ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಕನಕಪುರ ರಸ್ತೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆದ ಎಸ್ಸಿ, ಎಸ್ಟಿ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್‌ನ ವಿರೋಧ ಮಾಡುವುದಕ್ಕೆ ಕಾಂಗ್ರೆಸ್‌ಗೆ ಬೇರೆ ಯಾವುದೇ ವಿಚಾರವಿಲ್ಲದೇ ಯಾರು ಸಂವಿಧಾನ ಬದಲಾವಣೆ ಬಗ್ಗೆ ಹೇಳಿರುವ ಮಾತನ್ನೇ ಜನರಲ್ಲಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ದಲಿತ ಸಮುದಾಯ ಅಭಿವೃದ್ಧಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಅನೇಕ ಕೊಡುಗೆ ಅರಿತು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ನೀಡಬೇಕು ಎಂದು ಕರೆ ನೀಡಿದರು.ಕಳೆದ ಹತ್ತು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಒಂದೇ ಒಂದು ವಿಶೇಷ ಯೋಜನೆ ನೀಡಿಲ್ಲ. ಅಲ್ಲದೇ, ದಲಿತರ ಅಭಿವೃದ್ಧಿಗೆ ಇಟ್ಟಿರುವ 11 ಸಾವಿರ ಕೋಟಿ ರು. ಅನುದಾನವನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿಕೊಂಡು ದಲಿತರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.
ಬಾಬಾ ಸಾಹೇಬರ ಪಂಚ ತೀರ್ಥಗಳನ್ನು ಅಭಿವೃದ್ಧಿ ಮಾಡಲು ಪ್ರಧಾನಿ ಮೋದಿ ಅವರೇ ಬರಬೇಕಿತ್ತು. ಆದರೆ, 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ 94 ಬಾರಿ ಸಂವಿಧಾನದ ತಿದ್ದುಪಡಿ ಮಾಡಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಒಮ್ಮೆಯು ಇಂಥ ಕೆಲಸ ಮಾಡಿಲ್ಲ ಎನ್ನುವುದನ್ನು ದಲಿತರು ಅರ್ಥ ಮಾಡಿಕೊಳ್ಳಬೇಕು ಎಂದರು.
ಮಲ್ಲಿಕಾರ್ಜುನ್ ಖರ್ಗೆ ಹಾಗೂ ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದಾಗ ಧ್ವನಿ ಎತ್ತದ ವ್ಯಕ್ತಿ ನಿಜವಾದ ದಲಿತ ವಿರೋಧಿ ಎಂದು ಶಾಸಕರ ಹೆಸರೇಳದೇ ವಾಗ್ದಾಳಿ ನಡೆಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್.ವೀರಯ್ಯ ಮಾತನಾಡಿ, ದಲಿತರ ಅಭಿವೃದ್ಧಿಗೆ ಪ್ರಧಾನಿ ಮೋದಿ ಅವರು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಕೇಂದ್ರದಲ್ಲಿ ಸಚಿವ ಸ್ಥಾನ ಅಲಂಕರಿಸಲಿದ್ದಾರೆ. ಜಿಲ್ಲೆಯ ಎಲ್ಲ ಸಮುದಾಯಗಳ ಜನರು ಮೈತ್ರಿಯ ಪರವಾಗಿದ್ದು, ಸರಳ ವ್ಯಕ್ತಿತ್ವದ ಉತ್ತಮ ಆಡಳಿತಗಾರ ಕುಮಾರಸ್ವಾಮಿ ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ. ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಕನಸಿರುವಾಗ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ ಎಂದು ಹೇಳಿದರು.