ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ ಮಹಾವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೃಷಿ ಶಿಕ್ಷಣ ಮಾಹಿತಿ ಕೊಡುವ ಉದ್ದೇಶದಿಂದ ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪಿಯುಸಿ ಆದ ನಂತರ ಕೃಷಿ ಪದವಿಗಳು ಹಾಗೂ ಅವುಗಳಲ್ಲಿರುವ ಅವಕಾಶಗಳು, ಆಯ್ಕೆ ಬಗ್ಗೆ ಅರಿವಿನ ಕೊರತೆ ಹೋಗಲಾಡಿಸಲಾಗುತ್ತದೆ. ರಾಜ್ಯದಲ್ಲಿರುವ ಕೃಷಿ ಸಂಬಂಧಿತ ಶೈಕ್ಷಣಿಕ ಸಂಸ್ಥೆಗಳು ಮತ್ತು ಅಲ್ಲಿರುವ ಪದವಿಗಳು ಹಾಗೂ ಪ್ರವೇಶ ಪ್ರಕ್ರಿಯೆ ಬಗ್ಗೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.ದೇಶದ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಯಾಗಿರುವುದನ್ನು ಗಮನಿಸಿದ್ದೇವೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರಗಳು ಕೋಟ್ಯಂತರ ರುಪಾಯಿ ವೆಚ್ಚ ಮಾಡುತ್ತಿದೆ. ಸರ್ವರಿಗೂ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಶಾಲಾ-ಕಾಲೇಜು, ವಿಶ್ವವಿದ್ಯಾಲಯ, ಶೈಕ್ಷಣಿ ಸಂಸ್ಥೆ ಸ್ಥಾಪಿಸುವ ಮೂಲಕ ಶಿಕ್ಷಣವನ್ನು ಗ್ರಾಮೀಣ ವಿದ್ಯಾರ್ಥಿಗಳ ಬಳಿಗೆ ಕೊಂಡ್ಯೂಯುವ ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳು ತಮ್ಮ ಬೌದ್ಧಿಕ ಸಾಮರ್ಥ್ಯ ಹಾಗೂ ಬುದ್ಧಿಮಟ್ಟ ಹೆಚ್ಚಳ ನಮ್ಮ ಮುಂದಿರುವ ದೊಡ್ಡ ಸವಾಲಾಗಿದೆ. ಬುದ್ಧಿ ಯಾರ ಸ್ವತ್ತೂ ಅಲ್ಲ. ವಿದ್ಯಾರ್ಥಿಗಳು ಬದ್ಧತೆ ಹಾಗೂ ಏಕಾಗ್ರತೆಯಿಂದ ಅಧ್ಯಯನಶೀಲರಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸುಧಾಕರ್ ಸಲಹೆ ಮಾಡಿದರು.
ಚಿತ್ರದುರ್ಗ ಜಿಲ್ಲೆ ಆರ್ಥಿಕವಾಗಿ ಹಿಂದುಳಿದಿರಬಹುದು. ಆದರೆ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದೆ. ಹೊಳಲ್ಕೆರೆ ತಾಲೂಕು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪದವಿ ಪಡೆದಿದ್ದು, ದೇಶ-ವಿದೇಶಗಳಲ್ಲಿಯೂ ಪದವೀಧರರು ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆ ಸಂಗತಿ ಎಂದು ಸಂತಸ ವ್ಯಕ್ತಪಡಿಸಿದರು. ಚಳ್ಳಕೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ ವಿಷಯದ ಉಪನ್ಯಾಸಕಿ ಶಾಂತಕುಮಾರಿ ಮಾತನಾಡಿ, ಕೃಷಿ ಶಿಕ್ಷಣ ಸುಗ್ಗಿ ಕಾರ್ಯಕ್ರಮ ಜಿಲ್ಲೆ ಪದವಿಪೂರ್ವ ವಿಜ್ಞಾನ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದ್ದು, ಪಿಯು ನಂತರದಲ್ಲಿ ಕೃಷಿ ಸಂಬಂಧಿತ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಸಾಕಷ್ಟು ಮಾಹಿತಿ ನೀಡಲಿದೆ ಎಂದರು. ಹರಿಯಬ್ಬೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಭೌತಶಾಸ್ತ ವಿಷಯದ ಉಪನ್ಯಾಸಕ ದತ್ತಾತ್ರೇಯ ಮಾತನಾಡಿದರು.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ.ಬಸವರಾಜ್, ಡಾ.ಬಿ.ಕೆ ಕುಮಾರಸ್ವಾಮಿ ಹಾಗೂ ಕುಲಸಚಿವ ಡಾ.ಕೆ.ಸಿ.ಶಶಿಧರ್, ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಕೆ.ಮಂಜಪ್ಪ, ಪದವಿಪೂರ್ವ ಶಿಕ್ಷಣ ಇಲಾಖೆ ಪುಟ್ಟಸ್ವಾಮಿ ಇದ್ದರು.