ಕನ್ನಡಪ್ರಭ ವಾರ್ತೆ, ತುಮಕೂರು ಕಳೆದ ಎರಡು ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಬೇಸಿಗೆ ರಜೆಯ ಖುಷಿಯಲ್ಲಿದ್ದ ಮಕ್ಕಳು ಹೆಗಲ ಮೇಲೆ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕಿದರು. ಬೇಸಿಗೆ ರಜೆ ಬಳಿಕ ಇಂದಿನಿಂದ ಆರಂಭವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ವಿವಿಧ ಹೂವುಗಳು, ಬಾಳೆಕಂದು ಹಾಗೂ ಮಾವಿನ ತೋರಣದಿಂದ ಸಿಂಗಾರಗೊಳಿಸಿ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ಆಚರಿಸುವ ಮುಖೇನ ವಿದ್ಯಾರ್ಥಿಗಳನ್ನು ಗುಲಾಬಿ ಹೂ, ಸಿಹಿ ತಿಂಡಿ ನೀಡಿ ಶಾಲೆಗಳಿಗೆ ಸ್ವಾಗತಿಸಲಾಯಿತು. 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಇಂದಿನಿಂದ ಪ್ರಾರಂಭವಾಗಿದ್ದು, ಮಕ್ಕಳು ಶಾಲೆಗೆ ಬರುವ ಮೊದಲ ದಿನವಾದ ಇಂದು ಶಾಲೆಗಳಲ್ಲಿ ಸಿಹಿಯೂಟ ಸಿದ್ಧಪಡಿಸಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಬಡಿಸಲಾಯಿತು. ಕಳೆದ ಎರಡು ತಿಂಗಳಿನಿಂದ ರಜೆಯ ಖುಷಿಯಲ್ಲಿದ್ದ ವಿದ್ಯಾರ್ಥಿಗಳು ಇಂದು ಶಾಲಾ ಸಮವಸ್ತ್ರದೊಂದಿಗೆ ಹೆಗಲಿಗೆ ಶಾಲಾ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ನಗರ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿದಂತೆ ಜಿಲ್ಲೆಯಾದ್ಯಂತ ಕಂಡು ಬಂತು. ನಗರದ ಹೈಸ್ಕೂಲ್ ಬಡಾವಣೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಅಗ್ರಹಾರ, ಮರಳೂರು ದಿಣ್ಣೆ, ಎಂ.ಜಿ. ರಸ್ತೆ. ಆರ್ಯಬಾಲಿಕಾ ಶಾಲೆ, ಮೆಳೇಕೋಟೆ, ಗಂಗಸಂದ್ರ, ಗೂಳೂರು, ಸೇರಿದಂತೆ ಜಿಲ್ಲೆಯ 10 ತಾಲೂಕುಗಳಲ್ಲೂ ಸರ್ಕಾರಿ ಶಾಲೆಗಳಲ್ಲಿ ಹಬ್ಬದ ವಾತಾವರಣದೊಂದಿಗೆ ಶಾಲೆಗಳನ್ನು ಪ್ರಾರಂಭಿಸಲಾಯಿತು.