ನ. 4ರಂದು ನರಗುಂದದಲ್ಲಿ ರೈತರ ಬೃಹತ್ ಜಾಗೃತಿ ಸಮಾವೇಶ

KannadaprabhaNewsNetwork |  
Published : Sep 28, 2024, 01:16 AM IST
4646 | Kannada Prabha

ಸಾರಾಂಶ

ಮಹದಾಯಿ ಯೋಜನೆಗೆ ವನ್ಯಜೀವಿ ಹಾಗೂ ಪರಿಸರ ಇಲಾಖೆಗಳ ಪರವಾನಗಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ, ಡಾ. ಸ್ವಾಮಿನಾಥನ ಆಯೋಗ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಯಾಗಬೇಕು.

ಕಲಘಟಗಿ:

ರಾಜ್ಯ ರೈತ ಸಂಘಟನೆ ಒಕ್ಕೂಟ, ರೈತ ಸೇನಾ ಹಾಗೂ ನರಗುಂದ ಮಹದಾಯಿ ಹೋರಾಟ ವೇದಿಕೆ ನೇತೃತ್ವದಲ್ಲಿ ನ. 4ರಂದು ನರಗುಂದದಲ್ಲಿ ರೈತರ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಕಾರ್ಯದರ್ಶಿ ಪರಶುರಾಮ್ ಎತ್ತಿನಗುಡ್ಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬರ ಶಾಂತಕುಮಾರ, ವೀರೇಶ ಸೊಬರದಮಠ ಹಾಗೂ ಹಲವು ರೈತ ಹೋರಾಟಗಾರರು, ರೈತರು ಭಾಗವಹಿಸಲಿದ್ದಾರೆ ಎಂದರು.

ಮಹದಾಯಿ ಯೋಜನೆಗೆ ವನ್ಯಜೀವಿ ಹಾಗೂ ಪರಿಸರ ಇಲಾಖೆಗಳ ಪರವಾನಗಿಯನ್ನು ಕೇಂದ್ರ ಸರ್ಕಾರ ನೀಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿ, ಡಾ. ಸ್ವಾಮಿನಾಥನ ಆಯೋಗ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿಯಾಗಬೇಕು ಎಂದರು.

ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ, 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ, ಕೃಷಿ ಪಂಪಸೆಟ್‌ಗಳಿಗೆ ಆಧಾರ್ ಲಿಂಕ್ ಮಾಡುವುದಕ್ಕೆ ತಡೆ, ಹಿಂದಿನ ವರ್ಷದ ಕಬ್ಬಿನ ಬಾಕಿ ಬಿಲ್ ₹ 150 ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಮನುಷ್ಯನ ಮಾನಸಿಕ ಹಾಗೂ ದೈಹಿಕ ಬೆಳವಣಿಗೆ ಮೇಲೆ ದುಷ್ಪರಿಣಾಮ ಬೀರುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿ ಹೈದರಾಬಾದ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ರಾಜ್ಯಗಳ ರೈತ ಮುಖಂಡರ ಸಭೆಯಲ್ಲಿ ನಿಷೇಧಿಸಲು ಒತ್ತಾಯಿಸಲಾಗುವುದು ಎಂದರು.

ತಾಲೂಕಿನಲ್ಲಿ ಹಲವು ಸರ್ಕಾರಿ ಸ್ವಾಮ್ಯದ ಬ್ಯಾಂಕ್, ಖಾಸಗಿ ಫೈನಾನ್ಸ್ ರೈತರಿಂದ ಹಾಗೂ ಕೂಲಿ ಕಾರ್ಮಿಕರಿಂದ ಹೆಚ್ಚಿನ ಬಡ್ಡಿ ದರ ವಸೂಲಿ ಮಾಡುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ರೈತ ಮುಖಂಡ ಉಳವಪ್ಪ ಬಳಿಗೇರ ಮಾತನಾಡಿ, ತಾಲೂಕಿನಲ್ಲಿ ಈ ವರ್ಷ ನಿರಂತರ ಮಳೆಗೆ ಬೆಳೆಗಳ ಇಳುವರಿ ಕುಂಠಿತಗೊಂಡಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಬೆಳೆ ಪರಿಶೀಲನೆ ಮಾಡದೆ ಸರ್ಕಾರಕ್ಕೆ ಬೆಳೆಹಾನಿ ವರದಿ ಸಲ್ಲಿಸಿದ್ದಾರೆ. ಇದರಿಂದ ಅರ್ಹ ರೈತರಿಗೆ ಅನ್ಯಾಯವಾಗುತ್ತಿದೆ. ಬೆಳೆಗಳು ಹಸಿರಿದ್ದರೂ ಕಾಳು ಕಟ್ಟಿಲ್ಲ ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಗದಿಗೆಪ್ಪಗೌಡ ಪಾಟೀಲ, ಸಿದ್ದಪ್ಪ ಬೆಟಗೇರಿ, ಫಕ್ಕೀರಪ್ಪ ತಡಸ, ನಾರಾಯಣ ನೆಸ್ರೆಕರ, ಬಸವಣ್ಣೆಪ್ಪ ಬಸನಕೊಪ್ಪ, ಚನ್ನಪ್ಪ ಸವಣೂರ ಇದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ