ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ

KannadaprabhaNewsNetwork |  
Published : Apr 07, 2025, 12:35 AM IST
ಚಿತ್ರ : 5ಎಂಡಿಕೆ1 : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಲಾಯಿತು.  | Kannada Prabha

ಸಾರಾಂಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಪ್ರತಿಭಟನೆ ನಡೆಸಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ತೆರಿಗೆ ಹೊರೆಯನ್ನು ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಾರ್ಟಿ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ. ದೇಶದ ಜನಸಾಮಾನ್ಯರ ಹಿತ ಕಾಪಾಡಲು ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಮುಕ್ಕಾಟಿರ ಅಪ್ಪಯ್ಯ ಅವರು ಕೇಂದ್ರ ಸರ್ಕಾರ ನಿರಂತರವಾಗಿ ತೆರಿಗೆಯನ್ನು ಏರಿಕೆ ಮಾಡುತ್ತಿದೆ ಮತ್ತು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ದುಬಾರಿಗೊಳಿಸುತ್ತಿದೆ. ದೇಶದ ಜನರು ನೆಮ್ಮದಿ ಕಳೆದುಕೊಂಡಿದ್ದು, ಆರ್ಥಿಕ ಸಂಕಷ್ಟದಲ್ಲಿಯೇ ಜೀವನ ಸಾಗಿಸುತ್ತಿದ್ದಾರೆ. ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ, ವಾಹನ ನೋಂದಣಿ ಶುಲ್ಕ, ನಂದಿನಿ ಹಾಲಿನ ಬೆಲೆ, ಬಸ್ ಪ್ರಯಾಣ ದರ, ಮದ್ಯದ ಬೆಲೆ, ವಿದ್ಯುತ್ ಶುಲ್ಕ, ವ್ಯಾಸಂಗ ಶುಲ್ಕ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿದೆ ಎಂದು ಟೀಕಿಸಿದರು.

ಕೇಂದ್ರ ಸರ್ಕಾರ ಟೋಲ್, ಔಷಧ, ವಿದೇಶಿ ಶಿಕ್ಷಣ, ಕೃಷಿ ಪರಿಕರಗಳ ದರ, ವೀಸಾ ಶುಲ್ಕ ಮತ್ತಿತರ ಶುಲ್ಕ ಹಾಗೂ ತೆರಿಗೆಯನ್ನು ದುಬಾರಿಗೊಳಿಸಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ದುಬಾರಿ ಶುಲ್ಕದಿಂದ ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವುದೇ ಕಷ್ಟವಾಗಿದೆ ಎಂದು ಆರೋಪಿಸಿದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಭೋಜಣ್ಣ ಸೋಮಯ್ಯ ಅವರು ಮಾತನಾಡಿ, ತೆರಿಗೆ ಹೊರೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸದಿದ್ದಲ್ಲಿ ರಾಜ್ಯ ವ್ಯಾಪಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಜನರಲ್ ತಿಮ್ಮಯ್ಯ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ.ಪೃಥ್ವಿ, ಎಸ್‌ಟಿ ಮೋರ್ಚಾದ ಅಧ್ಯಕ್ಷ ಹೆಚ್.ಎಂ.ರಮೇಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ