ಕನ್ನಡಪ್ರಭ ವಾರ್ತೆ ಸರಗೂರು
ಸಭೆಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುತ್, ಶಿಕ್ಷಣ, ಆರೋಗ್ಯ, ಕಂದಾಯ ಹಾಗೂ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಸಮ್ಮುಖದಲ್ಲೇ ಪರಿಶೀಲಿಸಿದ ಶಾಸಕರು, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಹಾಗೂ ಉಳಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಭಾಗದ ಜನರು ತಮ್ಮ ಕೆಲಸಗಳಿಗಾಗಿ ತಾಲೂಕು ಕಚೇರಿ ಹಾಗೂ ವಿವಿಧ ಇಲಾಖೆಗಳ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿಯನ್ನು ತಪ್ಪಿಸಲು ಜನಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಜನರು ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರು ಹಾಗೂ ಅಧಿಕಾರಿಗಳ ಮುಂದೆ ಮಂಡಿಸಲು ಇಂತಹ ಸಭೆಗಳು ಸಹಕಾರಿಯಾಗಿವೆ.ಶಾಸಕ ಅನಿಲ್ ಚಿಕ್ಕಮಾದು ಅವರು ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಕ್ತವಾಗಿ ತಿಳಿಸುತ್ತಿದ್ದು, ಜನರ ಸಮಸ್ಯೆಗಳನ್ನು ಆಲಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುತ್ತಿರುವ ಕಾರ್ಯವೈಖರಿಗೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿರುವುದು ಗ್ರಾಮೀಣ ಜನರಲ್ಲಿ ನಿರೀಕ್ಷೆ ಮೂಡಿಸಿದೆ.
ಬಡಗಲಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರ ಕೊರತೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ಕೂಡಲೇ ಹಿಂದಿ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು ಶಾಸಕರಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ಅಧಿಕಾರಿಗಳು ತಾಳ್ಮೆಯಿಂದ ಆಲಿಸಬೇಕು. ಗ್ರಾಮೀಣ ಜನರಿಗೆ ಇಲಾಖೆಯ ಸೌಲಭ್ಯಗಳು ಮತ್ತು ಸರ್ಕಾರದ ಯೋಜನೆಗಳ ಕುರಿತು ಸಮರ್ಪಕ ಮಾಹಿತಿ ನೀಡಬೇಕು. ಅರ್ಜಿಗಳನ್ನು ಪರಿಶೀಲಿಸಿ, ಅರ್ಹರಿಗೆ ವಿಳಂಬವಿಲ್ಲದೆ ಸೌಲಭ್ಯ ಕಲ್ಪಿಸಬೇಕು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು.