ಕನ್ನಡಪ್ರಭ ವಾರ್ತೆ ಮಡಿಕೇರಿ
ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಮಂಗಳವಾರ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಾಸಕ ಡಾ. ಮಂತರ್ ಗೌಡ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಅದ್ಧೂರಿಯಾಗಿ ದಸರೆ ಆಗಬೇಕು ಎನ್ನುವುದು ಎಲ್ಲರ ಆಸೆ. ಎಲ್ಲಿ ಖರ್ಚು ಕಡಿಮೆಯಾಗಬಹುದು ಅಷ್ಟು ಕಡಿಮೆ ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಿ ಎಂದು ಸಲಹೆ ನೀಡಿದರು.
ವೇದಿಕೆ ಕಾರ್ಯಕ್ರಮ ಕಡಿಮೆ ಮಾಡಿ. ಜನರು ಬರುವುದು ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು. ದಶ ಮಂಟಪಗಳ ಶೋಭಾಯಾತ್ರೆಯಲ್ಲಿ ಅಪಘಾತವಾಗದಂತೆ ನಿಗಾ ವಹಿಸುವಂತೆ ಸೂಚಿಸಿದರು.ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮೊದಲು ಮಡಿಕೇರಿ ದಸರೆಗೆ ₹ 10 ಲಕ್ಷ ಕೊಟ್ಟರು. ಮುಂದಿನ ದಿನಗಳಲ್ಲಿ ಸರ್ಕಾರ ಇನ್ನಷ್ಟು ಹಣ ನೀಡಬೇಕು ಎಂದು ಒತ್ತಾಯಿಸಿದರು.
ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಮಾತನಾಡಿ, ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅನುದಾನ ತೀರಾ ಕಡಿಮೆ ಸಿಕ್ಕಿದೆ. ಅನುದಾನದ ಮಿತಿಯೊಳಗೆ ಕಾರ್ಯಕ್ರಮ ಮಾಡುವಂತಹ ಇಕ್ಕಟ್ಟಿನ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೊಡ್ಡ ದೊಡ್ಡ ಕಲಾವಿದರನ್ನು ಕೈಬಿಡುವ ಸ್ಥಿತಿ ಎದುರಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ.ಅರುಣ್‌ಕುಮಾರ್ ಮಾತನಾಡಿ, ರು.1.5 ಕೋಟಿ ಅನುದಾನ ಕೊಟ್ಟರೂ ಸಾಲದಾಗಿದೆ. ಮೈಸೂರು ದಸರೆಗೆ ಹೆಚ್ಚು ಹಣ ಕೊಡಲಾಗುತ್ತಿದೆ. ನಮಗೆ ಕೊಡುವ ಹಣ ಯಾವುದಕ್ಕೂ ಸಾಲದು. ಕನಿಷ್ಠ ₹ 2 ಕೋಟಿ ಅನುದಾನ ಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಮಡಿಕೇರಿ ದಸರೆಗೆ ಅಕ್ಕಪಕ್ಕದ ಜಿಲ್ಲೆಗಳಿಂದ ಜನರು ಬರುತ್ತಾರೆ. ಪ್ರತಿ ವರ್ಷ ಇನ್ನೂ ಆಕರ್ಷಣೀಯವಾಗುತ್ತಿದೆ ಎಂದರು.ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಉಪವಿಭಾಗಾಧಿಕಾರಿ ನಿತಿನ್, ಮಡಿಕೇರಿ ನಗರ ದಸರಾ ಸಮಿತಿಯ ಗೌರವ ಸಲಹೆಗಾರ ಚಿದ್ವಿಲಾಸ್, ಉಪಾಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ದಶಮಂಟಪ ಸಮಿತಿ ಅಧ್ಯಕ್ಷ ಬಿ.ಎಂ. ಹರೀಶ್, ನಗರಸಭೆ ಸದಸ್ಯೆ ಸಬಿತಾ, ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಭಾಗವಹಿಸಿದ್ದರು.