ಕನ್ನಡಪ್ರಭ ವಾರ್ತೆ ಹಾಸನ
ನಗರದ ಹಾಸನಾಂಬ ಕಲಾಕ್ಷೇತ್ರ ಆವರಣದಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಶ‍್ರೀ ಆದಿಚುಂಚನಗಿರಿ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು. ಕಾಗಿನೆಲೆ ಕನಕಗುರು ಪೀಠದ ಶ್ರೀ ಶಿವಾನಂದಪುರಿ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಬೆಂಗಳೂರಿನ ಶ್ರೀ ಸೌಮ್ಯನಾಥ ಸ್ವಾಮೀಜಿ, ಕಬ್ಬಳಿಯ ಶಿವಪುತ್ರನಾಥ ಸ್ವಾಮೀಜಿ, ಶ್ರೀ ಕೈಲಾಸಪತಿನಾಥ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದರು.
ಹಾಸನಾಂಬ ಕಲಾ ಕ್ಷೇತ್ರದಿಂದ ಆರಂಭವಾದ ಮೆರವಣಿಗೆ ಹೇಮಾವತಿ ಪ್ರತಿಮೆ, ಬಿಎಂ ರಸ್ತೆ, ಶಂಕರ ಮಠ ರಸ್ತೆ ಮಾರ್ಗವಾಗಿ ಆದಿಚುಂಚನಗಿರಿ ಮಠ ತಲುಪಿತು. ಮೆರವಣಿಗೆಯುದ್ದಕ್ಕೂ ವಿವಿಧ ಕಲಾತಂಡಗಳು ಗಮನ ಸೆಳೆದವು. ನೂರಾರು ಮಹಿಳೆಯರು ಪೂರ್ಣಕುಂಭ ಮೆರವಣಿಗೆ ನಡೆಸಿದರು. ವೀರಗಾಸೆ, ಡೊಳ್ಳು ಕುಣಿತ, ನಾಸಿಕ್ ಡೋಲು, ಚಂಡೆ ವಾದ್ಯ, ನಂದಿ ಧ್ವಜ, ಕರಡೆ ವಾದ್ಯ ವೃಂದದವರು ಹೆಜ್ಜೆ ಹಾಕಿದರು. ಆದಿಚುಂಚನಗಿರಿ ಮಹಾಸಂಸ್ಥೆಯ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಮೆರವಣಿಗೆಯ ದಾರಿಯುದ್ದಕ್ಕೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಶ್ರೀಗಳ ಪುತ್ಥಳಿಗೆ ಹಾಗೂ ಮೆರವಣಿಗೆಯಲ್ಲಿದ್ದ ಮಠಾಧೀಶರಿಗೆ ಪುಷ್ಪವೃಷ್ಟಿ ಸುರಿಸಿದರು.ಮೆರವಣಿಗೆಯಲ್ಲಿ ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ಮಾಜಿ ಅಧ್ಯಕ್ಷ ಎಚ್.ಎಸ್.ಅನಿಲ್‌ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ಒಕ್ಕಲಿಗರ ಸಂಘದ ನಿರ್ದೇಶಕ ರಘುಗೌಡ, ಕನ್ನಡ ಸಾಹಿತ್ಯ ಗೌರವ ಕಾರ್ಯದರ್ಶಿ ಬಿ.ಆರ್.ಬೊಮೇಗೌಡ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ವಾದ್ಯ ನುಡಿಸಿ, ನೃತ್ಯಕ್ಕೆ ಹೆಜ್ಜೆ ಹಾಕಿ ಭಕ್ತಿ ಮೆರೆದರು.
: