ವೈಜ್ಞಾನಿಕ ಚಿಂತಗಳಿಂದ ಉತ್ತಮ ಭವಿಷ್ಯ ಸಾಧ್ಯ: ಜಿಪಂ ಸಿಇಒ

KannadaprabhaNewsNetwork |  
Published : Mar 01, 2024, 02:18 AM IST
29ಕೆಪಿಆರ್‌ಸಿಆರ್‌08 | Kannada Prabha

ಸಾರಾಂಶ

ರಾಯಚೂರಿನ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಾಹುಲ್ ತುಕಾರಾಮ ಪಾಂಡ್ವೆ ಮಾತನಾಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಸಮಾಜದಲ್ಲಿ ಉತ್ತಮ ನಡವಳಿಕೆ, ವೈಜ್ಞಾನಿಕ ಮನೋಭಾವ ಮತ್ತು ಜೀವನದಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಹೇಳಿದರು.

ಇಲ್ಲಿನ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸರ್.ಸಿ.ವಿ ರಾಮನ್ ಸಭಾಂಗಣದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ಭಾರತದ ಹೆಸರಾಂತ ವಿಜ್ಞಾನಿಯಾಗಿರುವ ಸರ್.ಸಿ.ವಿ ರಾಮನ್ ಬೆಳಕಿನ ಚದುರುವಿಕೆಯ ಪರಿಣಾಮದ ಸಿದ್ಧಾಂತವನ್ನು ಮಂಡಿಸಿ ಜಗತ್ತಿಗೆ ತೋರಿಸಿ ಕೊಟ್ಟಿದ್ದಾರೆ. ಆಧುನಿಕ ವಿಜ್ಞಾನದ ಹಾದಿಯಲ್ಲಿ ಒಂದು ಮಹತ್ವವಾದ ಘಟನೆ ಇದಾಗಿದೆ. ಇದಕ್ಕಾಗಿ ಅವರಿಗೆ 1930ರಲ್ಲಿ ನೊಬೆಲ್ ಪ್ರಶಸ್ತಿ ದೊರೆತಿದೆ. ಇದರ ಸ್ಮರಣಾರ್ಥವಾಗಿ ಫೆ.28 ಅನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದರು.

ಈ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮೂಲ ಉದ್ದೇಶ ಜನರಲ್ಲಿ ವಿಜ್ಞಾನ ಜಾಗೃತಿ ಮತ್ತು ವಿಜ್ಞಾನ ಸಾಕ್ಷರತೆಯನ್ನು ಸೃಷ್ಠಿಸುವುದಾಗಿದೆ. ಅಹಂ ಕೇಂದ್ರಿತ ಮನೋಭಾವನೆಯಿಂದ ಸಾಧಿಸುವುದೇನಿಲ್ಲ. ಸ್ವಾಸ್ಥ್ಯ ಸಮಾಜಕ್ಕಾಗಿ ಉತ್ತಮ ನಡವಳಿಕೆ, ವೈಜ್ಞಾನಿಕ ಮನೋಭಾವ ಮತ್ತು ವೈಜ್ಞಾನಿಕ ಚಿಂತನೆಯ ಅವಶ್ಯಕತೆಯಿದೆ. ಇವುಗಳನ್ನು ಅಳವಡಿಸಿಕೊಂಡಲ್ಲಿ ಮಾತ್ರ ಉತ್ತಮ ಭವಿಷ್ಯ ವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 2023ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಕುರಿತು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ಡಿ.ಪಾಟೀಲ್, ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚಂದ್ರಶೇಖರ ಭಂಡಾರಿ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖಾ ಅಧಿಕಾರಿ ಡಾ. ವೈ.ಬಿ.ವಾಲ್ಮೀಕಿ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಸಂಚಾಲಕ ಸೈಯದ್ ಹಫೀಜಲ್ಲಾ, ವಿಜ್ಞಾನ ಕೇಂದ್ರದ ಕ್ಯುರೇಟರ್‌ ಅಜಿತ್ ಕುಮಾರ್ ಮತ್ತು ಸಿಬ್ಬಂದಿ, ವಿವಿಧ ಶಾಲಾ-ಕಾಲೇಜುಗಳ 170ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ