ್ಲೆಯಲ್ಲಿ 8 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ರೈತರ ಹಿತ ಕಾಪಾಡುವುದೇ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು

ಕನ್ನಡಪ್ರಭ ವಾರ್ತೆ ನಾಗಮಂಗಲಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳು ಒಂದೇ ಕಡೆ ಸಿಗುವಂತೆ ಮಾಡಲು ಜಿಲ್ಲೆಯಲ್ಲಿ 8 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ರೈತರ ಹಿತ ಕಾಪಾಡುವುದೇ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.ತಾಲೂಕಿನ ಬೆಳ್ಳೂರಿನಲ್ಲಿ 2 ಕೋಟಿ ರು.ವೆಚ್ಚದ ರೈತ ಸಂಪರ್ಕ ಕೇಂದ್ರದ ನೂತನ ಕಟ್ಟಡ ಹಾಗೂ ಗೋದಾಮು ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಅರ್ಹ ಫಲಾನುಭವಿ ರೈತರಿಗೆ ಉಚಿತವಾಗಿ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳನ್ನು ವಿತರಿಸಿ ಮಾತನಾಡಿದರು. ರೈತ ಸಂಪರ್ಕ ಕೇಂದ್ರಗಳ ಮೂಲಕ ಯಾವುದೇ ಬೆಳೆಗಳನ್ನು ಬೆಳೆಯುವ ಪದ್ಧತಿ, ಅಧಿಕ ಇಳುವರಿ ತೆಗೆಯುವ ವಿಧಾನ ಮತ್ತು ಮಣ್ಣಿತ ಫಲವತ್ತತೆ ಸೇರಿದಂತೆ ಹಲವು ವಿಚಾರಗಳನ್ನು ರೈತರಿಗೆ ಮಾಹಿತಿ ನೀಡಲಾಗುವುದು ಎಂದರು.

ಬೆಳೆ ವಿಮೆ ನೋಂದಣಿ ಮಾಡಿಸಿ:

ಕೃಷಿ ಚಟುವಟಿಕೆ ಬಗ್ಗೆ ರೈತರಿಗೆ ಯಾವುದೇ ಮಾಹಿತಿ ಅಗತ್ಯವಿದ್ದಲ್ಲಿ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿಕೊಟ್ಟು ಅಧಿಕಾರಿಗಳಿಂದ ಪಡೆದುಕೊಳ್ಳಬಹುದು. ರೈತರು ಸಮಗ್ರ ಬೇಸಾಯದ ಬಗ್ಗೆ ಹೆಚ್ಚು ಗಮನ ಹರಿಸುವ ಜೊತೆಗೆ ಕಡ್ಡಾಯವಾಗಿ ಬೆಳೆ ವಿಮೆ ನೋಂದಣಿ ಮಾಡಿಸಬೇಕು ಎಂದರು.ಎಲ್ಲಾ ಸೌಲಭ್ಯ ಒಂದೇ ಕಡೆ ಸಿಗುವ ಉದ್ದೇಶ:

ಕೃಷಿ ಇಲಾಖೆ ಮೂಲಕ ಸಬ್ಸಿಡಿ ದರದಲ್ಲಿ ಸಿಗಬಹುದಾದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಹೋಬಳಿ ಕೇಂದ್ರಗಳಲ್ಲಿರುವ ರೈತ ಸಂಪರ್ಕ ಕೇಂದ್ರಗಳಲ್ಲಿಯೇ ಸಿಗುತ್ತವೆ. ಹಾಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೃಷಿ ಚಟುವಟಿಕೆಗೆ ಸಂಬಂಧಿಸಿದ ಎಲ್ಲಾ ಸೌಲಭ್ಯ ಒಂದೇ ಕಡೆ ಸಿಗಬೇಕೆಂಬ ಉದ್ದೇಶದಿಂದ ರೈತ ಸಂಪರ್ಕ ಕೇಂದ್ರಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲಾಗುತ್ತಿದೆ ಎಂದು ಹೇಳಿದರು. ರೈತರು ಮಳೆ ಪ್ರಮಾಣವನ್ನು ಅರಿತು ಕಡಿಮೆ ಮತ್ತು ದೀರ್ಘ ಅವಧಿಯಲ್ಲಿ ಬೆಳಗಳ ಬಗ್ಗೆ ನಿರ್ಧಾರ ಮಾಡಬೇಕು. ಲಾಭದಾಯಕ ಕೃಷಿ ಬಗ್ಗೆ ರೈತ ಸಂಪರ್ಕ ಕೇಂದ್ರಗಳು ಮಾರ್ಗದರ್ಶನ ನೀಡುವ ಕಾರ್ಯ ನಿರ್ವಹಿಸಲಿವೆ ಎಂದು ತಿಳಿಸಿದರು.

600 ಹುದ್ದೆಗಳ ನೇಮಕಾತಿಗೆ ಮಂಜೂರಾತಿ:

ಕೃಷಿ ಇಲಾಖೆ ಬಗ್ಗೆ ಈ ಹಿಂದೆ ಸರಿಯಾಗಿ ಗಮನ ಹರಿಸಿದ್ದರೋ ಇಲ್ಲವೋ ಗೊತ್ತಿಲ್ಲ. ಬಹಳ ವರ್ಷಗಳಿಂದ ಶೇ.57ರಷ್ಟು ಹುದ್ದೆಗಳು ಖಾಲಿ ಇದ್ದವು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿ ಮತ್ತು ಕೃಷಿ ಅಧಿಕಾರಿಗಳ 600 ಹುದ್ದೆಗಳ ನೇಮಕಾತಿಗೆ ಮಂಜೂರಾತಿ ಕೊಟ್ಟು ಮಂದಿನ ಪ್ರಕ್ರಿಯೆಗಾಗಿ ಕೆಪಿಎಸ್‌ಸಿಗೆ ಕಳುಹಿಸಲಾಗಿದೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡರೆ ರೈತರಿಗೆ ಅನುಕೂಲವಾಗುತ್ತದೆ ಎಂದರು. ರೈತರಿಗೆ ಉಚಿತ ರಸಗೊಬ್ಬರ ವಿತರಣೆ:

ತಾಲೂಕಿನ ಬೆಳ್ಳೂರು ಹೋಬಳಿಯ ರೈತರಿಗೆ ಉಪಯೋಗವಾಗುವಂತೆ ರೈತ ಸಂಪರ್ಕ ಕೇಂದ್ರ ಕಟ್ಟಡಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಹೊಣಕೆರೆ ಮತ್ತು ದೇವಲಾಪುರ ಹೋಬಳಿ ಕೇಂದ್ರಗಳಲ್ಲಿಯೂ ಸಹ ರೈತ ಸಂಪರ್ಕ ಕೇಂದ್ರಗಳ ನೂತನ ಕಟ್ಟಡ ನಿರ್ಮಿಸಲಾಗುವುದು ಎಂದರು. ಇದೇ ವೇಳೆ ಕೃಷಿ ಇಲಾಖೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ತಾಲೂಕಿನ ಚುಂಚನಹಳ್ಳಿ ಗ್ರಾಮದ ಆಯ್ದ ರೈತ ಫಲಾನುಭವಿಗಳಿಗೆ ಉಚಿತವಾಗಿ ರಸಗೊಬ್ಬರ, ಬಿತ್ತನೆ ಬೀಜ, ಕೀಟನಾಶಕಗಳನ್ನು ಸಚಿವರು ವಿತರಿಸಿದರು.

ಈ ವೇಳೆ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್‌ಕುಮಾರ್, ಪಾಂಡವಪುರ ಉಪ ವಿಭಾಗದ ಉಪ ನಿರ್ದೇಶಕಿ ಮಮತ, ತಹಸೀಲ್ದಾರ್ ನಯೀಂ ಉನ್ನಿಸಾ, ಸಹಾಯಕ ಕೃಷಿ ನಿರ್ದೇಶಕ ಆರ್.ಹರೀಶ್, ಕೃಷಿ ಅಧಿಕಾರಿಗಳಾದ ಯುವರಾಜ್, ರೆಡ್ಡಿ ಶೇಖರ್, ಕೆಆರ್‌ಡಿಎಲ್‌ನ ಎಇಇ ಚೈತ್ರ, ಬೆಳ್ಳೂರು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಲಕ್ಷ್ಮಣಕುಮಾರ್ ಹಾಗೂ ಹಲವು ಮುಖಂಡರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ