ಜಿಪಂ ಸಿಇಒಗಳಿಂದ ತಾಪಂ, ಗ್ರಾಪಂ ಭೇಟಿ ಕಡ್ಡಾಯ: ಪ್ರಿಯಾಂಕ್‌ ಸೂಚನೆ

KannadaprabhaNewsNetwork | Published : Jan 3, 2024 1:45 AM

ಸಾರಾಂಶ

ಗ್ರಾಮೀಣ ಭಾಗದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಜಿಲ್ಲಾ ಪಂಚಾಯತಿ ಅಧಿಕಾರಿಗಳ ಶ್ರಮ ಮಹತ್ವದ್ದಾಗಿದೆ. ಹೀಗಾಗಿ ಕಡ್ಡಾಯವಾಗಿ ವಾರಕ್ಕೊಮ್ಮೆ ತಾಪಂ ಹಾಗೂ ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಸಿಇಓಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ತಾಲೂಕು ಹಾಗೂ ಗ್ರಾಮ ಪಂಚಾಯತಿಗಳ ಕಾರ್ಯವೈಖರಿಯಲ್ಲಿ ಸುಧಾರಣೆ ತರಲು ಹಾಗೂ ಗ್ರಾಮೀಣ ಮಟ್ಟದ ಜನರ ಸಮಸ್ಯೆಗಳನ್ನು ನಿವಾರಿಸಲು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಡ್ಡಾಯವಾಗಿ ವಾರಕ್ಕೊಮ್ಮೆ ತಾಪಂ ಹಾಗೂ ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಿಇಒಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿ ಜಿಲ್ಲೆಗಳಲ್ಲಿನ ಕಾಮಗಾರಿಗಳು ಸೇರಿ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದರು.ಗ್ರಾಮೀಣ ಭಾಗದಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುವಲ್ಲಿ ಜಿಲ್ಲಾ ಪಂಚಾಯತಿ ಅಧಿಕಾರಿಗಳ ಶ್ರಮ ಮಹತ್ವದ್ದಾಗಿದೆ. ಹೀಗಾಗಿ ಜಿಲ್ಲಾ ಪಂಚಾಯತಿ ಸಿಇಒಗಳು ಸೇರಿದಂತೆ ಹಿರಿಯ ಅಧಿಕಾರಿಗಳು ಗ್ರಾಮೀಣ ಮಟ್ಟದಲ್ಲಿ ಯೋಜನೆಗಳ ಆಶಯ ಹಾಗೂ ಅಗತ್ಯತೆ ಕುರಿತು ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ನೀಡಬೇಕು. ಇದು ಕಾರ್ಯಕ್ರಮಗಳನ್ನು ಮತ್ತಷ್ಟು ಜನಸ್ನೇಹಿಯಾಗಿ ರೂಪಿಸಲು ಅನುಕೂಲವಾಗಬಲ್ಲದು. ಅದಕ್ಕಾಗಿ ಜಿಪಂ ಸಿಇಒಗಳು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಪಂ ಮತ್ತು ಗ್ರಾಪಂ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.ಈ ವೇಳೆ ಕೆಲ ಜಿಪಂ ಸಿಇಒಗಳು ಸರ್ಕಾರದ ಆದೇಶಗಳು, ಸೂಚನೆಗಳಿಗೆ ಮಹತ್ವ ನೀಡದೆ, ತಮ್ಮದೇ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಪ್ರಿಯಾಂಕ್‌ ಖರ್ಗೆ, ಸರ್ಕಾರದ ಆದೇಶ ಪಾಲಿಸದ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡುವಂತೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇದೇ ವೇಳೆ ರಾಜ್ಯದ ಗ್ರಾಪಂಗಳಲ್ಲಿ 46,655 ಸಿಬ್ಬಂದಿಯಿದ್ದು, ಈವರೆಗೆ ಶೇ. 63ರಷ್ಟು ಸಿಬ್ಬಂದಿ ಮಾತ್ರ ಇ-ಹಾಜರಿಯನ್ನು ಬಳಸುತ್ತಿರುವ ಮಾಹಿತಿಯಿದೆ. ಶೇ. 100ರಷ್ಟು ಸಿಬ್ಬಂದಿ ಇ-ಹಾಜರಿ ಮಾಡುವಂತೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಇ-ಹಾಜರಾತಿ ಮಾಡದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹೇಶ್ವರನ್‌, ಪ್ರಧಾನ ಕಾರ್ಯದರ್ಶಿ ಅಜುಂ ಪರ್ವೇಜ್‌, ಆಯುಕ್ತೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಸೇರಿದಂತೆ ಇತರರಿದ್ದರು.ತನಿಖೆಗೆ ವೇಗ ನೀಡಲು ಸೂಚನೆ: ಗ್ರಾಪಂನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳ ವಿರುದ್ಧ ಇರುವ ಇಲಾಖಾ ತನಿಖೆಗಳು ಹಾಗೂ ಲೋಕಾಯುಕ್ತ ತನಿಖೆಗಳು ತ್ವರಿತವಾಗಿ ಆಗದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರಿಯಾಂಕ್‌ ಖರ್ಗೆ, 253 ಪಿಡಿಒ, 130 ಪಂಚಾಯತಿ ಕಾರ್ಯದರ್ಶಿಗಳು ಹಾಗೂ 32 ಇತರ ಸಿಬ್ಬಂದಿ ವಿರುದ್ಧ ಒಂದು ವರ್ಷಕ್ಕೂ ಹೆಚ್ಚು ಕಾಲ ಇಲಾಖಾ ತನಿಖೆ ನಡೆಯುತ್ತಿದೆ. ತನಿಖೆ, ವಿಚಾರಣೆಗೆ ವೇಗ ನೀಡಿ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸಬೇಕು ಹೇಳಿದರು.22 ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ನಿವೇಶನವಿಲ್ಲ : ಸುಸಜ್ಜಿತ ಕಟ್ಟಡಗಳಿಲ್ಲದ ಗ್ರಾಪಂಗಳಿಗೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ತಲಾ 20 ಲಕ್ಷ ರು. ಅನುದಾನ ನೀಡಲಾಗುತ್ತಿದೆ. ಈವರೆಗೆ 283 ಕಟ್ಟಡಗಳು ನಿರ್ಮಾಣಗೊಂಡಿದ್ದು, 151 ಕಟ್ಟಡಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ, 22 ಗ್ರಾಪಂಗಳಿಗೆ ಕಟ್ಟಡ ನಿರ್ಮಿಸಲು ನಿವೇಶನ ಲಭ್ಯವಾಗಬೇಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Share this article