ರೈತರ ಪಹಣಿಗೆ ಆಧಾರ್ ಜೋಡಣೆ ಕಾರ್ಯ ಶೇ.78 ಪೂರ್ಣ: ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ

KannadaprabhaNewsNetwork |  
Published : Jul 26, 2024, 01:42 AM IST
ಬಳ್ಳಾರಿಯ ಜಿಲ್ಲಾಡಳಿತ ಭವನ ಕಚೇರಿಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸುದ್ದಿಗೋಷ್ಠಿ ನಡೆಸಿದರು. ಎಸ್ಪಿ ಡಾ.ಶೋಭಾರಾಣಿ, ಎಡಿಸಿ ಮೊಹಮ್ಮದ್ ಝುಬೇರ್ ಇದ್ದರು.  | Kannada Prabha

ಸಾರಾಂಶ

ಸಣ್ಣ, ಅತಿಸಣ್ಣ ರೈತರನ್ನು ಗುರುತಿಸಲು ಮತ್ತು ಬೆಳೆ ಪರಿಹಾರ ವಿತರಣೆ ಅನುಕೂಲವಾಗುವಂತೆ ರೈತರ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ.

ಬಳ್ಳಾರಿ: ಸಣ್ಣ, ಅತಿಸಣ್ಣ ರೈತರನ್ನು ಗುರುತಿಸಲು ಮತ್ತು ಬೆಳೆ ಪರಿಹಾರ ವಿತರಣೆ ಅನುಕೂಲವಾಗುವಂತೆ ರೈತರ ಪಹಣಿಗಳಿಗೆ ಆಧಾರ್ ಜೋಡಣೆ ಮಾಡುವ ಕಾರ್ಯ ನಡೆಯುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ಶೇ.78 ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧಾರ್ ಜೋಡಣೆ ಕಾರ್ಯಕ್ಕೆ ಹೆಚ್ಚು ಆದ್ಯತೆ ನೀಡಿ ಕಾರ್ಯ ನಿರ್ವಹಿಸಲಾಗಿದೆ. ಉಳಿದವುಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು. ಪಹಣಿಗೆ ಆಧಾರ್ ಲಿಂಕ್ ಮಾಡುವುದರಿಂದ ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವುದನ್ನು ತಪ್ಪಿಸಬಹುದಾಗಿದೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ, ಅತಿಕ್ರಮಣ, ಭೂಗಳ್ಳರಿಂದ ಸಂರಕ್ಷಿಸಲು ಕಂದಾಯ ಇಲಾಖೆಯು “ಲ್ಯಾಂಡ್ ಬೀಟ್” ಎಂಬ ಹೊಸ ತಂತ್ರಾಂಶ ಅಭಿವೃದ್ಧಿಪಡಿಸಿದೆ. ಕಂದಾಯ ಇಲಾಖೆಯಡಿ ಬರುವ ಸರ್ಕಾರ, ಗೋಮಾಳ ಸೇರಿದಂತೆ ಸರ್ಕಾರಿ ಆಸ್ತಿಗಳ ಭೌಗೋಳಿಕ ಗಡಿ ಮತ್ತು ಸರ್ವೇ ನಂಬರ್ ಒಳಗೊಂಡ ಮಾಹಿತಿಯ ಡಿಜಿಟಲ್ ದಾಖಲೆಗಳನ್ನು ಈ ತಂತ್ರಾಂಶ ಹೊಂದಲಿದೆ. ಜಿಲ್ಲೆಯಲ್ಲಿ ಇದಕ್ಕಾಗಿ 55 ಸಾವಿರ ಆಸ್ತಿ ಗುರುತಿಸಲಾಗಿದೆ. ಶೇ.76 ಆಸ್ತಿಗಳಿಗೆ ಜಿಪಿಎಸ್ ದತ್ತಾಂಶ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಆಸ್ತಿ ಒತ್ತುವರಿ ತೆರವು ಪ್ರಕರಣಗಳಲ್ಲಿ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು. ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ:

ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಯಾವುದೇ ಕ್ಷಣದಲ್ಲಾದರೂ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವ ಸಾಧ್ಯತೆ ಇದೆ. ಸಂಭವನೀಯ ಪ್ರವಾಹ, ಬೆಳೆ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದರು.

ಮಳೆನೀರು, ನಿಂತ ನೀರಿನಿಂದ ಸಾಂಕ್ರಾಮಿಕ ರೋಗಗಳು ಬರುವ ಸಾಧ್ಯತೆ ಇದೆ. ಈ ಕುರಿತು ಡೆಂಘೀ, ಮಲೇರಿಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಡೆಂಘೀ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈ ವರೆಗೆ 114 ಪ್ರಕರಣ ದಾಖಲಾಗಿದ್ದು, ಪ್ರಸ್ತುತ 23 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಗುಣಮುಖರಾಗಿದ್ದಾರೆ. ಈ ವರೆಗೆ ಯಾವುದೇ ಸಾವು ಸಂಭವಿಸಿಲ್ಲ ಎಂದು ಖಚಿತಪಡಿಸಿದರು.

ರೈತರು ವಿಮೆ ಮಾಡಿಸಿಕೊಳ್ಳಲಿ ಜಿಲ್ಲೆಯಲ್ಲಿ ಮುಂಗಾರು ಆರಂಭವಾಗಿದ್ದು, ರೈತರು ಮುಂಜಾಗ್ರತಾ ಕ್ರಮವಾಗಿ ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ. ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನಕ್ಕೆ ಮುಂದಾಗಿದ್ದು, ಪ್ರವಾಹ ಹಾಗೂ ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರು ಪರಿಹಾರ ಪಡೆಯಲು ನೋಂದಾಯಿಸಿಕೊಳ್ಳಬೇಕಿದ್ದು, ವಿಮೆ ನೋಂದಣಿಗೆ ಇದು ಸಕಾಲವಾಗಿದೆ.

ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಿಕೊಳ್ಳುವಂತೆ ಗ್ರಾಪಂ ವ್ಯಾಪ್ತಿಯಲ್ಲಿ ಜಾಗೃತಿ ನೀಡಲಾಗುತ್ತಿದೆ. ಆಯಾ ತಾಲೂಕು ತಹಶೀಲ್ದಾರರಿಗೂ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನ ಕಾಯಿ ಹಾಗೂ ಈರುಳ್ಳಿ ಬೆಳೆಗಳಿಗೆ ವಿಮೆಗಾಗಿ ನೋಂದಾಯಿಸಲು ಜುಲೈ 31 ಮತ್ತು ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ ಹಾಗೂ ನೀರಾವರಿ ಬೆಳೆಗಳಾದ ಸಜ್ಜೆ, ತೊಗರಿ, ಭತ್ತ ಬೆಳೆಗಳಿಗೆ ಆಗಸ್ಟ್ 16ರ ವರೆಗೆ ವಿಮೆಗೆ ನೋಂದಾಯಿಸಿಕೊಳ್ಳಲು ಅವಕಾಶ ಇರುತ್ತದೆ. ಆಸಕ್ತ ರೈತರು ಸಮೀಪದ ರೈತ ಸಂಪರ್ಕ ಕೇಂದ್ರಗಳು, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕಚೇರಿ ಅಥವಾ ಬ್ಯಾಂಕ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆದು ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಎಸ್ಪಿ ಡಾ.ಶೋಭಾರಾಣಿ, ಎಡಿಸಿ ಮೊಹಮ್ಮದ್ ಝುಬೇರ್ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?