ದಮನಿತರಿಗೆ ಧ್ವನಿ ನೀಡಿದ ಧೀಮಂತ ನಾಯಕ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

KannadaprabhaNewsNetwork | Published : Apr 15, 2025 1:01 AM

ಸಾರಾಂಶ

ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಿಗಬೇಕು ಎನ್ನುವುದು ಡಾ. ಬಿ.ಆರ್. ಅಂಬೇಡ್ಕರ ಅವರ ಆಶಯವಾಗಿತ್ತು.

ಹಾವೇರಿ: ಡಾ. ಬಿ.ಆರ್. ಅಂಬೇಡ್ಕರ ಬಹುಮುಖ ಪ್ರತಿಭೆ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕ, ಅಸ್ಪೃಸ್ಯತೆ ಹೋಗಲಾಡಿಸಲು ಶ್ರಮಿಸಿದ ಹಾಗೂ ದಮನಿತರಿಗೆ ಧ್ವನಿ ನೀಡಿದ ಧೀಮಂತ ನಾಯಕ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಪರಿಶಿಷ್ಟ ಜಾತಿಗಳ ಒಕ್ಕೂಟಗಳ ಸಹಯೋಗದಲ್ಲಿ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ಅವರ 118ನೇ ಜನ್ಮದಿನಾಚರಣೆ ಹಾಗೂ ಮಹಾ ಮಾನವತಾವಾದಿ ಡಾ. ಬಿ.ಆರ್. ಅಂಬೇಡ್ಕರ ಅವರ 134ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಉಭಯ ನಾಯಕರ ಭಾವಚಿತ್ರಗಳಿಗೆ ಪುಷ್ಪಾರ್ಪಣೆ ಮಾಡಿ ಮಾತನಾಡಿದರು. ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸಿಗಬೇಕು ಎನ್ನುವುದು ಡಾ. ಬಿ.ಆರ್. ಅಂಬೇಡ್ಕರ ಅವರ ಆಶಯವಾಗಿತ್ತು. ಅದನ್ನು ಸಂವಿಧಾನದ ಮೂಲಕ ನೀಡಿದ್ದಾರೆ. ಅವರು ಹಾಕಿದ ಭದ್ರ ಬುನಾದಿ ಸಂವಿಧಾನದ ಅಡಿಯಲ್ಲಿ 75 ವರ್ಷವರೆಗೆ ಸಾಗಿ ಬರಲಾಗಿದೆ. ಪ್ರಜಾಪ್ರಭುತ್ವದಲ್ಲಿ ವ್ಯಕ್ತಿ ವ್ಯಕ್ತಿಗಳ ಮಧ್ಯೆ ಸಂಘರ್ಷ ಸಹಜ. ಸಾವಿರಾರು ಜಾತಿ ಹಾಗೂ ನೂರಾರು ಭಾಷೆಗಳಿದ್ದರೂ ವಿವಿಧತೆಯಲ್ಲಿ ಏಕತೆ ಕಾಣುವ ರಾಷ್ಟ್ರ ಭಾರತ ಎಂದರು.ಡಾ. ಬಾಬು ಜಗಜೀವನರಾಮ್ ಅವರು ಸಂಘರ್ಷದ ಜೀವನ ನೋಡಿದವರು. ಸ್ವಾತಂತ್ರ್ಯ ಪೂರ್ವದಲ್ಲಿ 38 ಕೋಟಿ ಜನರಿಗೆ ಆಹಾರ ಸಮಸ್ಯೆ ಎದುರಿಸುವ ಸಮಯದಲ್ಲಿ ಅವರು ಆಹಾರ ಉತ್ಪಾದನೆಯಲ್ಲಿ ಮಾಡಿದ ಕ್ರಾಂತಿಯಿಂದ ಅವರನ್ನು ಹಸಿರು ಕ್ರಾಂತಿಯ ಹರಿಕಾರ ಎಂದು ಕರೆಯಲಾಗುತ್ತಿದೆ ಎಂದರು.ಹೆಸ್ಕಾಂ ಅಧ್ಯಕ್ಷ ಅಜೀಮ್‌ಪೀರ ಖಾದ್ರಿ ಮಾತನಾಡಿ, ಭಾರತ ಸಂವಿಧಾನ ಜಗತ್ತಿಗೆ ಮಾದರಿಯಾಗಿದೆ. ಡಾ. ಬಿ.ಆರ್. ಅಂಬೇಡ್ಕರ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿದ್ದಾರೆ. ಸಂವಿಧಾನದಡಿ ಎಲ್ಲರೂ ಕೆಲಸ ಮಾಡಬೇಕು ಹಾಗೂ ಭವ್ಯ ಭಾರತ ನಿರ್ಮಾಣ ಮಾಡೋಣ ಎಂದರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ ಅವರು ಭಾರತ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ನಮ್ಮ ಹಕ್ಕು ಮತ್ತು ಕರ್ತವ್ಯಗಳ ಕುರಿತು ತಿಳಿಸಿಕೊಟ್ಟಿದ್ದಾರೆ. ನಮ್ಮ ಹಕ್ಕುಗಳನ್ನು ಪಡೆದುಕೊಳ್ಳುವುದರ ಜತೆಗೆ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು. ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ ಹಾಗೂ ಡಾ. ಬಾಬು ಜಗಜೀವನರಾಮ್ ಅವರು ಈ ದೇಶ ಕಂಡ ಎರಡು ದಿವ್ಯ ಚೇತನಗಳು. ಡಾ. ಬಿ.ಆರ್. ಅಂಬೇಡ್ಕರ ಅವರು 60 ದೇಶಗಳ ಸಂವಿಧಾನ ಅಧ್ಯಯನ ಮಾಡಿ ಎಲ್ಲರಿಗೂ ಸಮಾನ ಅವಕಾಶದಡಿ ರಚಿಸಿದ ಭಾರತ ದೇಶದ ಸಂವಿಧಾನ 75 ವರ್ಷಗಳಾದರು ಗಟ್ಟಿಯಾಗಿ ಮುಂದೆ ಸಾಗುತ್ತಿದೆ ಎಂದರು.ಉಪನ್ಯಾಸಕ ಡಾ. ಮಾಲತೇಶ ಪೂಜಾರ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಹಾಗೂ ಉಪನ್ಯಾಸಕ ಡಾ. ಹನುಮಂತಪ್ಪ ಸಂಜೀವಣ್ಣನವರ ಡಾ. ಬಾಬು ಜಗಜೀವನರಾಮ್ ಕುರಿತು ಉಪನ್ಯಾಸ ನೀಡಿದರು.ಆರೋಗ್ಯ ಸಮಸ್ಯೆ ಕಾರಣ ಶಾಸಕ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರ ಸಂದೇಶವನ್ನು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅವರು ವಾಚಿಸಿದರು. ಇದೇ ಸಂದರ್ಭದಲ್ಲಿ ಶ್ರೀಕಾಂತ ಮೇಗಳಮನಿ ಅವರು ಸಂವಿಧಾನ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಿದರು.

ಸನ್ಮಾನ: ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ, ದ್ವಿತೀಯ ಸ್ಥಾನ ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು, ಪೌರಕಾರ್ಮಿಕರು ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ ಜಕ್ಕಿನಕಟ್ಟಿ ವಸತಿ ಶಾಲೆ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ, ಹಾವೆಮುಲ್ ಅಧ್ಯಕ್ಷ ಮಂಜನಗೌಡ ಪಾಟೀಲ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಜಿಪಂ ಸಿಇಒ ರುಚಿ ಬಿಂದಲ್, ಎಸ್‌ಪಿ ಅಂಶುಕುಮಾರ, ಜಿಪಂ ಉಪಕಾರ್ಯದರ್ಶಿ ಡಾ. ರಂಗಸ್ವಾಮಿ, ಉಪವಿಭಾಗಾಧಿಕಾರಿ ಚೆನ್ನಪ್ಪ, ತಹಸೀಲ್ದಾರ್ ಶರಣಮ್ಮ, ಮುಖಂಡರಾದ ಸಂಜಯಗಾಂಧಿ ಸಂಜೀವಣ್ಣನವರ, ಹೊನ್ನಪ್ಪ ತಗಡಿಮನಿ, ಉಡಚಪ್ಪ ಮಾಳಗಿ, ಮಲ್ಲೇಶಪ್ಪ ಮದಲೇರ, ಮಾಲತೇಶ, ಶ್ರೀಕಾಂತ, ಶ್ರೀಧರ ದೊಡ್ಡಮನಿ, ಎಸ್.ಎಸ್. ಮತ್ತಿಕಟ್ಟಿ, ಅಶೋಕ ಮರಿಯಣ್ಣನವರ, ಮಾರುತಿ ಬಣಕಾರ, ಏಳುಕೋಟೆಪ್ಪ, ರಮೇಶ ಆನವಟ್ಟಿ, ಮುತ್ತೂದರ ಮಾದರ ಸೇರಿದಂತೆ ಇತರರು ಇದ್ದರು.

ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆಕಾರ್ಯಕ್ರಮಕ್ಕೂ ಮೊದಲು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ, ಜಿಲ್ಲಾಧಿಕಾರಿ ಡಾ. ವಿಜಯಹಾಂತೇಶ ದಾನಮ್ಮನವರ, ಜಿಪಂ ಸಿಇಒ ಬಿಂದಲ್, ಉಪವಿಭಾಗಾಧಿಕಾರಿ ಚೆನ್ನಪ್ಪ ಸೇರಿದಂತೆ ಇತರರು ಮಾಲಾರ್ಪಣೆ ಮಾಡಿದರು.

ನಂತರ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶೃಂಗರಿಸಿದ ಸಾರೋಟಿನಲ್ಲಿ ಡಾ.ಬಾಬು ಜಗಜೀವನರಾಮ್ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಚಾಲನೆ ನೀಡಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

Share this article