ವಸತಿ ನಿಲಯದ ಹೆಚ್ಚುವರಿ ಕೊಠಡಿಗಳಿಗೆ ಶಾಸಕ ಚಾಲನೆ
ವಿದ್ಯಾರ್ಥಿನಿಯರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಸುರಕ್ಷಿತ ವಾಸ್ತವ್ಯ ಕಲ್ಪಿಸುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಸೋಮವಾರ ಶಿರಸಿ ನಗರಸಭೆ ವ್ಯಾಪ್ತಿಯಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ₹1.65 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ 6 ಹೆಚ್ಚುವರಿ ಕೊಠಡಿ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಭಾಗದಿಂದ ಬಂದು ನಗರ ಪ್ರದೇಶಗಳಲ್ಲಿ ಶಿಕ್ಷಣ ಪಡೆಯುವ ಹೆಣ್ಣುಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ವಸತಿ ನಿಲಯಗಳಲ್ಲಿನ ದಟ್ಟಣೆ ಕಡಿಮೆ ಮಾಡಲು ಮತ್ತು ವಿದ್ಯಾರ್ಥಿನಿಯರಿಗೆ ಓದಲು ಸೂಕ್ತ ಪರಿಸರ ನಿರ್ಮಿಸಲು ಈ 6 ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಲಾಗಿದೆ. ಮುಂಬರುವ ದಿನಗಳಲ್ಲೂ ಕ್ಷೇತ್ರ ವ್ಯಾಪ್ತಿಯ ಎಲ್ಲಾ ಶೈಕ್ಷಣಿಕ ಸಂಸ್ಥೆ ಹಾಗೂ ಹಾಸ್ಟೆಲ್‌ಗಳ ಮೂಲಸೌಕರ್ಯ ವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಪ್ರತಿದಿನ ನೀಡಲಾಗುವ ಊಟ, ಉಪಾಹಾರದ ಗುಣಮಟ್ಟ ಹೇಗಿದೆ? ಸರಕಾರದ ಮಾರ್ಗಸೂಚಿ ಮೆನುವಿನ ಪ್ರಕಾರ ಊಟ ಸಿಗುತ್ತಿದೆಯೇ ಎಂದು ವಿಚಾರಿಸಿದರು.
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ನಿಮಗೆ ಉತ್ತಮ ಸೌಲಭ್ಯ ನೀಡುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ನೀವೆಲ್ಲರೂ ಚೆನ್ನಾಗಿ ಓದಿ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಸವರಾಜ್ ಬಂಡೆರ, ನಿರ್ಮಿತಿ ಕೇಂದ್ರದ ಅಭಿಯಂತರ ಕುಮಾರ್ ಶೆಟ್ಟಿ, ಹಾಸ್ಟೆಲ್ ಮೇಲ್ವಿಚಾರಕಿ ಮಾನಸ, ಕಿರಣ್ ಪಿ. ನಾಯಕ್, ಸಿಬ್ಬಂದಿ ಹಾಗೂ ವಸತಿ ನಿಲಯದ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.