ಪರಶಿವಮೂರ್ತಿ ಮಾಟಲದಿನ್ನಿ
ಪಟ್ಟಣದ ವ್ಯಾಪಾರ ವಹಿವಾಟು, ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಬಸ್ ನಿಲ್ದಾಣವನ್ನು ಸಂಪರ್ಕಿಸುವ ಅತ್ಯಂತ ಪ್ರಮುಖ ರಸ್ತೆ. ಪ್ರತಿದಿನ ಬೆಳಗ್ಗೆಯಿಂದ ರಾತ್ರಿ ತನಕ ಬಸ್‌ಗಳು, ಲಾರಿಗಳು, ಕಾರುಗಳು, ಆಟೋಗಳು, ದ್ವಿಚಕ್ರ ವಾಹನಗಳು ಸೇರಿದಂತೆ ಸಾವಿರಾರು ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದು, ರಸ್ತೆ ಹದಗೆಟ್ಟಿರುವುದರಿಂದ ಪ್ರಯಾಣಿಕರು ಮತ್ತು ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ರಸ್ತೆಯ ಹಲವೆಡೆ ಡಾಂಬರು ಸಂಪೂರ್ಣ ಕಿತ್ತು ಹೋಗಿದ್ದು, ಗುಂಡಿಗಳು ನಿರ್ಮಾಣವಾಗಿವೆ. ಕೆಲವು ಗುಂಡಿಗಳು ಎಷ್ಟು ಆಳವಾಗಿವೆಯೆಂದರೆ ಬೈಕ್‌ಗಳು ನಿಯಂತ್ರಣ ತಪ್ಪಿ ಬೀಳುವ ಅಪಾಯ ಎದುರಾಗಿದೆ. ಕಾರು, ಆಟೋ ಹಾಗೂ ಬಸ್‌ಗಳಿಗೂ ನಿಧಾನವಾಗಿ ಸಾಗುವುದನ್ನು ಬಿಟ್ಟು ಬೇರೆ ಮಾರ್ಗವೇ ಇಲ್ಲದಂತಾಗಿದೆ.ಮಳೆಗಾಲ ಆರಂಭವಾಗಿದ್ದು, ಮಳೆ ಬಂದಾಗ ರಸ್ತೆಯ ಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಗುಂಡಿಗಳಲ್ಲಿ ನೀರು ನಿಂತು ಅವುಗಳ ಆಳವೇ ಗೋಚರಿಸುವುದಿಲ್ಲ. ಇದರಿಂದ ವಾಹನ ಸವಾರರು ಏಕಾಏಕಿ ಗುಂಡಿಗೆ ಬಿದ್ದು ಅಪಘಾತಕ್ಕೀಡಾಗುವ ಅಪಾಯ ಹೆಚ್ಚಾಗಿದೆ.
ದ್ವಿಚಕ್ರ ವಾಹನ ಸವಾರರ ಸ್ಥಿತಿ ಅತ್ಯಂತ ದುಸ್ತರವಾಗಿದೆ. ಗುಂಡಿಗಳನ್ನು ತಪ್ಪಿಸಿಕೊಂಡು ಸಾಗುವ ಪ್ರಯತ್ನದಲ್ಲಿ ಅಪಘಾತದ ಭೀತಿ ಕಾಡುತ್ತಿದೆ. ಮಳೆ ನೀರು ತುಂಬಿರುವ ಗುಂಡಿಗಳು ಕಾಣಿಸದ ಕಾರಣ ಅನೇಕರು ಸಮತೋಲನ ಕಳೆದುಕೊಳ್ಳುತ್ತಿದ್ದಾರೆ. ಪ್ರತಿದಿನ ಜೀವಭಯದಲ್ಲೇ ಸಂಚರಿಸುವಂತಾಗಿದೆ ಎನ್ನುತ್ತಾರೆ ವಾಹನ ಸವಾರರು.
ಮಳೆಗಾಲದಲ್ಲೇ ಮತ್ತಷ್ಟು ಅಪಘಾತಗಳು ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆ ತುರ್ತು ಕ್ರಮ ಕೈಗೊಂಡು ಗುಣಮಟ್ಟದ ರಸ್ತೆ ನಿರ್ಮಿಸಬೇಕು. ತಾಲೂಕು ಕೇಂದ್ರದ ಪ್ರಮುಖ ರಸ್ತೆಯ ದುಸ್ಥಿತಿಗೆ ಶಾಶ್ವತ ಪರಿಹಾರ ಒದಗಿಸುವುದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.