ಕನ್ನಡಪ್ರಭ ವಾರ್ತೆ ಮಂಗಳೂರುಬಿ.ಸಿ. ರೋಡ್ - ಸುರತ್ಕಲ್ ನಡುವಿನ ಬಂದರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿರುವುದು ಹಾಗೂ ಅದರ ಶಾಶ್ವತ ನಿರ್ವಹಣೆಗೆ ಎದುರಾಗಿರುವ ಅಡಚಣೆ, ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಹೆದ್ದಾರಿ ಸಚಿವಾಲಯದಿಂದ ಟೆಂಡರ್ ನಡೆಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.
ರಿಂಗ್ ರಸ್ತೆ ನಿರ್ಮಾಣ:ಮಂಗಳೂರು ನಗರ ಭಾಗದ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ರಾಷ್ಟ್ರೀಯ ಹೆದ್ದಾರಿ-66 ಮತ್ತು ರಾಷ್ಟ್ರೀಯ ಹೆದ್ದಾರಿ-75 ಅನ್ನು ಸಂಪರ್ಕಿಸುವ ರಿಂಗ್ ರೋಡ್ ನಿರ್ಮಿಸುವಂತೆ ಈ ಸಂದರ್ಭ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಚಿವ ಗಡ್ಕರಿಗೆ ಮನವಿ ಮಾಡಿದರು.
ಶಿರಾಡಿ ಘಾಟ್‌ನಲ್ಲಿ ಜಂಟಿ ಸಮೀಕ್ಷೆ: ಶಿರಾಡಿ ಘಾಟ್ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ ಡಿಪಿಆರ್‌ನ್ನು ಮೇಲ್ವಿಚಾರಣೆ ಮಾಡಲು ತಜ್ಞರ ಸಮಿತಿಯನ್ನು ನೇಮಿಸುವಂತೆ ರೈಲ್ವೆ ಸಚಿವಾಲಯದೊಂದಿಗೆ ಮಾತುಕತೆ ನಡೆಸುವಂತೆಯೂ ಸಂಸದರು ಮನವಿ ಮಾಡಿದರು.ಶಿರಾಡಿ ಘಾಟ್ ಪ್ರದೇಶ ಪರಿಸರ ಸೂಕ್ಷ್ಮತೆ ಮತ್ತು ತಾಂತ್ರಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಸಚಿವಾಲಯದೊಂದಿಗೆ ತಜ್ಞರ ನೇತೃತ್ವದ ಜಂಟಿ ಕಾರ್ಯವಿಧಾನವು ಸೂಕ್ತ ಜೋಡಣೆ, ಸುಸ್ಥಿರತೆ ಮತ್ತು ದೀರ್ಘಕಾಲೀನ ಪರಿಹಾರ-ಮಾರ್ಗೋಪಾಯಗಳನ್ನು ಒದಗಿಸುತ್ತದೆ ಎಂದು ಸಂಸದರು ಸಚಿವರಿಗೆ ಮನದಟ್ಟು ಮಾಡಿದ್ದಾರೆ.