ಹಾವೇರಿ:ಜವಳಿ ಉದ್ಯಮಕ್ಕೆ ಜಾಗತಿಕ ಮಟ್ಟದಲ್ಲಿ ಉತ್ತಮ ಅವಕಾಶಗಳಿದ್ದು, ಜಿಲ್ಲೆಯಲ್ಲಿ ಜವಳಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ 100 ಎಕರೆ ಪ್ರದೇಶದಲ್ಲಿ ಟೆಕ್ಸಟೈಲ್ ಪಾರ್ಕ್ ಸ್ಥಾಪಿಸುವ ಉದ್ದೇಶ ಹೊಂದಲಾಗಿದೆ ಎಂದು ಜವಳಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಕೈ ಮಗ್ಗ ಮತ್ತು ಜವಳಿ ಉದ್ಯಮ ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಹಿಂದೆ ಬೇರೆ ಬೇರೆ ದೇಶಗಳಿಂದ ಬಟ್ಟೆಗಳನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇತ್ತು. ಆದರೆ ಈಗ ಭಾರತದಿಂದ ಹೆಚ್ಚಿನ ಪ್ರಮಾಣದಲ್ಲಿ ಜವಳಿ ಉತ್ಪನ್ನಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಜವಳಿ ಕ್ಷೇತ್ರದಲ್ಲಿ ಕರ್ನಾಟಕ ದೇಶದಲ್ಲಿಯೇ ಆರನೇ ಸ್ಥಾನದಲ್ಲಿದೆ. ಜಾಗತಿಕ ಮಾರುಕಟ್ಟೆಯಲ್ಲಿ ನಮ್ಮ ಉತ್ಪನ್ನಗಳಿಗೆ ಇನ್ನಷ್ಟು ಬೇಡಿಕೆ ಸೃಷ್ಟಿಸಲು ಗುಣಮಟ್ಟ, ವಿನ್ಯಾಸ ಹಾಗೂ ರಫ್ತು ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಮಹತ್ವದ ಪಾತ್ರ ವಹಿಸಲಿವೆ ಎಂದರು.
ನೇಕಾರರ ಆರ್ಥಿಕ ಪರಿಸ್ಥಿತಿ ಗಂಭೀರವಾಗಿರುವುದು ಸರಕಾರದ ಗಮನದಲ್ಲಿದೆ. ನೇಕಾರರನ್ನು ಆರ್ಥಿಕವಾಗಿ ಸಬಲರನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರಲು ವಿವಿಧ ಸಬ್ಸಿಡಿ ಹಾಗೂ ರಿಯಾಯಿತಿ ಯೋಜನೆಗಳನ್ನು ನೀಡಲಾಗುತ್ತಿದೆ. ಜವಳಿ ನೀತಿಯ ಕುರಿತು ಸಂಪೂರ್ಣ ಮಾಹಿತಿ ಒದಗಿಸುವ ಉದ್ದೇಶದಿಂದ ಶೀಘ್ರದಲ್ಲಿಯೇ ವಿಧಾನಸೌಧದಲ್ಲಿ ವಿಶೇಷ ಕಾರ್ಯಾಗಾರ ಆಯೋಜಿಸುವ ಚಿಂತನೆಯಿದೆ. ಕೃಷಿ ಕ್ಷೇತ್ರದ ನಂತರ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಕ್ಷೇತ್ರಗಳಲ್ಲಿ ಜವಳಿ ಉದ್ಯಮವೂ ಒಂದಾಗಿದ್ದು, ಇದರ ಬೆಳವಣಿಗೆಗೆ ಸರಕಾರ ವಿಶೇಷ ಆದ್ಯತೆ ನೀಡಲಿದೆ ಎಂದು ತಿಳಿಸಿದರು.ಟೆಕ್ಸಟೈಲ್ ಪಾರ್ಕ್ ಗುರಿ: ಹಾವೇರಿ ಜಿಲ್ಲೆಯಲ್ಲಿ ಜವಳಿ ಉದ್ಯಮದ ಬೆಳವಣಿಗೆಗೆ ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ಈ ಹಿಂದೆ ಹನುಮನಮಟ್ಟಿಯಲ್ಲಿ 16 ಎಕರೆ ಜಾಗ ಗುರುತಿಸಲಾಗಿತ್ತು. ಆದರೆ ಕಾಲಾಂತರದಲ್ಲಿ ಯೋಜನೆ ಬಾಕಿ ಉಳಿದಿತ್ತು. ಇದೀಗ ತುಮ್ಮಿನಕಟ್ಟಿಯಲ್ಲಿ 16 ಎಕರೆ ಜಾಗ ಗುರುತಿಸಿ ಜವಳಿ ಉದ್ಯಮಕ್ಕೆ ಉತ್ತೇಜನ ನೀಡಲು ಉದ್ದೇಶಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಶೇ.60:40ರ ಸಹಭಾಗಿತ್ವದಲ್ಲಿ ಎರಡೂ ಕಡೆಗಳಲ್ಲಿಯೂ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಚಿಂತನೆಯಿದೆ.
ಜಿಲ್ಲೆಯಲ್ಲಿ ಈಗಾಗಲೇ 600 ಕೈಮಗ್ಗಗಳು ಹಾಗೂ 500ಕ್ಕೂ ಹೆಚ್ಚು ವಿದ್ಯುತ್ ಮಗ್ಗಗಳು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ಸಂಗತಿ. ಇವುಗಳ ಮೂಲಕ ಸುಮಾರು ಆರು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆತಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹತ್ತಿ ಉತ್ಪಾದನೆಗೂ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು. ಜವಳಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಜಾಗತಿಕ ಹೂಡಿಕೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಹೇಳಿದರು.
ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಾಧಿಕಾರ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಗ್ಯಾರಂಟಿ ಸಮಿತಿ ತಾಲೂಕಾಧ್ಯಕ್ಷ ಎಂ.ಎಂ. ಮೈದೂರ, ನೌಕರರ ಸಂಘದ ಜಿಲ್ಲಾಧ್ಯಕ್ಷ ಮಲ್ಲೇಶಪ್ಪ ಕರಿಗಾರ, ಡಾ. ಶಿವರಾಜ ಕುಲಕರ್ಣಿ, ಲಕ್ಷ್ಮಣ ತಳವಾರ, ಸಿದ್ದೇಶ ಎಂ.ಬಿ., ಜಿ.ವಿ. ಹಿರೇಗೌಡ್ರ, ಅಶೋಕ ಪ್ಯಾಟಿ, ಸಿದ್ದಪ್ಪ, ನಾರಾಯಣಪ್ಪ ಗಡ್ಡದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಉಪನಿರ್ದೇಶಕ ಭೋಜರಾಜ ಕಠಾರಿ ಸ್ವಾಗತಿಸಿದರು. ನಾಗವೇಣಿ ನಿರೂಪಿಸಿದರು.