ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಪ್ ಸ್ವತಂತ್ರ ಸ್ಪರ್ಧೆ

KannadaprabhaNewsNetwork | Published : Jul 2, 2024 1:30 AM

ಸಾರಾಂಶ

ರಾಮನಗರ: ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವೂ ಯಾರಿಗೂ ಬೆಂಬಲ ನೀಡದೆ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಟಿ.ನಾಗಣ್ಣ ತಿಳಿಸಿದರು.

ರಾಮನಗರ: ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವೂ ಯಾರಿಗೂ ಬೆಂಬಲ ನೀಡದೆ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಟಿ.ನಾಗಣ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಲೋಕಸಭಾ ಚುನಾವಣೆ ವೇಳೆ ಪಕ್ಷವೂ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ಸೂಚಿಸಿತ್ತು. ಆದರೆ, ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಆಮ್ ಆದ್ಮಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದರು.

ಪಕ್ಷವನ್ನು ಬೂತ್ ಮಟ್ಟದಿಂದ ಕಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಇದರ ಮುಂದುವರೆದ ಭಾಗವಾಗಿ ರಾಮನಗರ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು, ಎಲ್ಲರಿಗೂ ಆಯ್ಕೆ ಪತ್ರವನ್ನು ವಿತರಣೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿಯ ಉದ್ದೇಶವಾಗಿದ್ದ 400 ಸ್ಥಾನ ಗೆಲ್ಲಲು ಅವಕಾಶ ಮಾಡಿಕೊಡಬಾರದು ಎಂಬ ಕಾರಣಕ್ಕಾಗಿ ಲೋಕಸಭಾ ಚುನಾವಣೆ ವೇಳೆ ಆಮ್ ಆದ್ಮಿ ಪಾರ್ಟಿ ಕಾಂಗ್ರೆಸ್ ನೊಂದಿಗೆ ಕೈ ಜೋಡಿಸಿತು. ಆ ಕಾರ್ಯದಲ್ಲಿ ಪಕ್ಷ ಯಶಸ್ವಿ ಕೂಡ ಆಯಿತು ಎಂದು ತಿಳಿಸಿದರು.

ಬಿಜೆಪಿಯ ಧೋರಣೆಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ ಬಿಟ್ಟು ಬಿಜೆಪಿಯು ಹಿಂದುತ್ವದ ಆಧಾರದ ಮೇಲೆ ಚುನಾವಣೆ ನಡೆಸಿತು. ಹಾಗಾಗಿ ರಾಮ ಮಂದಿರ ನಿರ್ಮಾಣವಾದ ಸ್ಥಳದಲ್ಲಿಯೇ ಬಿಜೆಪಿ ಅಭ್ಯರ್ಥಿ ಸೋತಿದ್ದಾರೆ. ಜತೆಗೆ, ಸೀತಾಮಾತೆಯ ಸೀತಾಪುರ ಹಾಗೂ ಹನುಮಂತ ನೆಲೆ ಅಂಜನಾದ್ರಿಬೆಟ್ಟ ಇರುವ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಸೋಲು ಕಂಡಿದ್ದಾರೆ ಎಂದು ಲೇವಡಿ ಮಾಡಿದರು.

2018ರ ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 5 ಲಕ್ಷ ಮತಗಳ ದಾಖಲೆಯ ಅಂತರದಲ್ಲಿ ಗೆಲುವು ಸಾಧಿಸಿ, ಲೋಕಸಭೆ ಪ್ರವೇಶಿಸಿದ್ದರು. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ವತಃ ಪ್ರಧಾನಿ ಮೋದಿ ಅವರ ವರ್ಚಸ್ಸು ಕುಂಠಿತವಾಗಿದೆ ಎಂಬುದಕ್ಕೆ1.5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿರುವುದೇ ಸಾಕ್ಷಿ ಎಂದು ಹೇಳಿದರು.

ಪಕ್ಷದ ಜಿಲ್ಲಾಧ್ಯಕ್ಷ ಬೈರೇಗೌಡ ಮಾತನಾಡಿ, ದೇಶದ ನಿವಾಸಿಗಳಿಗೆ ಅಚ್ಚೇ ದಿನ್ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿಯು ಇಂದು ದುರಾಡಳಿತ ನಡೆಸುತ್ತಿದೆ. ಪಕ್ಷದ ವರಿಷ್ಠ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸುಖಾಸುಮ್ಮನೆ ಬಂಧನ ಮಾಡಿದೆ ಎಂದು ಟೀಕಿಸಿದರು.

ಕಳೆದ ಹತ್ತು ವರ್ಷದಿಂದ ಬಿಜೆಪಿ ಪಕ್ಷವೂ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದೆ. ಯಾರಿಗಾದರೂ ಅಚ್ಛೇದಿನ್ ಬಂದಿದೆಯಾ? ಎಂದು ಪ್ರಶ್ನಿಸಿದ ಅವರು, ಜನಪರ ಆಡಳಿತ ನೀಡುವ ಬದಲು ಕೇಂದ್ರ ಸರ್ಕಾರ ಕೇವಲ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.ನೂತನ ಪದಾಧಿಕಾರಿಗಳ ಆಯ್ಕೆ:ಆಮ್ ಆದ್ಮಿ ಪಕ್ಷದ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಆಯ್ಕೆ ಪತ್ರವನ್ನು ಇದೇ ವೇಳೆ ವಿತರಣೆ ಮಾಡಲಾಯಿತು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಹಿಳಾ ಘಟಕ ಅಧ್ಯಕ್ಷೆ ಕುಶಲ ಸ್ವಾಮಿ, ಮುಖಂಡರಾದ ನಂಜಪ್ಪ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಇದ್ದರು.

1ಕೆಆರ್ ಎಂಎನ್ 3.ಜೆಪಿಜಿ

ಆಮ್ ಆದ್ಮಿ ಪಕ್ಷದ ಜಿಲ್ಲಾ ಮತ್ತು ತಾಲೂಕು ಘಟಕಕ್ಕೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಆಯ್ಕೆ ಪತ್ರವನ್ನು ಇದೇ ವೇಳೆ ವಿತರಣೆ ಮಾಡಲಾಯಿತು.

Share this article