ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ತುಮಕೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆ ಗ್ರಾಮ ಪಂಚಾಯಿತಿಯ ಉಜ್ಜನಕುಂಟೆ ಗ್ರಾಮದಿಂದ ತುಮಕೂರು ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ನಂದಿಹಳ್ಳಿ ಗ್ರಾಮದವರೆಗೆ 90 ಕಿ.ಮೀ. ಉದ್ದದ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು. ಪ್ರಜಾಪ್ರಭುತ್ವ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕಾದರೆ ಪ್ರಜಾಪ್ರಭುತ್ವವಾದಿಗಳು ಈ ದಿನಾಚರಣೆಯಲ್ಲಿ ಪಾಲ್ಗೊಳ್ಳಬೇಕು. ಭಾರತ ದೇಶದಲ್ಲಿ ಪ್ರಜಾಪ್ರಭತ್ವವನ್ನು ಗಟ್ಟಿಗೊಳಿಸಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಪ್ರಜಾಪ್ರಭುತ್ವ ದಿನ ಆಚರಿಸಲಾಗುವುದು ಎಂದು ಹೇಳಿದರು.ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈ ಮಾನವ ಸರಪಳಿಯನ್ನು ನಿರ್ಮಿಸಲಾಗುತ್ತಿದ್ದು, ಮಾನವ ಸರಪಳಿಯಲ್ಲಿ ಜಿಲ್ಲೆಯ ಜನತೆ, ಜನಪ್ರತಿನಿಧಿಗಳು, ಅಧಿಕಾರಿ, ಸಂಘ-ಸಂಸ್ಥೆಗಳು, ಕಲಾವಿದರು, ಕ್ರೀಡಾಪಟುಗಳು, ಮಹಿಳಾ ಸಂಘಟನೆಗಳು, ರೈತ ಬಾಂಧವರು, ಸಾಹಿತಿಗಳು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.
ಸಭೆಯಲ್ಲಿ ಜಿಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ದಲಿತ ಮುಖಂಡರಿಗೆ ಸೀಮಿತವಾಗದಿರಲಿಸಭೆಯಲ್ಲಿದ್ದ ವಿವಿಧ ಸಂಘಟನೆಗಳ ಮುಖಂಡರು ಪ್ರಜಾಪ್ರಭುತ್ವ ಕಾರ್ಯಕ್ರಮವನ್ನು ದಲಿತ ಮುಖಂಡರಿಗಷ್ಟೇ ಸೀಮಿತಗೊಳಿಸದೆ ಎಲ್ಲ ಇಲಾಖೆ, ಸಂಘ-ಸಂಸ್ಥೆಗಳನ್ನು ತೊಡಗಿಸಿಕೊಳ್ಳಬೇಕು. ಮಾಹಿತಿ ತಂತ್ರಜ್ಞಾನ, ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿದ್ದು, ಅವರನ್ನು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕೆಂದು ಡೀಸಿ ಶುಭ ಕಲ್ಯಾಣ್ ಸಲಹೆ ನೀಡಿದರು.