ಕನ್ನಡಪ್ರಭ ವಾರ್ತೆ ಬೆಂಗಳೂರು
ಬುಧವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಒಕ್ಕೂಟದ ಅಧ್ಯಕ್ಷ ಎಂ.ರಾಮಚಂದ್ರಪ್ಪ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಸಾರ್ವಜನಿಕರ ಸೇವೆ ಮಾಡುತ್ತಾ ಬಂದಿದ್ದಾರೆ. ಅಂತಹ ಪ್ರಬಲ ನಾಯಕರನ್ನು ರಾಜಕೀಯದಿಂದ ದೂರ ಮಾಡಲು ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ವಿರೋಧ ಪಕ್ಷದವರು ಜಂಟಿಯಾಗಿ ಷಡ್ಯಂತ್ರ ನಡೆಸಿದ್ದಾರೆ ಎಂದು ಆರೋಪಿಸಿದರು.
ಸಾಮಾಜಿಕ ಹೋರಾಟಗಾರ ಮಾವಳ್ಳಿ ಶಂಕರ್ ಮಾತನಾಡಿ, ಕೇಂದ್ರ ಸರ್ಕಾರ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ. ಮುಡಾ ಪ್ರಕರಣದಲ್ಲಿ ಏನು ಪಾತ್ರವಿಲ್ಲದ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ, ಜೆಡಿಎಸ್ ಪಕ್ಷಗಳು ಆರೋಪ ಮಾಡಿ, ಕಾಂಗ್ರೆಸ್ ಸರ್ಕಾರ ಉರುಳಿಸುವ ತಂತ್ರ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಪರ ರಾಜ್ಯದ ಜನತೆ ನಿಂತಿದ್ದಾರೆ, ಅವರನ್ನು ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.ಮಾಜಿ ಮಹಾಪೌರ ವೆಂಕಟೇಶಮೂರ್ತಿ, ಕುರುಬರ ಸಂಘದ ನಿರ್ದೇಶಕ ರಾಮಕೃಷ್ಣ, ಮಡಿವಾಳ ಸಂಘಟದ ಅಧ್ಯಕ್ಷ ನಂಜಪ್ಪ, ಆಡಳಿತ ಪಕ್ಷದ ಮಾಜಿ ನಾಯಕ ಎಂ. ಶಿವರಾಜು, ದಲಿತ ಪರ ಹೋರಾಟಗಾರರು, ಶೋಷಿತ ಸಮುದಾಯದ ಮುಖಂಡರು ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.