ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಬೆಂಗಳೂರು ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದಿಂದ ಕೆಂಪೇಗೌಡರ 516 ನೇ ಜನ್ಮದಿನೋತ್ಸವ ಅಂಗವಾಗಿ ನೀಡುವ ರಾಜ್ಯಮಟ್ಟದ ಕರುನಾಡ ಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ, ತಾಕೇರಿ ಗ್ರಾಮದ ಎ.ಆರ್.ಮುತ್ತಣ್ಣ ಅವರಿಗೆ ಪ್ರದಾನ ಮಾಡಲಾಯಿತು.ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಉಪಸ್ಥಿತರಿದ್ದ ಗಣ್ಯರು, ಎ.ಆರ್. ಮುತ್ತಣ್ಣ ಅವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಸೋಮವಾರಪೇಟೆ ತಾಲೂಕು ಒಕ್ಕಲಿಗರ ಸಂಘದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು, ಸಂಘದ ವತಿಯಿಂದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಎಲ್‌ಕೆಜಿಯಿಂದ ಪಿಯುಸಿ ತನಕ 800 ವಿದ್ಯಾರ್ಥಿಗಳಿಗೆ ವ್ಯಾಸಂಗ ಮಾಡಲು ಅವಕಾಶ ಕಲ್ಪಿಸಿರುವುದು, ಕಿರಗಂದೂರು ಮಂಡಲ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿರುವುದು, ಮೂಲಭೂತ ಸೌಕರ್ಯ ಒದಗಿಸಿರುವುದು, ಸಾಮಾಜಿಕವಾಗಿ ಸಮುದಾಯ ಭವನ, ದೇವಾಲಯ, ಆರೋಗ್ಯ ಕ್ಷೇತ್ರ, ಶಾಲೆಗಳಿಗೆ ಸೌಲಭ್ಯ ಕಲ್ಪಿಸಿರುವುದೂ ಸೇರಿದಂತೆ ಇನ್ನಿತರ ಹಲವಾರು ಸೇವಾಕಾರ್ಯ, ಸಂಘ ಸಂಸ್ಥೆಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ, ಸಂಸದ ಡಾ. ಮಂಜುನಾಥ್, ಮಾಜಿ ಗೃಹ ಸಚಿವ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಎಂ.ಎಲ್.ಸಿ. ಸಿ.ಟಿ. ರವಿ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದು, ಮುತ್ತಣ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಜಿಲ್ಲೆಯಿಂದ ಒಕ್ಕಲಿಗರ ಸಂಘದ ಪ್ರಮುಖರಾದ ಎಸ್.ಬಿ. ಭರತ್ ಕುಮಾರ್, ಕೆ.ಟಿ. ಪರಮೇಶ್, ಕುಶಾಲಪ್ಪ, ತಲ್ತರೆ ಹರೀಶ್, ಪ್ರಕಾಶ್ ಕುಮಾರ್, ತಾಕೇರಿ ರಘು, ಗಣಪತಿ, ಚಕ್ರವರ್ತಿ ಸುರೇಶ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.