ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಸ್ವಾಮಿ ವಿವೇಕಾನಂದ ಜಯಂತಿ ದಿನವೇ ಯುವನಿಧಿಗೆ ಚಾಲನೆ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ನಿರುದ್ಯೋಗ ಯುವಜನತೆಗೆ ದೊಡ್ಡ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ನಗರದ ಫ್ರೀಡಂ ಪಾರ್ಕ್‌ನಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಅನುಕೂಲ ಆಗಬೇಕು ಎಂಬ ಉದ್ದೇಶದಿಂದ ಯುವನಿಧಿ ಯೋಜನೆ ಜಾರಿಗೆ ತಂದಿದೆ. ಇದರಿಂದ 2 ವರ್ಷಗಳ ಕಾಲ ನಿರುದ್ಯೋಗಿಗಳಿಗೆ ಸರ್ಕಾರ ಕೈಹಿಡಿಯಲಿದೆ ಎಂದರು.
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ ಭರವಸೆಯಂತೆ ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆ, ಗೃಹಲಕ್ಷ್ಮೀ ಯೋಜನೆ ಈಗಾಗಲೇ ಜಾರಿಗೊಳಿಸಿದ್ದು, ಕೊನೆಯ ಯೋಜನೆಯಾದ ಯುವನಿಧಿಯನ್ನು ಸ್ವಾಮಿ ವಿವೇಕಾನಂದ ಜಯಂತಿ ದಿನವಾದ ಇಂದು ಈ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುತ್ತಿದೆ. ಚುನಾವಣೆ ಪೂರ್ವದಲ್ಲಿ ಪಕ್ಷ ವರಿಷ್ಟರು ಪವಿತ್ರವಾದ ಪ್ರಣಾಳಿಕೆ ರಚಿಸುವ ಜವಬ್ದಾರಿ ವಹಿಸಿದ್ದರು. ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷನಾಗಿ ಕೆಲಸ ಮಾಡಿದ್ದು ನನ್ನ ಭಾಗ್ಯ ಎಂದು ಹೇಳಿದರು.ಮಲೆನಾಡು ರೈತರಿಗೆ ಹಕ್ಕುಪತ್ರ ಕೊಡಿ:
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಚುನಾವಣೆ ಪೂರ್ವದಲ್ಲಿ ಕೊಟ್ಟಿದ್ದ ಭರವಸೆ ಈಡೇರಿಸುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಅದರಂತೆ ಮಲೆನಾಡಿನ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಭರವಸೆಯನ್ನು ಈಡೇರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದರು.ಚುನಾವಣೆ ಪೂರ್ವದಲ್ಲಿ ಮಲೆನಾಡಿನ ರೈತರ ಸಮಸ್ಯೆಯನ್ನು ಈಡೇರಿಸುವ ಬಗ್ಗೆ ಭರವಸೆ ನೀಡಲಾಗಿತ್ತು. ಹೀಗಾಗಿ, ಮಲೆನಾಡಿದ ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಟ್ಟು ಮುಳುಗಡೆ ರೈತರಿಗೆ ಹಕ್ಕುಪತ್ರ ಕೊಡಬೇಕು. ಜೊತೆಗೆ ನಗರದಲ್ಲಿರುವ ಫ್ರೀಡಂ ಪಾರ್ಕ್‌ಗೆ ಅಲ್ಲಮಪ್ರಭು ಅವರ ಹೆಸರನ್ನು ಇಡಬೇಕು ಎಂದು ಒತ್ತಾಯಿಸಿದರು.
- - - -12ಎಸ್‌ಎಂಜಿಕೆಪಿ01: ಮಧು ಬಂಗಾರಪ್ಪ