
ಗದಗ:ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಕನ್ನಡ ವಿಷಯವನ್ನು ಎದುರಿಸಿದರು. 9361 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 9288 ವಿದ್ಯಾರ್ಥಿಗಳು ಹಾಜರಾಗಿದ್ದರು. 343 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಈ ವೇಳೆ ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ. ಶನಿವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಜರುಗಿದ ಪರೀಕ್ಷೆಯಲ್ಲಿ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತ 200 ಮಿುೕಟರ್ ಪರಿಮಿತಿಯೊಳಗೆ ಪರೀಕ್ಷಾ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿತ್ತು ಎಂದು ಡಿಡಿಪಿಯು ಎಸ್.ಬಿ. ಮಸನಾಯಕ ತಿಳಿಸಿದ್ದಾರೆ.
ಮುಂಡರಗಿ: ಶನಿವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು, ಮೊದಲ ದಿನ ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಲಾಯಿತು. ಪಟ್ಟಣದ ಜಗದ್ಗುರು ಅನ್ಬದಾನೀಶ್ವರ ಪಪೂ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 567 ವಿದ್ಯಾರ್ಥಿಗಳಿದ್ದು, ಅದರಲ್ಲಿ 550 ವಿದ್ಯಾರ್ಥಿಗಳು ಹಾಜರಾಗಿದ್ದು, 17 ಜನ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಸರ್ಕಾರಿ ಪಪೂ ಕಾಲೇಜಿನಲ್ಲಿ ಒಟ್ಟು 453 ವಿದ್ಯಾರ್ಥಿಗಳಿದ್ದು ಅದರಲ್ಲಿ 440 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 13 ವಿದ್ಯಾರ್ಥಿಗಳು ಗೈರಾಗಿದ್ದರು.
ಲಕ್ಷ್ಮೇಶ್ವರ: ಪಟ್ಟಣದಲ್ಲಿ ೨೦೨೫-೨೬ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶನಿವಾರದಿಂದ ಪ್ರಾರಂಭವಾಗಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಪರೀಕ್ಷೆ ಸುಸೂತ್ರವಾಗಿ ಜರುಗಿತು. ಮೊದಲದಿನ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಆಗಮಿಸುತ್ತಿರುವ ದೃಶ್ಯ ಕಂಡು ಬಂತು. ಕನ್ನಡ ಭಾಷೆಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಎದುರಿಸಿದ್ದಾರೆ. ತಾಲೂಕಿನಲ್ಲಿ ಪಟ್ಟಣದ ಬಿಸಿಎನ್ ಸಂಸ್ಥೆಯ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಹಾಗೂ ಸರ್ಕಾರಿ ಪಪೂ ಕಾಲೇಜಿನ ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷಾ ವಿಭಾಗದ ಅಧೀಕ್ಷಕರು ಸೇರಿದಂತೆ ವಿವಿಧ ಸಿಬ್ಬಂದಿ ಸಕಲ ಸಿದ್ಧತೆ ಮಾಡಿಕೊಂಡಿದ್ದು ಕಂಡು ಬಂತು. ಬಿಸಿಎನ್ ಪದವಿ ಪೂರ್ವ ಮಹಾವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ನಡೆದ ಪ್ರಥಮ ಭಾಷೆ ಕನ್ನಡ ವಿಷಯಕ್ಕೆ ಒಟ್ಟು 504 ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳು ಗೈರಾಗಿದ್ದು, 490 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರ್ಕಾರಿ ಪಪೂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕನ್ನಡ ಪರೀಕ್ಷೆಗೆ 308ರಲ್ಲಿ 28 ವಿದ್ಯಾರ್ಥಿಗಳು ಗೈರಾಗಿದ್ದು 280 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ.ವಿಕಲಚೇತನ ವಿದ್ಯಾರ್ಥಿನಿಗೆ ಪ್ರತ್ಯೇಕ ವ್ಯವಸ್ಥೆಪಟ್ಟಣದ ಬಿಸಿಎನ್ ಪಪೂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಸ್ವಪ್ನಾ ಮುಳಗುಂದ ಎನ್ನುವ ವಿಕಲಚೇತನ ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಎಸ್‌ಎಸ್‌ಎಲ್‌ಸಿ ಪೊರೈಸಿರುವ ವಿದ್ಯಾರ್ಥಿನಿಯ ಸಹಾಯದೊಂದಿಗೆ ಪರೀಕ್ಷೆಗೆ ಹಾಜರಾಗಿ ಗಮನ ಸೆಳೆದಳು.